ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಬಾಲ್ಯವಿವಾಹದ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗಲಿದೆ ಎಂದು ನ್ಯಾಯಮೂರ್ತಿ ಕೆ. ಸೋಮಶೇಖರ್ ತಿಳಿಸಿದರು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದಲ್ಲಿ ಚಾಮರಾಜನಗರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಪರಿವರ್ತಿಸಲು ’ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ’ಗಳಿಗೆ ಹಮ್ಮಿಕೊಳ್ಳಲಾಗಿದ್ದ ಸಾಮರ್ಥ್ಯಾಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸತಿಪದ್ದತಿ ಕಾಲದಿಂದಲೂ ಬಾಲ್ಯವಿವಾಹ ಸಮಾಜಕ್ಕೆ ಕಳಂಕವಾಗಿ ಪರಿಣಮಿಸಿದೆ. ಬಾಲ್ಯವಿವಾಹ ನಿರ್ಮೂಲನೆಗೆ ಸರ್ಕಾರದಿಂದ ಹಲವು ಕಾಯ್ದೆಗಳನ್ನು ಜಾರಿಗೊಳಿಸಿದ್ದರೂ ಅಲ್ಲಲ್ಲಿ ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಬಾಲ್ಯವಿವಾಹದ ಪರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಿಕ್ಷಣ ಪಡೆದು ಜ್ಞಾನ ವೃದ್ಧಿಸಿಕೊಳ್ಳಬೇಕು. ಮಕ್ಕಳಿಗೆ ಸುರಕ್ಷತೆ ಒದಗಿಸಬೇಕಿದೆ. ಪೋಷಕರು ಚಿಂತನಾ ಸಾಮರ್ಥ್ಯ ಬೆಳೆಸಿಕೊಂಡು ನೆರೆಹೊರೆಯವರಿಗೂ ತಿಳಿಹೇಳಬೇಕು. ಸುಶಿಕ್ಷಿತ ಸಮಾಜ, ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ದೇಶ ನಿರ್ಮಾಣವಾಗಬೇಕು. ಆಗಮಾತ್ರ ಬಾಲ್ಯವಿವಾಹ ಸಂಪೂರ್ಣ ನಿಯಂತ್ರಣಕ್ಕೆ ಬರಲಿದೆ ಎಂದು ಹೇಳಿದರು.ಆರಂಭದಲ್ಲಿ ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ಭಾರತಿ ಅವರು ಸಂವಿಧಾನದ ಪೀಠಿಕೆ ಬೋಧಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಈಶ್ವರ ಮಾತನಾಡಿ, ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದೆ. ಹೆಣ್ಣಿಗೆ ೧೮, ಗಂಡಿಗೆ ೨೧ ವರ್ಷ ತುಂಬಿದ ಬಳಿಕವೇ ಮದುವೆ ಬಗ್ಗೆ ಪೋಷಕರು ಚಿಂತಿಸಬೇಕು. ಮುಖ್ಯವಾಗಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಮೂಲಕ ಬಾಲ್ಯವಿವಾಹ ಸಂಪೂರ್ಣ ನಿರ್ಮೂಲನೆಗೆ ಮುಂದಾಗಬೇಕು ಎಂದರು.ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ದೇಶ ಸ್ವಾತಂತ್ರ್ಯಗೊಂಡು ೭೫ ವರ್ಷ ಆಗಿದ್ದರೂ ಇನ್ನೂ ನಾವು ಬಾಲ್ಯವಿವಾಹದ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ. ಬಾಲ್ಯವಿವಾಹ ನಿರ್ಮೂಲನೆಗೆ ಹೆಚ್ಚಿನ ಅರಿವು ಮೂಡಿಸುವ ಚಟುವಟಿಕೆಗಳು ನಡೆಯುತ್ತಿದ್ದರೂ ಆಗಾಗ್ಗೆ ಬಾಲ್ಯವಿವಾಹ ಜರುಗುತ್ತಿವೆ. ಪ್ರಕರಣಗಳು ಹೆಚ್ಚಿದಷ್ಟು ಪರಿಣಾಮಕಾರಿ ಯೋಜನೆ ರೂಪಿಸಲು ಸಹಾಯಕವಾಗಲಿದೆ.
