ಸಾರಾಂಶ
ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಸೇರಿದಂತೆ ಇತರೆ ಸರ್ಕಾರಿ ಕಟ್ಟಡಗಳ ಗೋಡೆ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ (1098) ನಮೂದಿಸಬೇಕು ಎಂದು ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
ಕುಷ್ಟಗಿ:
ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಸೇರಿದಂತೆ ಇತರೆ ಸರ್ಕಾರಿ ಕಟ್ಟಡಗಳ ಗೋಡೆ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ (1098) ನಮೂದಿಸಬೇಕು ಎಂದು ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.ತಾಲೂಕಿನ ಕಂದಕೂರು ಗ್ರಾಮ ಪಂಚಾಯಿತಿ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕುರುಬನಾಳ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಕುರುಬನಾಳದ ಅಂಗನವಾಡಿಗಳಿಗೆ ಭೇಟಿ ನೀಡಿದ ಅವರು ಅಂಗನವಾಡಿ ಕೇಂದ್ರಗಳಲ್ಲಿ ಬಾಲವಿಕಾಸ ಸಮಿತಿ ಸಭೆ ಹಾಗೂ ತಾಯಂದಿರ ಸಭೆ ನಡೆಸಿರುವ ಕುರಿತು ಮಾಹಿತಿ ಪಡೆದು ದಾಖಲಾತಿ ಪರಿಶೀಲಿಸಿದರು. ನಂತರ ಸ್ಥಳದಲ್ಲಿಯೇ ಇದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಅಂಗನವಾಡಿ ವ್ಯಾಪ್ತಿಯಲ್ಲಿ ಅಪೌಷ್ಟಿಕ ಮಕ್ಕಳು ಕಂಡುಬಂದರೆ ಕೂಡಲೆ ಎನ್‌ಆರ್‌ಸಿಗೆ ಕಳುಹಿಸಿಕೊಡಬೇಕು ಎಂದು ಹೇಳಿದರು.ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಿಕ್ಷಣ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯ ಕುರಿತು ಪರಿಶೀಲಿಸಿದರು. ನಂತರ ಗೋಡೆಯ ಮೇಲೆ ಮಕ್ಕಳ ಸಹಾಯವಾಣಿ 1098 ಸಂಖ್ಯೆ ಕಡ್ಡಾಯವಾಗಿ ನಮೂದು ಮಾಡಬೇಕು ಎಂದು ಸೂಚಿಸಿದರು. ಗ್ರಾಪಂಗೆ ಭೇಟಿ ನೀಡಿ ಅಲ್ಲಿನ ಪಿಡಿಒ ರಮೇಶ ಬೆಳ್ಳಿಹಾಳ ಅವರಿಗೆ ಮಕ್ಕಳ ಹಕ್ಕುಗಳ ಗ್ರಾಮಸಭೆ ಮತ್ತು ಕಾವಲು ಸಮಿತಿ ಸಭೆ ಮಾಡುವಂತೆ ತಿಳಿಸಿದರು.
ಈ ವೇಳೆ ಸಿಡಿಪಿಒ ಯಲ್ಲಮ್ಮ ಹಂಡಿ, ಪಿಡಿಒ ರಮೇಶ ಬೆಳ್ಳಿಹಾಳ ಸೇರಿದಂತೆ ಅಂಗನವಾಡಿ ಮೇಲ್ವಿಚಾರಕಿಯರು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.