ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ವಿವಿಧ ಕಲ್ಯಾಣ ಯೋಜನೆಗಳನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಿ, ಸಮುದಾಯದ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
ಪಾರದರ್ಶಕ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ, ಬಾಕಿ ಅರ್ಜಿಗಳ ಶೀಘ್ರ ವಿಲೇವಾರಿಗೆ ನಿರ್ದೇಶನಕನ್ನಡಪ್ರಭ ವಾರ್ತೆ ಗದಗ
ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ವಿವಿಧ ಕಲ್ಯಾಣ ಯೋಜನೆಗಳನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಿ, ಸಮುದಾಯದ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿಗಮದ ಅಧ್ಯಕ್ಷ ಎಂ. ರಾಮಪ್ಪ ಸೂಚಿಸಿದರು.ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ನಡೆದ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕು. ಜನರಲ್ಲಿ ಯೋಜನೆಗಳ ಕುರಿತು ಅರಿವು ಮೂಡಿಸಿ, ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ಸಿಗುವಂತೆ ನೋಡಿಕೊಳ್ಳಬೇಕು. ಯುವಜನರು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಲು ಹಾಗೂ ಮಹಿಳೆಯರು ಸ್ವಾವಲಂಬಿಗಳಾಗಲು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು. ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ ಮಾತನಾಡಿ, ಅಧಿಕಾರಿಗಳು ಕಾಲಕಾಲಕ್ಕೆ ಪ್ರಗತಿ ಪರಿಶೀಲಿಸಿ, ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು ಎಂದರು.
ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಕುರಿ ಮೇಕೆ ಸಾಕಾಣಿಕೆ ಯೋಜನೆಯಡಿ ತಲಾ ₹1 ಲಕ್ಷ ಘಟಕ ವೆಚ್ಚದಲ್ಲಿ ₹50 ಸಾವಿರ ಸಹಾಯಧನ ಹಾಗೂ ₹50 ಸಾವಿರ ಸಾಲ (ಶೇ.4 ಬಡ್ಡಿ, 36 ಕಂತು) ನೀಡಲಾಗುತ್ತದೆ. ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆಯಡಿ 10 ಮಹಿಳೆಯರಿರುವ ಸ್ವಸಹಾಯ ಸಂಘಗಳಿಗೆ 5 ಲಕ್ಷ (2.50 ಲಕ್ಷ ಸಹಾಯಧನ, 2.50 ಲಕ್ಷ ಸಾಲ) ನೆರವು ಲಭ್ಯವಿದೆ. ಭೂ ಒಡೆತನ ಯೋಜನೆಯಡಿ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ 10 ಕಿಮೀ ವ್ಯಾಪ್ತಿಯೊಳಗೆ ಜಮೀನು ಖರೀದಿಸಿ ನೀಡಲಾಗುತ್ತಿದ್ದು, ಬೆಂಗಳೂರು ಸುತ್ತಮುತ್ತಲಿನ 5 ಜಿಲ್ಲೆಗಳಿಗೆ 25 ಲಕ್ಷ ಹಾಗೂ ಉಳಿದ ಜಿಲ್ಲೆಗಳಿಗೆ 20 ಲಕ್ಷ ಘಟಕ ವೆಚ್ಚದಲ್ಲಿ ಶೇ.50 ಸಹಾಯಧನ ಮತ್ತು ಶೇ.50 ಸಾಲವಿದೆ. ಅಲ್ಲದೆ ಗಂಗಾ ಕಲ್ಯಾಣ ಯೋಜನೆಯಡಿ 1.20ರಿಂದ 5 ಎಕರೆ ಜಮೀನಿರುವ ರೈತರಿಗೆ ಕೊಳವೆಬಾವಿ ಹಾಗೂ ಬ್ಯಾಂಕ್ ಸಹಯೋಗದಲ್ಲಿ ಸಣ್ಣ ಕೈಗಾರಿಕೆ, ವಾಹನ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ ಎಂದು ವಿವರಿಸಿದರು.ಸಭೆಯಲ್ಲಿ ಎಸ್ಪಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸುಮಾ, ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ. ಯುವಜನರು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಲು ಹಾಗೂ ಮಹಿಳೆಯರು ಸ್ವಾವಲಂಬಿಗಳಾಗಲು ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಬೇಕು.ಎಂ. ರಾಮಪ್ಪ, ಅಧ್ಯಕ್ಷರು, ಕರ್ನಾಟಕ ಬೋವಿ ಅಭಿವೃದ್ಧಿ ನಿಗಮ