ಅನಧಿಕೃತ ಬಡಾವಣೆಗಳಲ್ಲಿ ಬಡವರು ಮಧ್ಯವರ್ತಿಗಳ ಮೂಲಕ ನಿವೇಶನ ಖರೀದಿಸಿ ಮೋಸ ಹೋಗುತ್ತಿದ್ದಾರೆ. ಅದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ಸೂಚಿಸಲಾಗಿದೆ. ಬೋಗಸ್ ದಾಖಲೆಗಳನ್ನು ಸೃಷ್ಟಿಸಿ ಜನರಿಗೆ ನೀಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಪಿಡಿಒಗಳಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.
ಬಂಗಾರಪೇಟೆ: ತಾಲೂಕಿನ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಸಮಸ್ಯೆ ಕಂಡುಬಂದ ಕೂಡಲೇ ಸ್ಪಂದಿಸುವಂತೆ ಗ್ರಾಮ ಪಂಚಾಯಿತಿ ಪಿಡಿಒಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿಳಿಸಿದರು.
ನಗರಸಭೆ ಸಭಾಂಗಣದಲ್ಲಿ ಆಡಳಿತಾಧಿಕಾರಿಗಳು, ಗ್ರಾಮ ಪಂಚಾಯಿತಿ ಪಿಡಿಒಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳು ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಸಮಗ್ರವಾಗಿ ಚರ್ಚಿಸಲಾಗಿದೆ ಎಂದರು.ತಾಯಂದಿರು ಹಾಗೂ ಜಾನುವಾರುಗಳಿಗೆ ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಎಲ್ಲಿಯಾದರೂ ನೀರಿನ ಸಮಸ್ಯೆ ಕಂಡುಬಂದರೂ ತಮ್ಮ ಗಮನಕ್ಕೆ ತಂದ ತಕ್ಷಣ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಅನಧಿಕೃತ ಬಡಾವಣೆಗಳಲ್ಲಿ ಬಡವರು ಮಧ್ಯವರ್ತಿಗಳ ಮೂಲಕ ನಿವೇಶನ ಖರೀದಿಸಿ ಮೋಸ ಹೋಗುತ್ತಿದ್ದಾರೆ. ಅದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ಸೂಚಿಸಲಾಗಿದೆ. ಬೋಗಸ್ ದಾಖಲೆಗಳನ್ನು ಸೃಷ್ಟಿಸಿ ಜನರಿಗೆ ನೀಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಪಿಡಿಒಗಳಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಕಂದಾಯವನ್ನು ಕಡ್ಡಾಯವಾಗಿ ವಸೂಲಿ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಸರ್ಕಾರದ ಮಹತ್ವವಾದ ಯೋಜನೆಗಳಲ್ಲಿ ಒಂದಾದ ಭಾರತ್ ಜೋಡೋ ಯುವ ಸಂಘಟನೆಗಳನ್ನು ರಚಿಸಲು ಮುಂದಿನ ದಿನಗಳಲ್ಲಿ ಸಭೆಯನ್ನು ಕರೆಯಲಾಗುತ್ತದೆ ಎಂದರು.
ಸಭೆಯಲ್ಲಿ ನಗರಸಭೆ ಕಮಿಷನರ್ ಜಗ್ಗಾರೆಡ್ಡಿ, ತಾಲೂಕು ಪಂಚಾಯಿತಿ ಇಒ ರವಿಕುಮಾರ್, ಬಿಇಒ ಚಂದ್ರಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳು ಉಪಸ್ಥಿತರಿದ್ದರು.