ಸಾರಾಂಶ
ಚಿಕ್ಕಬಳ್ಳಾಪುರ : ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರವಾಸಿಗರು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಡಿಸೆಂಬರ್ 31ರ ಸಂಜೆ 6 ರಿಂದ 2025ರ ಜ.1ರ ಬೆಳಗ್ಗೆ 7ರವರೆಗೆ ಪ್ರವೇಶ ನಿಷೇಧಿಸಲಾಗಿದೆ. ಗಿರಿಧಾಮದಲ್ಲಿನ ಅತಿಥಿಗೃಹಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸುವುದನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶದಲ್ಲಿ ತಿಳಿಸಿದ್ದಾರೆ.
ಹೊಸ ವರ್ಷಾಚರಣೆಯ ಸಂಭ್ರಮಾಚರಣೆ ಮಧ್ಯೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಾರಿಗೊಳಿಸಿದೆ. ನಂದಿಬೆಟ್ಟ ಪ್ರವೇಶದ ಜತೆಗೆ ಹೋಟೆಲ್, ರೆಸಾರ್ಟ್, ಹೋಂ ಸ್ಟೇಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಹಲವು ಮಿತಿಗಳನ್ನು ಹೇರಲಾಗಿದೆ.
ಪ್ರತಿ ವರ್ಷವೂ ನಂದಿಬೆಟ್ಟಕ್ಕೆ ನಿಷೇಧ ಹೇರಲಾಗುತ್ತಿದೆ. ಕುಡಿದು ವಾಹನ ಚಾಲನೆ, ಅಪಘಾತ, ಪರಿಸರ ಮಾಲಿನ್ಯ ಸೇರಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ನಂದಿಗಿರಿಧಾಮದಲ್ಲಿ ಡಿ.31ರಂದು ರೂಮ್ ಬುಕ್ಕಿಂಗ್ ಸಹ ರದ್ದುಪಡಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ.