ಜಾಗತಿಕ ತಾಪಮಾನ ತಡೆಗಟ್ಟಲು ಪರಿಸರ ಸಂರಕ್ಷಣೆ ಅಗತ್ಯ: ಖಂಡ್ರೆ

| Published : Jun 27 2024, 01:30 AM IST

ಜಾಗತಿಕ ತಾಪಮಾನ ತಡೆಗಟ್ಟಲು ಪರಿಸರ ಸಂರಕ್ಷಣೆ ಅಗತ್ಯ: ಖಂಡ್ರೆ
Share this Article
  • FB
  • TW
  • Linkdin
  • Email

ಸಾರಾಂಶ

ಬನ್ನೇರಘಟ್ಟದ ಜಂಗಲ್ ಲಾಡ್ಜ್ ನಲ್ಲಿ ಆಯೋಜಿಸಿದ್ದ ಚಿಣ್ಣರ ವನದರ್ಶನದಲ್ಲಿ ಗೌರಿಬಿದನೂರಿನ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಶಾಲಾ ಮಕ್ಕಳಿಗೆ ಕಾನನ ಕಣಜ ಕಿಟ್ಟನ್ನು ಅರಣ್ಯ ಸಚಿವ ಈಶ್ವರ್.ಬಿ.ಖಂಡ್ರೆ ವಿತರಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ದಕ್ಷಿಣ ಭೂಪ್ರದೇಶದ ಶೇ.33ರಷ್ಟು ಅರಣ್ಯ ಪ್ರದೇಶವಿರಬೇಕು, ಆದರೆ ಅರಣ್ಯ ನಾಶದಿಂದ ಶೇ.23ರಷ್ಟು ಅರಣ್ಯ ಪ್ರದೇಶವನ್ನು ಕರ್ನಾಟಕ ಹೊಂದಿದೆ. ಜಾಗತಿಕ ತಾಪಮಾನ ಹೆಚ್ಚಳವಾಗದಂತೆ ತಡೆಗಟ್ಟಲು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್.ಬಿ.ಖಂಡ್ರೆ ಕರೆ ನೀಡಿದರು.

ಬನ್ನೇರಘಟ್ಟದ ಜಂಗಲ್ ಲಾಡ್ಜ್ ರೆಸಾರ್ಟ್‌ನಲ್ಲಿ ಆಯೋಜಿಸಿದ್ದ ಚಿಣ್ಣರ ವನದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾಲಿನ್ಯಮುಕ್ತ ಪರಿಸರ ನಿರ್ಮಾಣಕ್ಕೆ ಮತ್ತು ವನ್ಯಜೀವಿ ಹಾಗೂ ಸಸ್ಯ ಸಂಕುಲದ ಉಳಿವಿಗೆ ಜಾಗೃತಿಯೊಂದೇ ಮಾರ್ಗವಾಗಿದ್ದು, ಈ ನಿಟ್ಟಿನಲ್ಲಿ ಚಿಣ್ಣರ ವನದರ್ಶನ ಅತ್ಯಂತ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ ಏಕ ಬಳಕೆ ಪ್ಲಾಸ್ಟಿಕ್ ತ್ಯಜಿಸುವಂತೆ ವಿದ್ಯಾರ್ಥಿಗಳಿಗೆ ಇದೇ ವೇಳೆ ಕರೆ ನೀಡಿದ ಸಚಿವರು, ಪರಿಸರ ಸ್ವಚ್ಛತೆಗೂ ಆದ್ಯತೆ ನೀಡಿ ಈ ಬಗ್ಗೆ ಇತರರಿಗೂ ಜಾಗೃತಿ ಮೂಡಿಸುವಂತೆ ತಿಳಿಸಿದರಲ್ಲದೆ, ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಗೆ ನಮ್ಮ ಸರ್ಕಾರ ಕಟಿಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ 5 ಕೋಟಿ 40 ಲಕ್ಷ ಸಸಿಗಳನ್ನು ನೆಡಲು ಕ್ರಮಕೈಗೊಳ್ಳಲಾಗಿದ್ದು, ಬನ್ನೇರಘಟ್ಟ ಜೈವಿಕ ಉದ್ಯಾನವನ್ನು ಅತ್ಯುತ್ತಮ ಪ್ರವಾಸಿ ತಾಣವಾಗಿ ಸಂಪೂರ್ಣ ಅಭಿವೃದ್ಧಿಪಡಿಸಲಾಗುವುದು ಎಂದರು.

ಕರ್ನಾಟಕದಲ್ಲಿ 6395 ಆನೆಗಳಿದ್ದು, ರಾಷ್ಟ್ರದಲ್ಲಿ ಮೊದಲನೇ ಸ್ಥಾನ, 563 ಹುಲಿಗಳಿದ್ದು ಎರಡನೇ ಸ್ಥಾನ ಪಡೆದುಕೊಂಡಿದೆ. 20 ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಚಿರತೆ ಸಫಾರಿ ದೇಶದಲ್ಲಿಯೇ ಅತಿ ದೊಡ್ಡದಾಗಿದೆ. ಪ್ರತಿದಿನ ಜೈವಿಕ ಉದ್ಯಾನಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದ್ದು, ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಸಸಿಗಳನ್ನು ವಿತರಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಕಡೆ, ಕ್ಯಾಂಪಾ ಸಿಇಓ ಸಂಜಯ್ ಬಿಜ್ಜೂರ್ ,ಸ್ಮಿತಾ ಬಿಜ್ಜೂರ್ , ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ. ಸುನೀಲ್ ಪನ್ವಾರ್, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ನಿರ್ದೇಶಕ ಎ.ವಿ. ಸೂರ್ಯಸೇನ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಜೈವಿಕ ಉದ್ಯಾನದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.