ಹುಬ್ಬಳ್ಳಿ:

ಕಿತ್ತೂರ ಕರ್ನಾಟಕ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚಿಸಿ ₹ 5000 ಕೋಟಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿರುವ ವಿಧಾನ ಪರಿಷತ್‌ ಸದಸ್ಯ ಎಫ್‌.ಎಚ್‌. ಜಕ್ಕಪ್ಪನವರ, ಈ ಭಾಗದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು ತಕ್ಷಣ ಸರ್ಕಾರ ಮೋಡ ಬಿತ್ತನೆ ಮಾಡಬೇಕೆಂದು ಒತ್ತಾಯಿಸಿದರು.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಪತ್ರ ಬರೆದಿರುವ ಅವರು, ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಿತ್ತೂರ ಕರ್ನಾಟಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಕೂಡಲೇ ಪ್ರಾಧಿಕಾರ ರಚಿಸಿ ₹ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಮುಂಗಾರು ಮಳೆ ಸಕಾಲಕ್ಕೆ ಸುರಿಯದೆ ರೈತರು ಬಿತ್ತನೆ ಮಾಡಿದ ಬೆಳೆ ನಾಶವಾಗುತ್ತಿವೆ. ಸರ್ಕಾರವೇ ವೆಚ್ಚ ಭರಿಸಿ ಮೋಡ ಬಿತ್ತನೆ ಮಾಡಿ ರೈತರ ಬೆಳೆ ರಕ್ಷಿಸಬೇಕು ಎಂದಿರುವ ಅವರು, ಕಿತ್ತೂರ ಕರ್ನಾಟಕದಲ್ಲಿ ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ-ಧಾರವಾಡ ಮಹಾನಗರದ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಿಸಿ ₹ 2000 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಕಿತ್ತೂರ ಭಾಗದಲ್ಲಿ ರಾಜ್ಯ ಸರ್ಕಾರ "ಡಿಫೆನ್ಸ್ ಪಾರ್ಕ್ " ಮಾಡಲು ತಾತ್ವಿಕ ಒಪ್ಪಿಗೆ ನೀಡಿದ್ದು, ಅಭಿವೃದ್ಧಿ ಕಾಮಗಾರಿ ಕೂಡಲೇ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಸಮೀಪದಲ್ಲಿ ಮ್ಯಾನುಫ್ಯಾಕ್ಟರಿಂಗ್ ಹಬ್-ಸಿಟಿ ಅಭಿವೃದ್ಧಿಪಡಿಸಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಬೇಕು. ಕಿತ್ತೂರ ಕರ್ನಾಟಕದಲ್ಲಿ ದೊಡ್ಡ ಕೈಗಾರಿಕೆ ಸ್ಥಾಪಿಸಲು ಈ ಮೂಲಕ ಇಲ್ಲಿನ ನಿರುದ್ಯೋಗ ಸಮಸ್ಯೆ ಹೋಗಲಾಡಿಸಬೇಕು ಎಂದು ಆಗ್ರಹಿಸಿದ್ದಾರೆ.