ವಕ್ಫ್ ಆಸ್ತಿ ನಮೂದು : ಜಿಲ್ಲೆಯಾದ್ಯಂತ ಬಿಜೆಪಿ ಪ್ರತಿಭಟನೆ

| Published : Nov 05 2024, 01:38 AM IST

ವಕ್ಫ್ ಆಸ್ತಿ ನಮೂದು : ಜಿಲ್ಲೆಯಾದ್ಯಂತ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು: ರೈತರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂಬುದಾಗಿ ದಾಖಲಾಗಿರುವುದನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರು: ರೈತರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂಬುದಾಗಿ ದಾಖಲಾಗಿರುವುದನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಹಾಗೂ ಎನ್‌.ಆರ್‌.ಪುರ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನಾ ಮೆರವಣಿಗೆ, ಮಾನವ ಸರಪಳಿ ರಚನೆ, ರಸ್ತೆ ತಡೆ ಪ್ರತಿಭಟನೆಗಳು ನಡೆಸಿ ಸ್ಥಳೀಯ ತಾಲೂಕು ತಹಸೀಲ್ದಾರ್‌ಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ಸಂಯುಕ್ತಾಶ್ರಯದಲ್ಲಿ ಇಲ್ಲಿನ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಮಾನವ ಸರಪಳಿ ನಿರ್ಮಾಣ ಮಾಡಿದ್ದರಿಂದ ರಾಷ್ಟ್ರೀಯ ಹೆದ್ದಾರಿ-173 ಮಾರ್ಗದಲ್ಲಿ ಸಂಚರಿಸುವ ವಾಹನಗಳು ಸೇರಿದಂತೆ ಇತರೆ ರಸ್ತೆಗಳಲ್ಲಿ ಸಾಗಬೇಕಾದ ವಾಹನಗಳು ರಸ್ತೆಯಲ್ಲಿಯೇ ನಿಂತಿದ್ದರಿಂದ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಕೆಲ ಸಮಯ ನಂತರ ಮಾನವ ಸರಪಳಿ ಕೈಬಿಟ್ಟು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ರೀತಿಯಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರ ಜಮೀನಿನಲ್ಲಿ ವಕ್ಫ್ ಆಸ್ತಿ ಎಂಬುದು ನಮೂದಾಗಿರುವ ಸಾಧ್ಯತೆಗಳು ಕೇಳಿ ಬರುತ್ತಿರುವುದರಿಂದ ರೈತರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸಾಮಾನ್ಯ ಜನರು ಆತಂಕಕ್ಕೆ ಒಳಗಾಗಿ ಗೊಂದಲ ಸೃಷ್ಟಿಯೊಂದಿಗೆ ಶಾಂತಿ ಹದಗೆಡುವಂತ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳು ಜಿಲ್ಲೆಯಲ್ಲಿ ಕಂಡು ಬರುತ್ತಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ. ಅದರಲ್ಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್‌ನ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ. ಅದರಲ್ಲೂ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕುಕೃತ್ಯಗಳಿಗೂ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿಸಲಾಗಿದೆ.

ವಿಜಯಪುರ ಜಿ.ಹೊನ್ನಾವಡದ ರೈತರ 1,500 ಎಕರೆ ಜಮೀನು ವಕ್ಫ್ ಆಸ್ತಿಯೆಂದು ಘೋಷಿಸಿ ತಹಸೀಲ್ದಾರ್‌ರಿಂದ ಪುಷ್ಠೀಕರಿಸಿ ನೋಟಿಸ್ ನೀಡಲಾಗಿದೆ, ಬೆಂಗಳೂರಿನ ವಿಧಾನಸೌಧವೂ ಸೇರಿದಂತೆ ಹಲವಾರು ಪ್ರಮುಖ ಆಸ್ತಿಗಳು ವಕ್ಫ್‌ಗೆ ಸೇರಿದ್ದು ಎಂದು ಮುಸ್ಲಿಂ ನಾಯಕರು ಹೇಳಿಕೆ ನೀಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 1649 ಆಸ್ತಿಗಳ ಹಕ್ಕಿಗಾಗಿ ವಕ್ಫ್ ಪ್ರತಿಪಾದಿಸುತ್ತಿದೆ. ಸವಣೂರು ತಾಲ್ಲೂಕು ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತ ದೇವಸ್ಥಾನದ ಅತಿಕ್ರಮಣಕ್ಕೆ ವಕ್ಫ್ ಬೋರ್ಡ್ ಮುಂದಾಗಿದೆ. ಹೀಗೆ ರಾಜ್ಯದ ಹಲವೆಡೆ ರೈತರ ಜಮೀನು ವಕ್ಫ್‌ಗೆ ಸೇರಿದೆಂದು ಪಹಣಿಯಲ್ಲಿ ನಮೂದಿದೆ.

