ಸಾರಾಂಶ
ಗ್ರಾಮೀಣ ಭಾಗಗಳಲ್ಲಿ ಆರ್‌ಒ ಘಟಕಗಳನ್ನು ಶುದ್ಧಗೊಳಿಸಿಟ್ಟುಕೊಳ್ಳಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ಸೂಚಿಸಿದರು.
ಬಳ್ಳಾರಿ: ಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಸಚಿವ ಬಿ. ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ವಿಮ್ಸ್ ಆಡಳಿತ ಭವನದ ಸಭಾಂಗಣದಲ್ಲಿ ಬರ ನಿರ್ವಹಣೆಯ ಕುರಿತು ಜರುಗಿದ ಜಿಲ್ಲಾ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಬರಬಹುದಾದ ಗ್ರಾಮಗಳನ್ನು ಗುರುತಿಸಿ, ಖಾಸಗಿ ಬೋರ್ವೆಲ್ ಮತ್ತು ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಖ್ಯವಾಗಿ ಬಳ್ಳಾರಿ ತಾಲೂಕಿನ ಹರಗಿನದೋಣಿ, ಹಲಕುಂದಿ ಗ್ರಾಮಗಳಲ್ಲಿ ಉಲ್ಬಣವಾಗುವ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಭಾಗಗಳಲ್ಲಿ ಆರ್‌ಒ ಘಟಕಗಳನ್ನು ಶುದ್ಧಗೊಳಿಸಿಟ್ಟುಕೊಳ್ಳಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಬಳ್ಳಾರಿ ಹೋಬಳಿ ಮತ್ತು ಸಂಡೂರು ಹೋಬಳಿಯಲ್ಲಿ ಮೇವಿನ ಬ್ಯಾಂಕ್ ತೆರೆಯಲಾಗುವುದು ಎಂದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಸ್ಪಿ ರಂಜಿತ್ ಕುಮಾರ್ ಬಂಡಾರು, ತಹಸೀಲ್ದಾರ್ ಗುರುರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.