ಸಾರಾಂಶ
ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಶಿಸ್ತು, ಕಠಿಣ ಪರಿಶ್ರಮ ಮತ್ತು ಬದ್ದತೆಯನ್ನು ಮೈಗೂಡಿಸಿಕೊಳ್ಳುವುದರಿಂದ ಉತ್ತಮ ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂದು ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಹೇಳಿದರು
ಬೆಂಗಳೂರು: ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಶಿಸ್ತು, ಕಠಿಣ ಪರಿಶ್ರಮ ಮತ್ತು ಬದ್ದತೆಯನ್ನು ಮೈಗೂಡಿಸಿಕೊಳ್ಳುವುದರಿಂದ ಉತ್ತಮ ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂದು ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಹೇಳಿದರು.
ನಗರದಲ್ಲಿ ಇತ್ತೀಚೆಗೆ ನಡೆದ ರಾಜಾಜಿನಗರದ ಇಎಸ್‌ಐಸಿ ವೈದ್ಯಕೀಯ ಕಾಲೇಜಿನ 7ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು 94 ವಿದ್ಯಾರ್ಥಿಗಳಿಗೆ ವೈದ್ಯಕೀಯ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದುದು. ಪ್ರತಿಯೊಬ್ಬರ ಭವಿಷ್ಯವನ್ನು ನಿರ್ಧರಿಸುವ ಹಂತವಾಗಿರುತ್ತದೆ. ವಿದ್ಯಾರ್ಥಿಗಳಲ್ಲಿ ಅನನ್ಯವಾದ ಸಾಮರ್ಥ್ಯ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಿ ಬೆಳೆಸುವುದು ಬೋಧಕ ವರ್ಗ ಹಾಗೂ ಪೋಷಕರ ಕರ್ತವ್ಯ. ಈ ಹಂತದಲ್ಲಿ ವಿದ್ಯಾರ್ಥಿಗಳು ಶಿಸ್ತು, ಸಂಯಮ, ಕಠಿಣ ಪರಿಶ್ರಮ ಮತ್ತು ಹಿಡಿದ ಕೆಲಸ ಅಥವಾ ಇಟ್ಟ ಗುರಿ ಮುಟ್ಟುವವರೆಗೆ ಹಿಮ್ಮೆಟ್ಟುವುದಿಲ್ಲವೆಂಬ ಬದ್ಧತೆಯಂತಹ ಗುಣಗಳನ್ನು ಅಳವಡಿಸಿಕೊಂಡರೆ ಅದೇ ಸಾಧನೆಗೆ ದಾರಿಯಾಗುತ್ತದೆ ಎಂದರು.
ಇಎಸ್‌ಐಸಿ ದೇಶದ ಅತ್ಯುತ್ತಮ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಾಗಿದ್ದು, ಇಲ್ಲಿನ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕೋಟ್ಯಾಂತರ ರೋಗಿಗಳಿಗೆ ಉತ್ತಮ ಆರೋಗ್ಯ ಚಿಕಿತ್ಸೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ನೇತ್ರ ವಿಜ್ಞಾನ ವಿಭಾಗದಲ್ಲಿ ವಿಶ್ವವಿದ್ಯಾಲಯ ಟಾಪರ್ ಡಾ..ಭರಣಿಶ್ರೀ ಕಣ್ಣನ್, ಕಾಲೇಜಿನ ಟಾಪರ್ ಡಾ.ಸಿ.ಎಸ್. ಅರ್ಚನಾ ಸೇರಿದಂತೆ 94 ವಿದ್ಯಾರ್ಥಿಗಳಿಗೆ ಗಣ್ಯರು ಪದವಿ ಪ್ರದಾನ ಮಾಡಿದರು. ಈ ವೇಳೆ, ಇಎಸ್‌ಐಸಿ ವೈದ್ಯಕೀಯ ಕಾಲೇಜಿನ ಡೀನ್ ಡಾ.ಸಂಧ್ಯಾ ಆರ್., ರಿಜಿಸ್ಟ್ರಾರ್ ಡಾ.ಸುಚಿತ್ರ, ಡಾ.ಚಂದ್ರಶೇಖರ್ ಎಚ್., ಡಾ.ಶ್ರೀನಿವಾಸ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.