ವಕ್ಫ್ ಬೊರ್ಡ್‌ನಿಂದ ಆಗುತ್ತಿರುವ ಈ ರೀತಿಯ ಗೊಂದಲಗಳು ರಾಜ್ಯದಲ್ಲಿನ ಸಾಮರಸ್ಯ ಹದಗೆಡುವುದಕ್ಕೆ ಕಾರಣವಾಗಿದೆ. ಸರ್ಕಾರ ವಿವೇಚನೆಯಿಲ್ಲದೆ ಕೈಗೊಳ್ಳುತ್ತಿರುವ ನಿರ್ಧಾರಗಳಿಂದಾಗಿ ರಾಜ್ಯದ ಅನೇಕ ಆಸ್ತಿಗಳ ವ್ಯಾಜ್ಯ ಬೀದಿಗೆ ಬರುತ್ತಿದೆ. ಈಗಾಗಲೇ ಕಡಕೋಳದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಪ್ರಾರಂಭವಾಗಿದೆ. ಇದು ಇಡೀ ರಾಜ್ಯವನ್ನು ವ್ಯಾಪಿಸುವ ಸಾಧ್ಯತೆಯಿದೆ. ಇಡೀ ರಾಜ್ಯದ ರೈತರ ಹಿತದೃಷ್ಟಿಯಿಂದ ತನ್ನ ನಿಲುವನ್ನು ತೆಗೆದುಕೊಳ್ಳಬೇಕಾಗಿದ್ದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಸಂಪೂರ್ಣವಾಗಿ ಅವರ ಪರವಾಗಿ ನಿಂತಿದೆ ಎಂದು ದೂರಲಾಗಿದೆ.

ಇದೇ ರೀತಿಯ ನಿಲುವುಗಳನ್ನು ಮುಂದುವರೆಸಿದಲ್ಲಿ ರಾಜ್ಯದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರ್ಕಾರವೇ ನೇರವಾಗಿ ಹೊಣೆಯಾಗಬೇಕಾಗುತ್ತದೆ. ಯಾವುದೇ ಕಾರಣಕ್ಕೂ ರಾಜ್ಯದ ಹಿತಕ್ಕೆ, ರಾಜ್ಯದ ರೈತರ ಹಿತಕ್ಕೆ ಧಕ್ಕೆಯಾಗುವಂತಹ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೈಗೊಳ್ಳಬೇಕು. ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಮುಸ್ಲೀಂ ಓಲೈಕೆ ಹಾಗೂ ಹಿಂದೂ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುವ ತನ್ನ ಹಳೇ ಚಾಳಿಯನ್ನ ಕೈಬಿಡಬೇಕೆಂದು ಬಿಜೆಪಿ ಮನವಿಯಲ್ಲಿ ಆಗ್ರಹಿಸಿದೆ.ಪ್ರತಿಭಟನೆಯಲ್ಲಿ ಚಿಕ್ಕಮಗಳೂರು ನಗರ ಘಟಕದ ಅಧ್ಯಕ್ಷ ಪುಷ್ಪರಾಜ್‌, ಗ್ರಾಮಾಂತರ ಅಧ್ಯಕ್ಷ ವಿಜಯಕುಮಾರ್‌, ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಎಚ್‌.ಸಿ.ಕಲ್ಮರುಡಪ್ಪ, ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಲೋಕೇಶ್‌, ಚಿಕ್ಕಮಗಳೂರು ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್‌, ಮುಖಂಡರಾದ ಕೋಟೆ ರಂಗನಾಥ್‌, ಜಸಂತಾ ಅನಿಲ್‌ಕುಮಾರ್‌, ನಂದೀಶ್‌ ಮದಕರಿ, ಎಚ್‌.ಕೆ.ಕೇಶವಮೂರ್ತಿ, ದಿನೇಶ್‌ ಹಾಗೂ ಕಾರ್ಯಕರ್ತರು ಇದ್ದರು.