ಮೈತ್ರಿಯಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಳ

| Published : Apr 01 2024, 12:52 AM IST

ಮೈತ್ರಿಯಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಳ
Share this Article
  • FB
  • TW
  • Linkdin
  • Email

ಸಾರಾಂಶ

ಜೆಡಿಎಸ್ ಹಾಗೂ ಬಿಜೆಪಿ ನಡುವೆ ರಾಜ್ಯಮಟ್ಟದಲ್ಲಿ ಮೈತ್ರಿ ಆಗಿರುವುದರಿಂದ ರಾಜ್ಯದಲ್ಲಿ ಹೊಸ ರಾಜಕೀಯ ಗಾಳಿ ಬೀಸುತ್ತಿದೆ

ಗದಗ: ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಎರಡೂ ಪಕ್ಷಗಳು ಒಂದಾಗಿರುವುದರಿಂದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹಕ್ಕೆಕಾರಣವಾಗಿದೆ ಎಂದು ಮಾಜಿ ಸಿಎಂ, ಹಾವೇರಿ-ಗದಗ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಭಾನುವಾರ ಜೆಡಿಎಸ್ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಜೆಡಿಎಸ್ ಮುಖಂಡರ ಜತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಜೆಡಿಎಸ್ ಹಾಗೂ ಬಿಜೆಪಿ ನಡುವೆ ರಾಜ್ಯಮಟ್ಟದಲ್ಲಿ ಮೈತ್ರಿ ಆಗಿರುವುದರಿಂದ ರಾಜ್ಯದಲ್ಲಿ ಹೊಸ ರಾಜಕೀಯ ಗಾಳಿ ಬೀಸುತ್ತಿದೆ. ಮೊನ್ನೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಎಲ್ಲ ಜಿಲ್ಲೆ ಹಾಗೂ ಕ್ಷೇತ್ರದಲ್ಲಿ ಜೆಡಿಎಸ್ ಬಿಜೆಪಿ ಸಮನ್ವಯ ಮುಂದುವರೆಸಿಕೊಂಡು ಹೋಗಬೇಕು ಎಂದು ತೀರ್ಮಾನ ಮಾಡಲಾಗಿದೆ. ಅದರಂತೆ ಕ್ಷೇತ್ರದಲ್ಲಿಯೂ ಸಮನ್ವಯ ಸಭೆ ಮಾಡುತ್ತೇವೆ. ರಾಜ್ಯದಲ್ಲಿ ಅತ್ಯಂತ ಹೆಚ್ಚು ಸ್ಥಾನ ಗೆಲ್ಲಲು ದೇವೇಗೌಡರು ಹಾಗೂ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತೇವೆ.

ಇದೇ ವೇಳೆ ಮಂಡ್ಯ ಮೈತ್ರಿಯಲ್ಲಿನ ಗೊಂದಲದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಗೊಂದಲ ಇಲ್ಲ.ಎರಡೂ ಪಕ್ಷಗಳ ಮುಖಂಡರು ಮಾತುಕತೆ ನಡೆಸುತ್ತಿದ್ದಾರೆ. ಸುಮಲತಾ ಅವರೊಂದಿಗೆ ನಮ್ಮವರು ಮಾತುಕತೆ ನಡೆಸಿದ್ದಾರೆ.ನಮ್ಮ ರಾಜ್ಯಾಧ್ಯಕ್ಷರು ಮಾತನಾಡಿದ್ದಾರೆ.ಅವರ ಮನವೊಲಿಕೆ ಆಗುತ್ತಿದೆ. ಯಾವುದೇ ಗೊಂದಲ ಇಲ್ಲ. ಚಿತ್ರದುರ್ಗದಲ್ಲಿ ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ. ಬಿಜೆಪಿಯಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದರು.

ಬ್ಲಾಕ್ ಮನಿ ಇಟ್ಟುಕೊಂಡರೆ ಪ್ರಶ್ನಿಸಬಾರದೇ?: ಕಾಂಗ್ರೆಸ್ ಯಾವಾಗಲೂ ಬ್ಲಾಕ್ ಮನಿ ಮೇಲೆ ರಾಜಕಾರಣ ಮಾಡುತ್ತದೆ. ಸುಮಾರು ₹ 600 ಕೋಟಿ ತೆರಿಗೆ ವಂಚನೆ ಮಾಡಿದೆ. ಅದನ್ನು ಪ್ರಶ್ನೆ ಮಾಡಬಾರದೇ? ಅದಕ್ಕೂ ಚುನಾವಣೆಗೂ ಸಂಬಂಧವಿಲ್ಲ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಪ್ರಶ್ನಿಸಿದ್ದರು. ಆ ಹಿನ್ನೆಲೆಯಲ್ಲಿ ದೇವೇಗೌಡರು ಅವರ ಗರ್ವಭಂಗವಾಗಬೇಕಿದೆ ಅಂತ ಹೇಳಿಕೆ ಕೊಟ್ಟಿದ್ದಾರೆ‌. ನಾವು ಕಾಂಗ್ರೆಸ್ ವಿರುದ್ಧ ಮೈತ್ರಿ ಮಾಡಿಕೊಂಡಿದ್ದೇವೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರು, ಹೀಗಾಗಿ ಅವರ ವಿರುದ್ಧ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು.

ಇದೇ ವೇಳೆ ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಯಾವುದೇ ಪಕ್ಷದ ಅಭ್ಯರ್ಥಿ ಇರಲಿ ಮಹಿಳೆಯರ ಬಗ್ಗೆ ಮಾತನಾಡುವುದು ಸರಿಯಲ್ಲ. ಮಹಿಳೆಯರಿಗೆ ಅವಮಾನ ಮಾಡಿದಂತಾಗುತ್ತದೆ. ಅದಕ್ಕೆ ಸಹಜವಾಗಿ ವಿರೋಧ ವ್ಯಕ್ತವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ನರಗುಂದ ಶಾಸಕ ಸಿ.ಸಿ.ಪಾಟೀಲ, ಅಲ್ಕೋಡ ಹನಮಂತಪ್ಪ, ಜೆಡಿಎಸ್ ರಾಜ್ಯ ವಕ್ತಾರ ವಿ.ಆರ್. ಗೋವಿಂದಗೌಡ್ರ, ವಿಪ ಸದಸ್ಯ ಎಸ್.ವಿ. ಸಂಕನೂರ ಸೇರಿದಂತೆ ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಜೆಡಿಎಸ್ ಶಾಲ್ ಹಾಕಿಕೊಂಡಿರುವುದಕ್ಕೆ ಜವಾಬ್ದಾರಿ ಡಬಲ್ ಆಗಿದೆ. ಈ ಬಗ್ಗೆ ನಮಗೆ ಖುಷಿ ಇದೆ. ಒಗ್ಗಟ್ಟಾಗಿ ಕೆಲಸ ಮಾಡಿದಲ್ಲಿ ಹೆಚ್ಚಿನ ಯಶಸ್ಸು ಖಂಡಿತ ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.