ಗ್ರಾಮೀಣರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಬ್ಯಾಡಗಿ: ಗ್ರಾಮೀಣ ಭಾಗದಲ್ಲಿ ಸಮಯಕ್ಕೆ ಸರಿಯಾಗಿ ಬಸ್‌ಗಳು ಸಂಚರಿಸುತ್ತಿಲ್ಲ ಎಂಬ ದೂರುಗಳು ಸಾಕಷ್ಟು ಕೇಳಿಬರುತ್ತಿವೆ. ಇದರಿಂದ ವಿದ್ಯಾರ್ಥಿಗಳು, ರೈತರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸು ವಂತಾಗಿದೆ. ಇನ್ನು ಮುಂದೆ ಗ್ರಾಮೀಣರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ತಾಲೂಕಿನ ಕುಮ್ಮೂರು ಗ್ರಾಮದ ಫಾಸಿ ಪ್ರಭಾವತಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಕಾಗಿನೆಲೆ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬರಗಾಲವಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸಿ: ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದೆ. ಅಧಿಕಾರಿಗಳು ಕೇವಲ ಕಚೇರಿಗೆ ಸೀಮಿತವಾಗದೆ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕು. ಸಣ್ಣ ನೀರಾವರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮ ಲ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಕೆರೆ, ಕಟ್ಟೆಗಳ ನಿರ್ವಹಣೆಗೂ ಆದ್ಯತೆ ನೀಡಬೇಕು. ಜನರಿಗೆ ನೀರಿನ ಸಮಸ್ಯೆ ಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯದಿಂದ ಮುಂದಾಗುವ ಅನಾಹುತಗಳಿಗೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿದ್ಯುತ್ ಸಮಸ್ಯೆ ಪರಿಹರಿಸಿ: ಗ್ರಾಮೀಣ ಭಾಗದಲ್ಲಿ ರೈತರಿಗೆ ನಿಯಮಾನುಸಾರ 7 ಗಂಟೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳು ಸಭೆಯಲ್ಲಿ ಹೆಚ್ಚಾಗಿ ಕೇಳಿಬಂದವು. ಈ ಹಿನ್ನೆಲೆಯಲ್ಲಿ ಹೆಸ್ಕಾಂ ಎಇಇ ರಾಜು ಅರಳಿಕಟ್ಟಿ ಅವರನ್ನು ಪ್ರಶ್ನಿಸಿದ ಶಾಸಕರು, ರೈತರಿಗೆ ವಿದ್ಯುತ್ ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು. ಯಾವ ಗ್ರಾಮದಲ್ಲಿ, ಯಾವ ರೈತರಿಗೆ ತೊಂದರೆಯಾಗುತ್ತಿದೆ ಎಂಬುದನ್ನು ಗುರುತಿಸಿ ತಕ್ಷಣ ಸಮಸ್ಯೆ ಬಗೆಹರಿಸಬೇಕು. ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ: ಪ್ರಜಾಸೇವೆ ಆಂದೋಲನದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 51 ಅರ್ಜಿಗಳು ಸಲ್ಲಿಕೆಯಾದವು. ಈ ಪೈಕಿ ಎರಡು ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು. ಉಳಿದ 49 ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ವರ್ಗಾಯಿಸಿ, ಆದ್ಯತೆಯ ಮೇರೆಗೆ ಪರಿಶೀಲಿಸಿ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸಾರಿಕಾ ಸಿಂಗನಮಕ್ಕಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಕೆ.ಎಂ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಎಸ್.ಆರ್. ಪಾಟೀಲ, ಮುಖಂಡರಾದ ಮಂಜನಗೌಡ ಲಿಂಗನಗೌಡ್ರ, ಸುರೇಶ ಮೆಣಸಿನಹಾಳ, ಸುಭಾಸ್ ಮಣ್ಣಮ್ಮನವರ, ಆರೋಗ್ಯಾಧಿಕಾರಿ ಡಾ.ರಾಘವೇಂದ್ರ, ಸೇರಿದಂತೆ ಕಂದಾಯ ಇಲಾಖೆಯ ಶಿರಸ್ತೇದಾರರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.ಅರ್ಹ ಫಲಾನುಭವಿಗಳಿಗೆ ತಲುಪಬೇಕು: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಪ್ರಜಾಸೇವೆ ಆಂದೋಲನ ನಡೆಸಲಾಗುತ್ತಿದೆ, ಅಧಿಕಾರಿಗಳು ಇದರ ಮಹತ್ವ ಅರಿತು ಜನರ ಅಹವಾಲುಗಳಿಗೆ ಸ್ಪಂದಿಸಿ ಕಾಲಮಿತಿಯೊಳಗೆ ಪರಿಹಾರ ಒದಗಿಸಿ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.