ಸಾರಾಂಶ
ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸುವ ಮೂಲಕ ಸ್ವಚ್ಚತೆಯನ್ನು ಕಾಪಾಡಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ವಿ. ದೀಪಾ ಹೇಳಿದರು.
ತಿಪಟೂರು: ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸುವ ಮೂಲಕ ಸ್ವಚ್ಚತೆಯನ್ನು ಕಾಪಾಡಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ವಿ. ದೀಪಾ ಹೇಳಿದರು.
ನಗರದ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ತಾಲೂಕು ವಕೀಲರ ಸಂಘದಿಂದ ಭೂಮಿ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿಶ್ವದಲ್ಲಿ ನಮ್ಮೆರಿಗೂ ಇರುವ ಒಂದೇ ಭೂಮಿಯನ್ನು ಕಾಪಾಡಿಕೊಳ್ಳದಿದ್ದಲ್ಲಿ ವಿನಾಶ ಕಟ್ಟಿಟ್ಟ ಬುತ್ತಿ. ಕರಗದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಭೂಮಿಯ ಮಡಿಲಿಗೆ ಸೇರಿಸಲು ಮುಂದಾಗಬಾರದು ಎಂದರು.ಆಧುನೀಕತೆ ಹೆಸರಿನಲ್ಲಿ ಭೂಮಿ ರಕ್ಷಣೆ ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಅಂತರ್ಜಲ ಮಟ್ಟ ಕುಸಿದು ಬರಗಾಲ ಸೃಷ್ಟಿಯಾಗಿದೆ. ನಾವೆಲ್ಲರೂ ನೀರನ್ನು ಮಿತವಾಗಿ ಬಳಸಬೇಕು. ಅಲ್ಲದೆ ನೀರನ್ನು ಭೂಮಿಯಲ್ಲಿ ಇಂಗಿಸುವಂತೆ ಮಾಡಬೇಕು. ಆಗ ಮಾತ್ರ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ. ಇಂತಹ ಉದ್ಯಾನವನಗಳ ಸಂರಕ್ಷಣೆಯನ್ನು ಮಾಡಬೇಕೆಂದು ತಿಳಿಸಿದರು.
ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದರಗಡೆ ಮಾತನಾಡಿ, ನಾವು ಭೂಮಿಯ ಮೇಲಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಳ್ಳುತ್ತೇವೆ. ಆದರೆ ಭೂಮಿ ರಕ್ಷಣೆಯ ಬಗ್ಗೆ ಗಮನಹರಿಸುತ್ತಿಲ್ಲ. ಪ್ಲಾಸ್ಟಿಕ್‌ನಂತಹ ತ್ಯಾಜ್ಯ ವಸ್ತುಗಳ ಬಳಕೆಯ ಪರಿಣಾಮ ಪರಿಸರ ಹಾಳಾಗುತ್ತಿದೆ. ಗಿಡ ಮರಗಳನ್ನು ಬೆಳೆಸುವ ಮೂಲಕ ಪರಿಸರ ರಕ್ಷಿಸಬೇಕು ಎಂದರು.ವಕೀಲ ಕೆ.ಎಸ್. ಮಮತಾ, ನಗರಸಭೆ ಸಿಬ್ಬಂದಿ ವಿದ್ಯಾ, ಪೌರಕಾರ್ಮಿಕರು ಭಾಗವಹಿಸಿದ್ದರು.