ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅ.24 ರಂದು ನಡೆಯುವ ಭೂಮಾಪಕರ ಹುದ್ದೆಗಳ, ನೇರ ನೇಮಕಾತಿ ಪರೀಕ್ಷೆ ಹಾಗೂ ಅ.25 ರಂದು ನಡೆಸಲ್ಪಡುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆ, ಅ.26 ರಂದು ನರ್ಸಿಂಗ್/ ಫಾರ್ಮಸಿ ಅಧಿಕಾರಿ ಹಾಗೂ ಅ.27 ರಂದು ನಡೆಯುವ ಶಿಕ್ಷಕರ/ದ್ವಿದಸ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅ.24 ರಂದು ನಡೆಯುವ ಭೂಮಾಪಕರ ಹುದ್ದೆಗಳ, ನೇರ ನೇಮಕಾತಿ ಪರೀಕ್ಷೆ ಹಾಗೂ ಅ.25 ರಂದು ನಡೆಸಲ್ಪಡುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆ, ಅ.26 ರಂದು ನರ್ಸಿಂಗ್/ ಫಾರ್ಮಸಿ ಅಧಿಕಾರಿ ಹಾಗೂ ಅ.27 ರಂದು ನಡೆಯುವ ಶಿಕ್ಷಕರ/ದ್ವಿದಸ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅಧಿಕಾರಿಗಳಿಗೆ ಸೂಚಿಸಿದರು.ಭೂಮಾಪಕರ ಹುದ್ದೆಗಳ ಹಾಗೂ ಗ್ರಾಮ ಆಡಳಿತ ಅಧಿಕಾರಿ, ಫಾರ್ಮಸಿ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ನಡೆಸುವ ಕುರಿತಂತೆ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರೀಕ್ಷೆಗಳ ಸಂದರ್ಭ ಯಾವುದೇ ಲೋಪಗಳಿಗೆ ಅವಕಾಶ ನೀಡದೆ ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಪರೀಕ್ಷೆಗಳನ್ನು ನಡೆಸಬೇಕು. ಬೆಳಗ್ಗೆ ಹಾಗೂ ಮಧ್ಯಾಹ್ನದ ಎರಡು ಅವಧಿಗಳಲ್ಲಿ ಸಮಯ ಪರಿಪಾಲನೆಯೊಂದಿಗೆ ಪರೀಕ್ಷೆ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಭೂಮಾಪಕರ ಹುದ್ದೆಗಳಿಗೆ 6 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, ಅ.24 ರಂದು ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ. 2561 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದರಂತೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅ.25 ರಂದು ಪರೀಕ್ಷೆ ನಡೆಯಲಿದ್ದು, 25 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 9626 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು,. ಪರೀಕ್ಷೆ ಬೆಳಗ್ಗೆ 10-30 ರಿಂದ 12-30 ವರೆಗೆ ಹಾಗೂ 2-30 ರಿಂದ 4-30 ರವರೆಗೆ ನಡೆಯಲಿದೆ. 3 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಅ.26 ರಂದು ನರ್ಸಿಂಗ್, ಫಾರ್ಮಸಿ ಅಧಿಕಾರಿ ಹುದ್ದೆಗಳಿಗೆ ಬೆಳಗ್ಗೆ 10-30 ರಿಂದ 12-30 ವರೆಗೆ ಹಾಗೂ 2-30 ರಿಂದ 4-30 ವರೆಗೆ ಪರೀಕ್ಷೆ ನಡೆಯಲಿದೆ. 3 ಪರೀಕ್ಷಾ ಕೇಂದ್ರಗಳಲ್ಲಿ 1218 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಅ.27 ರಂದು ಮಧ್ಯಾಹ್ನ 3ರಿಂದ ಸಂಜೆ 5 ರವರೆಗೆ ವಸತಿ ಶಿಕ್ಷಕರ, ದ್ವಿತೀಯ ದರ್ಜೆ ಸಹಾಯಕರ (ದ್ವಿ.ದ.ಸ) ಹುದ್ದೆಗಳಿಗೆ 1 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. 