ಕೊಪ್ಪಳ ನಗರದ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದರು.

ಕೊಪ್ಪಳ: ದೇಶದ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೋ ಹನಿ ಹಾಕಿಸಿ, ಅವರನ್ನು ಆರೋಗ್ಯವಂತರನ್ನಾಗಿಸಬೇಕು ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.

ನಗರದ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿದೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಜಿಲ್ಲೆಯಲ್ಲಿ ಜು. 1ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಮ್ಮ ದೇಶ ಈಗಾಗಲೆ ಪೋಲಿಯೋ ಮುಕ್ತವಾಗಿದೆ. ಆದರೆ, ಪಕ್ಕದ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಮ್ಮ ದೇಶದ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡು, ಪ್ರತಿಯೊಬ್ಬ ಮಗು ಆರೋಗ್ಯವಂತವಾಗಿರಲು ಶ್ರಮಿಸಲಾಗುತ್ತಿದೆ. ಅರ್ಹ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮಾತನಾಡಿ, ಪೋಲಿಯೋ ಕೇಂದ್ರಗಳಿಗೆ ಪಾಲಕರು ಭೇಟಿ ನೀಡಿ, 5 ವರ್ಷದೊಳಗಿನ ತಮ್ಮ ಮಕ್ಕಳಿಗೆ ತಪ್ಪದೇ 2 ಹನಿ ಪೋಲಿಯೋ ಲಸಿಕೆ ಹಾಕಿಸುವಂತೆ ಹೇಳಿದರು.

ಜಿಪಂ ಸಿಇಒ ವರ್ಣಿತ್ ನೇಗಿ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಲು ನಗರಸಭೆ, ಪಪಂ, ಗ್ರಾಪಂ ಹಾಗೂ ಶಿಕ್ಷಣ ಇಲಾಖೆಯಿಂದ ವಿವಿಧ ಹಂತಗಳಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದೆ ಎಂದರು.

ಡಿಎಚ್‌ಒ ಡಾ. ಲಿಂಗರಾಜು, ಟಿ.ಆರ್.ಸಿ.ಎಚ್. ಅಧಿಕಾರಿ ಡಾ. ಪ್ರಕಾಶ ವಿ., ಜಿಲ್ಲಾ ರೋಗವಾಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಗೋನಾಳ ಕುಮಾರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ತಾಲೂಕು ಅಧಿಕಾರಿ ಡಾ. ರಾಮಾಂಜನೇಯ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಜ್ಯೋತಿ ಎಂ. ಗೊಂಡಬಾಳ, ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಅಂಗಡಿ, ಮಾಜಿ ಜಿಲ್ಲಾ ಗೌರ್ನರ್ ಡಾ. ಕೆ.ಜಿ. ಕುಲಕರ್ಣಿ, ಡಾ. ರಾಧಾ ಕುಲಕರ್ಣಿ ಭಾಗವಹಿಸಿದ್ದರು.