ಸಾರಾಂಶ
ಹಾವೇರಿ: ದೇಶದ ಪ್ರಜೆಗಳಾದ ನಾವು ಪ್ರಜಾಪ್ರಭುತ್ವದ ಅಡಿಯಲ್ಲಿ ಜೀವಿಸುತ್ತಿದ್ದೇವೆ. ಪ್ರತಿಯೊಬ್ಬರಿಗೂ ಇಲ್ಲಿ ಸಮಾನ ಅವಕಾಶಗಳಿವೆ ಎಂದು ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸಂವಿಧಾನವು ನಮ್ಮ ಉಸಿರು ಇದ್ದಹಾಗೆ, ಸಂವಿಧಾನವನ್ನು ನಾವು ಗೌರವಿಸಬೇಕು. ಸಂವಿಧಾನದಿಂದ ಪ್ರಜಾಪ್ರಭುತ್ವದಲ್ಲಿ ಹೇಗೆ ಜೀವಿಸಬೇಕು ಎಂಬುವುದನ್ನು ತಿಳಿದುಕೊಂಡಿದ್ದೇವೆ. ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ‍್ಯ, ಬದುಕುವ ಹಕ್ಕು ಜತೆಗೆ ಕರ್ತವ್ಯಗಳನ್ನು ಪಡೆದುಕೊಂಡಿದ್ದೇವೆ. ಇಲ್ಲಿ ಯಾರು ಹೆಚ್ಚು ಮತ್ತು ಕಡಿಮೆ ಎನ್ನುವ ಮನೋಭಾವನೇ ಇಲ್ಲ. ಎಲ್ಲರಿಗೂ ಸಮಾನ ಅವಕಾಶಗಳಿವೆ ಎಂದರು. ಸರ್ಕಾರವು ಪ್ರಜಾಪ್ರಭುತ್ವ ದಿನಾಚರಣೆಗೆ ಹೆಚ್ಚು ಮಹತ್ವ ನೀಡುತ್ತಾ ಬಂದಿದೆ. ಕಳೆದ ವರ್ಷ ಮಾನವ ಸರಪಳಿ ನಿರ್ಮಿಸುವುದರ ಮೂಲಕ ವಿಶ್ವದಾಖಲೆ ಮಾಡಲಾಗಿದೆ. ಈ ವರ್ಷ ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯವಾಕ್ಯದೊಂದಿಗೆ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದೇವೆ ಎಂದರು.ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ, ಭಾಗವಹಿಸುವಿಕೆ, ಉತ್ತರದಾಯಿತ್ವ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಬಲವರ್ಧನೆ ಮಾಡಿ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ವಿವಿಧ ಆಡಳಿತ ವ್ಯವಸ್ಥೆಗಳಾದ ಚಕ್ರಾಧಿಪತ್ಯ, ರಾಜಪ್ರಭುತ್ವ, ನಿರಂಕುಶ ಪ್ರಭುತ್ವ ಈ ಎಲ್ಲ ವ್ಯವಸ್ಥೆಗಳಲ್ಲಿ ಒಳ್ಳೆಯ ಆಡಳಿತ ನೀಡುವ ವ್ಯವಸ್ಥೆ ಇದ್ದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆ ಎಂದರು. ಪ್ರಬಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗಗಳು ಯಾರ ಹಸ್ತಕ್ಷೇಪವಿಲ್ಲದೆ ಸ್ವತಂತ್ರವಾಗಿರಬೇಕು. ಸ್ವಾತಂತ್ರ‍್ಯ ಹಕ್ಕುಗಳು, ಸಮಾನ ಕಾನೂನುಗಳು ಇರಬೇಕು. ವ್ಯವಸ್ಥಿತ ವಿರೋಧ ಪಕ್ಷವಿರಬೇಕು. ಆಗ ಆಡಳಿತ ಪಕ್ಷವನ್ನು ಹತೋಟಿಗೆ ತರಲು ಸಹಕಾರಿಯಾಗಲಿದೆ ಎಂದರು.ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರ‍್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರಶಾಂತ ವರಗಪ್ಪನವರ, ಸಮುದಾಯದ ಮುಖಂಡರು, ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆಂಜನೇಯ ಹುಲ್ಲಾಳ ಸ್ವಾಗತಿಸಿದರು.ಸೈಕಲ್ ಜಾಥಾಗೆ ಚಾಲನೆಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೋಮವಾರ ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೈಕಲ್ ಜಾಥಾ ಚಾಲನೆ ನೀಡಿದರು. ಸೈಕಲ್ ರ‍್ಯಾಲಿಯು ನಗರದ ಜೆ.ಪಿ. ಸರ್ಕಲ್, ಎಂ.ಜಿ. ರಸ್ತೆ, ಹುಕ್ಕೇರಿಮಠ, ಗುತ್ತಲ ರಸ್ತೆ ಮಾರ್ಗವಾಗಿ ಹೊಸಮನಿ ಸಿದ್ದಪ ಸರ್ಕಲ್, ಹಾನಗಲ್ಲ ರಸ್ತೆ ಮೂಲಕ ಬೈಪಾಸ್ ತಲುಪಿ, ಹೊಸಮನಿ ಸಿದ್ದಪ್ಪ ಸರ್ಕಲ್‌ಗೆ ಹಿಂದುರುಗಿ, ಪಿ.ಬಿ. ರಸ್ತೆ ಮಾರ್ಗವಾಗಿ ಸಂಚರಿಸುತ್ತಾ ಜಿ.ಎಚ್. ಕಾಲೇಜು ಹಿಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ತಲುಪಿದರು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸಾರ್ವಜನಿಕರು ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರು.
ಬೈಕ್ ಜಾಥಾಗೆ ಚಾಲನೆ..ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯ ವಾಕ್ಯದಡಿ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಯಿತು. ಹಾವೇರಿಯಿಂದ ಬೆಂಗಳೂರುವರೆಗೆ ಬೈಕ್ ರ‍್ಯಾಲಿ ಆಯೋಜಿಸಿದ್ದು, ಹತ್ತು ದ್ವಿಚಕ್ರ ವಾಹನ ಸವಾರರು ಭಾನುವಾರ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.