ಕನ್ನಡಪ್ರಭ ವಾರ್ತೆ ತಾಳಿಕೋಟೆ ಹರನಾಳ ಹಾಗೂ ಗಡಿಸೋಮನಾಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದರೂ, ನೀರು ಪೂರೈಕೆಗೆ ಕ್ರಮ ಕೈಗೊಳ್ಳದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಭಿಯಂತರ ಸಿ.ಎಲ್.ರಾಠೋಡರನ್ನು ತಾಪಂ ಇಒ ಅನಸೂಯಾ ಚಲವಾದಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ತಾಳಿಕೋಟೆ

ಹರನಾಳ ಹಾಗೂ ಗಡಿಸೋಮನಾಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದರೂ, ನೀರು ಪೂರೈಕೆಗೆ ಕ್ರಮ ಕೈಗೊಳ್ಳದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಭಿಯಂತರ ಸಿ.ಎಲ್.ರಾಠೋಡರನ್ನು ತಾಪಂ ಇಒ ಅನಸೂಯಾ ಚಲವಾದಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಟ್ಟಣದ ತಾಪಂ ಕಚೇರಿಯಲ್ಲಿ ಮಂಗಳವಾರ ನಡೆದ ತಾಳಿಕೋಟೆ ಹಾಗೂ ಮುದ್ದೇಬಿಹಾಳ ತಾಲೂಕು ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಘಟನೆ ನಡೆದಿದೆ. ಹರನಾಳ ಹಾಗೂ ಗಡಿಸೋಮನಾಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಕುರಿತು ಇಲಾಖೆಯಿಂದ ಹಲವು ಬಾರಿ ಮೌಖಿಕವಾಗಿ ತಿಳಿಸಲಾಗಿದೆ. ಅಲ್ಲದೇ, ಪತ್ರದ ಮೂಲಕವೂ ಗಮನಕ್ಕೆ ತರಲಾಗಿದೆ. ಆದರೂ, ನೀರು ಪೂರೈಸಲು ಕ್ರಮ ಕೈಗೊಂಡಿಲ್ಲ. ಇದರಿಂದ ಗ್ರಾಮಸ್ಥರ ವಿರೋಧವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇಲಾಖೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಯ ನಿರ್ಲಕ್ಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಈ ವೇಳೆ ಉಪಸ್ಥಿತರಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಹಿರೇಗೌಡರಗೆ ಸೂಚನೆ ನೀಡಿದ ಅಧಿಕಾರಿಗಳು ನೀರು ಪೂರೈಸುವ ಭರವಸೆ ನೀಡುವುದಷ್ಟೇ ಅಲ್ಲ. ಕೂಡಲೇ ಗ್ರಾಮಗಳಿಗೆ ನೀರು ಪೂರೈಸಬೇಕು. ಜೊತೆಗೆ ಕೆಲವು ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳು ಬಂದ್ ಆಗಿವೆ. ಶುದ್ದ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲು ತಿಳಿಸಿದ್ದರೂ ಕ್ರಮಕೈಗೊಂಡಿಲ್ಲ. ಈ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿರುವ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕಾಗುತ್ತದೆ ಎಂದು ಹಿರೇಗೌಡರಗೆ ಎಚ್ಚರಿಕೆ ನೀಡಿದರು.ತಾಪಂ ಆಡಳಿತಾಧಿಕಾರಿ ಶಿವನಗೌಡ ಪಾಟೀಲ ಮಾತನಾಡಿ, ಈ ಬಾರಿ ರಾಜ್ಯದ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆಯಾಗಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಅಧಿಕಾರಿಗಳು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.ಆರೋಗ್ಯ ಸೇವೆಯಲ್ಲಿ ನಿರ್ಲಕ್ಷ್ಯ ಬೇಡ:

ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ ಆರೋಗ್ಯ ಇಲಾಖೆಯ ಪ್ರಗತಿ ವರದಿ ಮಂಡಿಸಿದರು. ಆಗ ಮಾತನಾಡಿದ ಶಿವನಗೌಡ ಪಾಟೀಲ, ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಅತ್ಯಂತ ಪ್ರಮುಖ ಸೇವೆ ಒದಗಿಸುವ ಇಲಾಖೆ. ಈ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಹುತೇಕರು ಬಡವರಾಗಿದ್ದು, ಅವರಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದರು.ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿ:ಹೆಸ್ಕಾಂ ಅಧಿಕಾರಿಗಳಿಂದ ಎರಡೂ ತಾಲೂಕುಗಳ ವಿದ್ಯುತ್ ವ್ಯವಸ್ಥೆಯ ಕುರಿತು ಮಾಹಿತಿ ಪಡೆದ ಅವರು, ನೀರಿನ ಅಭಾವದ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯ ಮೇಲೂ ಒತ್ತಡ ಉಂಟಾಗುವ ಸಾಧ್ಯತೆಯಿದೆ. ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು. ವಿದ್ಯುತ್‌ನ್ನು ಮಿತವಾಗಿ ಬಳಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.ಶೈಕ್ಷಣಿಕ ಪ್ರಗತಿಗೆ ಸಮನ್ವಯ ಅಗತ್ಯ:ಗ್ರಾಮೀಣ ಭಾಗದ ಮಕ್ಕಳು ನಗರ ಪ್ರದೇಶಗಳ ಶಾಲೆಗಳಿಗೆ ತೆರಳಲು ಅನುಕೂಲವಾಗುವಂತೆ ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು. ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.ಸಭೆಯಲ್ಲಿ ಮುದ್ದೇಬಿಹಾಳ ತಾಪಂ ಇಒ ಸಂಗನಗೌಡ ಬಿರಾದಾರ, ತಾಪಂ ಸಹಾಯಕ ನಿರ್ದೇಶಕ ಕಸನಕ್ಕಿ, ಬಿಇಒ ಬಡದಾನಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ.ಎಂ.ಎಂ.ಬೆಳಗಲ್ಲ, ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಸುರೇಶ ಭಾವಿಕಟ್ಟಿ, ಸಿಡಿಪಿಒ ಶಿವಮೂರ್ತಿ ಕುಂಬಾರ, ಪುರಸಭೆ ಕಂದಾಯ ಅಧಿಕಾರಿ ಸುರೇಶ ಅಮ್ರಣ್ಣವರ ಸೇರಿ ಎರಡೂ ತಾಲೂಕುಗಳ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿ ಪಾಲ್ಗೊಂಡಿದ್ದರು.