ಸಾರಾಂಶ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಕನ್ನಡಪ್ರಭ ವಾರ್ತೆ ಯಾದಗಿರಿ
ತೀವ್ರ ಬರ ಇರುವ ಹಿನ್ನೆಲೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ಕಡೆಗಳಲ್ಲಿ ಖಾಸಗಿ ಬೋರ್‌ವೆಲ್‌ಗಳ ನೀರನ್ನು ಪ್ರಥಮ ಆದ್ಯತೆ ಮೇಲೆ ಪಡೆದು ನೀರು ಕಲ್ಪಿಸಬೇಕು. ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ಜೊತೆ ಸಕಾಲಕ್ಕೆ ಬಿಲ್ಲು ಪಾವತಿಯಾಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.ಜಿಲ್ಲೆಯ ನಾರಾಯಣಪುರ ಜಲಾಶಯ, ಭೀಮ ನದಿ, ನೀರು ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು, ಈಗಾಗಲೇ ರಚಿಸಲಾಗಿರುವ ತಂಡಗಳು ತೀವ್ರ ನಿಗಾ ಇಡುವಂತೆ ಸೂಚಿಸಿದ ಅವರು, ಜನ-ಜಾನುವಾರುಗಳಿಗೆ ಕುಡಿಯಲು ನೀರು ಹಾಗೂ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಲು ತಿಳಿಸಿದರು.
ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕರು ಮಾತನಾಡಿ 47 ವಾರಗಳ ಕಾಲ ಉಪಯೋಗವಾಗುವಸ್ಟು ಮೇವಿನ ಲಭ್ಯತೆ ಇದೆ ಎಂದು ಅವರು ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.