ಜಿಲ್ಲೆ ಜನಪದ ಕಲೆ, ಸಾಹಿತ್ಯದಲ್ಲಿ ಮುಂದಿದೆ. ಶೇ. ೫೦ರಷ್ಟು ಅರಣ್ಯ ಪ್ರದೇಶವಿರುವ ಸಂಪದ್ಭರಿತ ಹಸಿರಿನ ಸುಂದರ ಜಿಲ್ಲೆ ನಮ್ಮದು. ಜಿಲ್ಲೆಯಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳು ಇದ್ದಾರೆ. ಆದರೂ ಸಹ ಕೆಲ ಸಾಮಾಜಿಕ ಕಟ್ಟುಪಾಡು, ಒತ್ತಡಗಳಿಗೆ ಒಳಗಾಗಿ ನಮ್ಮ ಜವಾಬ್ದಾರಿಯನ್ನು ಮರೆಯಬಾರದು. ಈ ವ್ಯವಸ್ಥೆ ಬದಲಾಗಬೇಕು ಎಂದರು.ಜಿಲ್ಲೆಯ ೧೩೦ ಗ್ರಾಮಪಂಚಾಯಿತಿಗಳಲ್ಲಿ ಸಾಕಷ್ಟು ಮಹಿಳಾ ಅಧ್ಯಕ್ಷರು, ಸದಸ್ಯರಿದ್ದಾರೆ. ಎಲ್ಲಾ ಗ್ರಾಮಗಳು, ವಾರ್ಡ್‌ಗಳಲ್ಲಿ ಬಾಲ್ಯವಿವಾಹ ನಿರ್ಮೂಲನೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ಆ ಮೂಲಕ ಮೊದಲು ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಕೈಗೊಳ್ಳಬೇಕು.
ಜಿಲ್ಲೆಯಲ್ಲಿ ಬಾಲ್ಯವಿವಾಹದ ನಿಯಂತ್ರಣ ಪ್ರಕ್ರಿಯೆ ನವೆಂಬರ್ ೧೪ರ ಮಕ್ಕಳ ದಿನಾಚರಣೆ ವೇಳೆಗೆ ಸಂಪೂರ್ಣವಾಗಬೇಕು. ಹೆಚ್ಚಿನ ಪ್ರಗತಿ ಸಾಧಿಸುವ ಗ್ರಾಮಪಂಚಾಯಿತಿಗೆ ಪ್ರಶಸ್ತಿ ನೀಡುವ ಯೋಜನೆ ಇದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸಿ ಜನಪ್ರತಿನಿಧಿಗಳು, ಸಾರ್ವಜನಿಕರು ಸೇರಿದಂತೆ ಎಲ್ಲರ ಸಹಕಾರ ಪಡೆದು ಸಂಪೂರ್ಣ ನಿಯಂತ್ರಣಕ್ಕೆ ದೃಢಸಂಕಲ್ಪ ಮಾಡೋಣ. ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪಣ ತೋಡೋಣ ಎಂದು ತಿಳಿಸಿದರು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಕಾರ್ಯಕ್ರಮದ ಉದ್ದೇಶ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಂಪನ್ಮೂಲ ವ್ಯಕ್ತಿಗಳಾದ ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಆಯೋಗದ ಸದಸ್ಯರು ಹಾಗೂ ಅಭಿವೃದ್ಧಿ ಶಿಕ್ಷಣ ತಜ್ಞರಾದ ಪ್ರೊ. ವಿ.ಪಿ. ನಿರಂಜನಾರಾಧ್ಯ, ಬಚಪನ್ ಬಚಾವೋ ಆಂದೋಲನದ ರಾಜ್ಯ ಸಂಯೋಜಕರಾದ ಬಿನು ವರ್ಗಿಸ್, ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿ ಕೆ.ವಿ. ಸ್ಟ್ಯಾನ್ಲಿ, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ನಿರ್ದೇಶಕರಾದ ಸರಸ್ವತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಲತಾ, ಇತರರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.ವೇದಿಕೆ ಕಾರ್ಯಕ್ರಮದ ಬಳಿಕ ಸಂಪನ್ಮೂಲ ವ್ಯಕ್ತಿಗಳಿಂದ ’ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ’ಗಳಿಗೆ ಬಾಲ್ಯವಿವಾಹ ತಡೆಗಟ್ಟುವ ಕುರಿತ ಸಾಮರ್ಥ್ಯಾಭಿವೃದ್ಧಿ ವಿಚಾರ ಗೋಷ್ಠಿಗಳು ನಡೆದವು.