ಸಾರಾಂಶ
ಚಿತ್ರದುರ್ಗ: ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಲು ಸಖಿ(ಪಿಂಕ್), ಥೀಮ್ ಆಧಾರಿತ ಹಾಗೂ ಯಂಗ್ ಬೂತ್ ಸ್ಥಾಪಿಸಲು ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಶೇ.5ರಷ್ಟು ಮತದಾನ ಹೆಚ್ಚಳಕ್ಕೆ ರೂಪುರೇಷೆ ಸಿದ್ಧಪಡಿಸಲು ಸಭೆ ನಿರ್ಧರಿಸಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಅಧ್ಯಕ್ಷತೆವಹಿಸಿದ್ದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ.70.71ರಷ್ಟು ಮತದಾನವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ನಗರ ಪ್ರದೇಶದಲ್ಲಿ ಮತದಾನ ಜಾಗೃತಿಗಾಗಿ ಜಾಥಾ ಕಾರ್ಯಕ್ರಮ, ಕಲಾತಂಡಗಳು, ಭಿತ್ತಿಪತ್ರಗಳು, ಮನೆಮನೆಗೆ ಭೇಟಿ ನೀಡಿ ಅರಿವು ಮೂಡಿಸುವುದು, ಮ್ಯಾರಾಥಾನ್, ವಾಕಾಥಾನ್ ಮೂಲಕ ಮತದಾನ ಬಗ್ಗೆ ಅರಿವು ಮೂಡಿಸಲು ನಿರ್ಣಯಿಸಲಾಯಿತು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಕಡಿಮೆ ಮತದಾನ ದಾಖಲಾದ ಸ್ಥಳಗಳಲ್ಲಿ ಮತದಾನ ಹೆಚ್ಚಳಕ್ಕೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮವಹಿಸಬೇಕು. ಪ್ರಾಥಮಿಕವಾಗಿ ಶೇ.50ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ, ವಾರ್ಡ್‍ಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾ.21ರಿಂದ 23ರವರೆಗೆ ಮೂರು ದಿನಗಳ ಕಾಲ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಶೇ.50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರು ಇರುವ ಮತಗಟ್ಟೆಗಳನ್ನು ವಿಧಾನಸಭಾ ಕ್ಷೇತ್ರವಾರು ಗುರುತಿಸಿ, ಮಹಿಳಾ ಅಧಿಕಾರಿಗಳೇ ಮತದಾನದ ದಿನದಂದು ನಿರ್ವಹಿಸಲು ನಿರ್ಣಯ ಕೈಗೊಳ್ಳಲಾಯಿತು. ಮಹಿಳೆಯರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಹಾಗೂ ಚುನಾವಣಾ ಮುಖ್ಯವಾಹಿನಿಗೆ ಮಹಿಳೆಯರನ್ನು ಸೆಳೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 5ರಂತೆ ಒಟ್ಟು 30 ಸಖಿ (ಪಿಂಕ್) ಮತಗಟ್ಟೆ ಸ್ಥಾಪಿಸಲಾಗುತ್ತಿದೆ. ಸಖಿ ಮತಗಟ್ಟೆಗಳ ಜವಾಬ್ದಾರಿ ನಿರ್ವಹಣೆಗಾಗಿ ನಗರಸಭೆ ಪೌರಾಯುಕ್ತರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ವಿಕಲಚೇತನರ ಕಲ್ಯಾಣಾಧಿಕಾರಿಗಳನ್ನೊಳಗೊಂಡ ಉಪಸಮಿತಿಗೆ ಸೂಚಿಸಲಾಯಿತು. ಹಾಗೆಯೇ ಯುವ ಅಧಿಕಾರಿಗಳನ್ನು ಒಳಗೊಂಡ ತಂಡದಿಂದ ನಿರ್ವಹಿಸಲು ಯಂಗ್‌ಬೂತ್‌ಗಳನ್ನು ಗುರುತಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 1ರಂತೆ 6 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 6 ಮತಗಟ್ಟೆ ಸ್ಥಾಪಿಸಬೇಕು ಎಂದು ಹೇಳಿದರು.ಮತಗಟ್ಟೆಗಳ ಪ್ರವೇಶದ್ವಾರದಲ್ಲಿ ಸ್ಥಳೀಯ ಐತಿಹಾಸಿಕ ಹಿನ್ನಲೆ ಮತ್ತು ಪ್ರಾಮುಖ್ಯತೆ ಆಧಾರದ ಮೇಲೆ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಚಿತ್ರದುರ್ಗದ ಐತಿಹಾಸಿಕ ಕೋಟೆ, ವಿವಿ ಸಾಗರ, ಇತರೆ ಚಿತ್ರಗಳನ್ನು ಬರೆಯಿಸಿ ಹೆಚ್ಚಿನ ಮತದಾರರು ಮತಗಟ್ಟೆಗೆ ಆಗಮಿಸಿ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1ರಂತೆ ಥೀಮ್ ಆಧಾರಿತ ಮತಗಟ್ಟೆಗಳನ್ನು ಸ್ಥಾಪಿಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣಾಧಿಕಾರಿಗಳನ್ನೊಳಗೊಂಡ ಉಪಸಮಿತಿಗೆ ಸೂಚಿಸಲಾಯಿತು.
ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಪಿಠೋಪಕರಣ, ಶೌಚಾಲಯ, ಪ್ಯಾನ್, ಬೆಳಕಿನ ವ್ಯವಸ್ಥೆ, ರ್‍ಯಾಂಪ್, ಅಂಗವಿಕಲರಿಗೆ ವ್ಹೀಲ್ ಚೇರ್ ವ್ಯವಸ್ಥೆ ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಅಂಗವಿಕಲರ ಕಲ್ಯಾಣಾಧಿಕಾರಿ ಎಂ.ವಿ.ವೀಣಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.