ಸಾರಾಂಶ
ರೈತರ ಕೃಷಿ ಭೂಮಿಯ ಪಹಣಿಗಳಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ವಕ್ಫ್ ಬೋರ್ಡ್ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ರೈತರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ರೈತರ ಕೃಷಿ ಭೂಮಿಯ ಪಹಣಿಗಳಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ವಕ್ಫ್ ಬೋರ್ಡ್ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ರೈತರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರೈತರ ಜಮೀನಿನ ಪಹಣಿಗಳಲ್ಲಿ ವಕ್ಫ್ ಎಂದು ನಮೂದು ಮಾಡಿರುವುದು ಘೋರ ಅಪರಾಧವಾಗಿದೆ. ಒಂದು ವೇಳೆ ಹಳೆಯ ದಾಖಲೆ ಹೊಂದಿದ್ದರೂ 1974 ರ ಭೂ ಸುಧಾರಣಾ ಕಾಯ್ದೆಯಂತೆ ಉಳುವವನೇ ಭೂಮಿಯ ಒಡೆಯ ಎಂದು ಸರ್ಕಾರ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
2017-18 ಮತ್ತು 2023-24ರಲ್ಲಿ ಸರ್ಕಾರವು ಸಾರ್ವಜನಿಕ ಆದೇಶ ಹೊರಡಿಸದೆ ರೈತರ ಕೃಷಿ ಭೂಮಿಯ ಪಹಣಿಯ ಕಲಂ 9 ಮತ್ತು 11ರಲ್ಲಿ ವಕ್ಫ್ ಬೋರ್ಡ್ ಎಂದು ಹೊಸ ಎಂಆರ್ ನೀಡಿ ತಿದ್ದುಪಡಿ ಮಾಡಿರುವುದು ಅಪರಾಧವಾಗಿದ್ದು, ರೈತರ ಮೇಲೆ ನಡೆಸಿದ ದೌರ್ಜನ್ಯವಾಗಿದೆ. ಕೇಂದ್ರ ಸರ್ಕಾರ ಹೊರ ತಂದಿರುವ 2013ರ ಭೂ ಸ್ವಾಧೀನ ಕಾಯ್ದೆ ಪ್ರಕಾರ ಸಾರ್ವಜನಿಕ ಉದ್ದೇಶಕ್ಕೆಂದು ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲು ರೈತನ ಒಪ್ಪಿಗೆ ಪಡೆಯಬೇಕು. ಆದ್ದರಿಂದ ಪಹಣಿಗಳಲ್ಲಿ ವಕ್ಫ್ ಎಂದು ನಮೂದಿಸುತ್ತಿರುವುದು ನಿಯಮಬಾಹಿರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.