535 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಪರೀಕ್ಷಾ ಮೇಲ್ವಿಚಾರಕರು, ಉಪಮುಖ್ಯ ಅಧೀಕ್ಷಕರು ಮತ್ತು ಪ್ರಶ್ನೆ ಪತ್ರಿಕೆ ನಿರ್ವಹಿಸುವವರು ಯಾವುದೇ ಲೋಪಕ್ಕೆ ಅವಕಾಶ ನೀಡದೇ, ವ್ಯವಸ್ಥಿತ ರೀತಿಯಲ್ಲಿ ನಿಭಾಯಿಸಬೇಕು. ಗೌಪ್ಯ ಸಾಮಗ್ರಿಗಳನ್ನು ನೀಡುವಾಗ ಹಾಗೂ ಪಡೆಯುವಾಗ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಆಸನಗಳ ವ್ಯವಸ್ಥೆ ಸರಿಯಾಗಿರಬೇಕು. ಸಿಸಿಟಿವಿ ಕಾರ್ಯನಿರ್ವಹಿಸುತ್ತಿರಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಕೊಠಡಿ ಮೇಲ್ವಿಚಾರಕರು ಎಲ್ಲ ಮಾರ್ಗಸೂಚಿಗಳನ್ನು ಅರಿತು, ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಪರೀಕ್ಷೆಗಳಲ್ಲಿ ಕೈಗಡಿಯಾರ, ಕ್ಯಾಲ್ಕುಲೇಟರ್, ಬ್ಲುಟೂಥ್ ಡಿವೈಸ್, ಮೋಬೈಲ್, ಪೆನ್ ಡ್ರೈವ್ಗಳು, ಇಯರ್ ಫೋನ್, ಮೈಕ್ರೋಫೋನ್ ಸಾಧನಗಳನ್ನು ಬಳಸುವದಕ್ಕೆ ನಿಷೇಧವಿದ್ದು, ಈ ಕುರಿತು ತೀವ್ರ ನಿಗಾ ಇಡುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ಇತ್ತೀಚೆಗೆ ಪೋಲಿಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಿರುವುದಕ್ಕೆ ಅಭಿನಂದಿಸಿದ ಜಿಲ್ಲಾಧಿಕಾರಿ, ಈ ಪರೀಕ್ಷೆಯೂ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿಕ್ ಪೃಥ್ವಿಕ್ ಶಂಕರ್ ಅವರು, ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲೂ ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಸಿಸಿಟಿವಿ ಸುಸ್ಥಿತಿಯಲ್ಲಿರುವ ಬಗ್ಗೆ ಮುಂಚಿತವಾಗಿ ಖಾತ್ರಿಪಡಿಸಿಕೊಳ್ಳಬೇಕು. ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲು ಅವರು ಸೂಚಿಸಿದರು.ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುದೀಪ್ ಮಾತನಾಡಿ, ಓಎಂಆರ್ ಉತ್ತರ ಪತ್ರಿಕೆ ಹಾಗೂ ಪ್ರಶ್ನೆ ಪತ್ರಿಕೆ ನಿರ್ವಹಣೆ, ಅಭ್ಯರ್ಥಿಗಳ ಪ್ರವೇಶ ಪತ್ರ ಪರಿಶೀಲಿಸಲು ಮೇಲ್ವಿಚಾರಕರಿಗೆ ತಿಳಿಸಲಾಗಿದೆ. ಪರೀಕ್ಷೆಯಲ್ಲಿ ಆಹಾರ ಪದಾರ್ಥ, ವಾಟರ್ ಬಾಟಲ್, ಶೂಗಳ ನಿಷೇಧವಿದೆ. ಅಭ್ಯರ್ಥಿಗಳ ವಿವರಗಳನ್ನು ಕ್ಯುಆರ್ ಕೋಡ್ ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ರೂಪಿಸಿದೆ. ವಸ್ತ್ರಸಂಹಿತೆ ಪಾಲಿಸಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆಯ ರಹಸ್ಯ ಬಂಡಲ್ ಸಾಗಿಸಲು ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ ಎಂದರು. ಪರೀಕ್ಷಾ ಕೇಂದ್ರಗಳಿಗೆ ಜಾಮರ್ ಅಳವಡಿಕೆ ಸೇರಿದಂತೆ ಇನ್ನಿತರ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮಾಸ್ಟರ್ ಟ್ರೈನರ್ ಮಲ್ಲನಗೌಡ ಹಾಗೂ ಶಿವಾನಂದ ಮತ್ತು ಪರೀಕ್ಷೆ ಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.