ಲಸಿಕೆಯಿಂದ ಮಾತ್ರ ದಡಾರ, ರುಬೆಲ್ಲಾ ರೋಗದ ನಿರ್ಮೂಲನೆ

| Published : Jul 09 2024, 12:50 AM IST

ಸಾರಾಂಶ

ಸೋಮವಾರ ನಗರದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರುದಡಾರ ಮತ್ತು ರುಬೆಲ್ಲಾ ರೋಗದ ನಿಯಂತ್ರಣ ಸಮರ್ಪಕವಾದ ಲಸಿಕಾಕರಣದಿಂದ ಮಾತ್ರ ಸಾಧ್ಯ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಹೇಳಿದರು. ಅವರು ಸೋಮವಾರ ನಗರದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಮಕ್ಕಳಿಗೆ ನೀಡುವ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.97 ಮಂಗಳೂರು ನಗರ ವ್ಯಾಪ್ತಿಯಲ್ಲಿ ಶೇ. 69 ರಷ್ಟು ಕುಂಠಿತ ಪ್ರಗತಿಯನ್ನು ಸೂಚಿಸುತ್ತಿದೆ. ಎಂಆರ್ 1 ಮತ್ತು ಎಂಆರ್ 2 ಲಸಿಕೆಯಿಂದ ವಂಚಿತರಾಗಿರುವ ಎಲ್ಲ ಮಕ್ಕಳಿಗೂ ಸಮರ್ಪಕವಾಗಿ ಲಸಿಕೆ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತರು ಸೂಚಿಸಿದರು.

ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಕ್ರಮ ವಹಿಸುವಂತೆ ತಿಳಿಸಿದರು. ತಾಯಂದಿರ ಸಭೆ ಹಾಗೂ ಬಾಲ ವಿಕಾಸ ಸಮಿತಿ ಸಭೆಯಲ್ಲಿ, ದಡಾರ ರುಬೆಲ್ಲಾ ಲಸಿಕೆಯ ಬಗ್ಗೆ ಮಾಹಿತಿ ನೀಡಬೇಕು. ಸಿಡಿಪಿಒಗಳು ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸದಸ್ಯರಾಗಿ ಮೇಲ್ವಿಚಾರಣೆ ನಡೆಸಬೇಕು. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್‌ ಸಭೆಯಲ್ಲಿ ಮೇಲ್ವಿಚಾರಣಾ ವರದಿಯನ್ನು ಪ್ರಸ್ತುತಪಡಿಸಿ ಚರ್ಚಿಸಬೇಕು ಎಂದು ಅವರು ಹೇಳಿದರು.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಆಯುಷ್ಮತಿ ಆರೋಗ್ಯ ಕೇಂದ್ರಗಳಿಗೆ ಖಾಸಗಿ ಕ್ಲಿನಿಕ್‍ಗಳ ನುರಿತ ವೈದ್ಯರನ್ನು ವಾರದಲ್ಲಿ ಒಂದು ದಿನದ ಮಟ್ಟಿಗೆ ಉಚಿತ ಸೇವೆಯನ್ನು ನೀಡಲು ಮನವಿ ಮಾಡಿಕೊಳ್ಳುವಂತೆ ಆಯುಕ್ತರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ರಾಜೇಶ್, ವಿಶ್ವ ಆರೋಗ್ಯ ಸಂಸ್ಥೆಯ ಸರ್ವಲೆನ್ಸ್ ಮೆಡಿಕಲ್ ಆಫೀಸರ್ ಡಾ. ಹರ್ಷಿತ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್, ಮಂಗಳೂರು ಮಹಾನಗರ ಆರೋಗ್ಯ ಅಧಿಕಾರಿ ಡಾ. ಮಂಜಯ್ಯ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಮತ್ತಿತರರಿದ್ದರು.