ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುಸಮಾಜದ ಒಳಿತಿಗಾಗಿ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ್ ಕರೆ ನೀಡಿದರು. ನಗರ ಕೇಂದ್ರ ಗ್ರಂಥಾಲಯದಲ್ಲಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ದೇಶ ಮತ್ತು ಸಮಾಜಕ್ಕಾಗಿ ಸೇವೆ ಸಲ್ಲಿಸುವ ಅಮೂಲ್ಯ ಅವಕಾಶ ಸರ್ಕಾರಿ ನೌಕರರಿಗೆ ದೊರಕಿರುವುದರಿಂದ ಪ್ರತಿಯೊಬ್ಬ ಸರ್ಕಾರಿ ನೌಕರನೂ ಸಹ ಪ್ರಾಮಾಣಿಕವಾಗಿ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು. ಯಾವುದೇ ಆಸೆ ಆಕಾಂಕ್ಷೆಗಳಿಗೂ ಬಲಿಯಾಗದೆ, ನೈತಿಕತೆಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಿದಾಗ ಮಾತ್ರ ನಮ್ಮ ವ್ಯಕ್ತಿತ್ವ ಮತ್ತು ನಮ್ಮ ಹೆಸರು ಜನ ಮಾನಸದಲ್ಲಿ ಉಳಿದುಕೊಳ್ಳುತ್ತದೆ. ಅಧಿಕಾರಿ ಮತ್ತು ಸಾರ್ವಜನಿಕರ ಸಹಕಾರದಿಂದ ಮಾತ್ರ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಮನುಷ್ಯನನ್ನು ಹೊರತುಪಡಿಸಿ ಪ್ರಪಂಚದ ಎಲ್ಲಾ ವಸ್ತು ಮತ್ತು ಪ್ರಾಣಿಗಳಿಗೆ ಬೆಲೆ ಇದೆ. ಬೆಲೆ ಕಟ್ಟಲು ಸಾಧ್ಯವಾಗದ ನಾವು ನೈತಿಕತೆಯನ್ನು ಬಿಟ್ಟು ದಾರಿ ತಪ್ಪದೆ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.೭ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಮಾತನಾಡಿ, ಸಾರ್ವಜನಿಕರ ಸೇವೆಗಾಗಿ ನೇಮಕಗೊಂಡ ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಪಣ ತೊಡಬೇಕು ಎಂದು ತಿಳಿಸಿದರು. ಸರ್ಕಾರಿ ಅಧಿಕಾರಿಗಳು ತಮ್ಮ ಕುಟುಂಬದ ಆಸ್ತಿ ಹಾಗೂ ಆದಾಯದ ಮೂಲಗಳನ್ನು ಸರ್ಕಾರಕ್ಕೆ ವರದಿ ನೀಡಬೇಕು. ನಾಗರಿಕ ಸೇವಾ ನಿಯಮಗಳನ್ನು ಪಾಲಿಸುವ ಮೂಲಕ ಪ್ರಾಮಾಣಿಕ ಅಧಿಕಾರಿಗಳಾಗಬೇಕು. ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ ನಿಗಧಿತ ಅವಧಿಯೊಳಗೆ ಸೌಲಭ್ಯಗಳನ್ನು ತಲುಪಿಸಬೇಕು ಎಂದ ಅವರು ಭ್ರಷ್ಟಾಚಾರ ತಡೆ ಕಾನೂನು ಮತ್ತು ಕಾಯ್ದೆಗಳ ಬಗ್ಗೆ ಅರಿವು ಮೂಡಿಸಿ ಭ್ರಷ್ಟಾಚಾರಕ್ಕೊಳಗಾದ ವ್ಯಕ್ತಿಗಳಿಗೆ ವಿಧಿಸುವ ಶಿಕ್ಷೆಗಳ ಬಗ್ಗೆ ತಿಳಿಸಿದರು.ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ತುಮಕೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ವಿ. ಲಕ್ಷ್ಮೀನಾರಾಯಣ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ರಾಜೇಶ್ವರಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.