ಕನ್ನಡಪ್ರಭ ವಾರ್ತೆ ಬಾಗಲಕೋಟೆಹುನಗುಂದ ತಾಲೂಕಿನ ಅಮರಾವತಿ ಗ್ರಾಮದಲ್ಲಿ ₹147 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 220/110 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದ ಕಾಮಗಾರಿಗೆ ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಶಂಕುಸ್ಥಾಪನೆ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಹುನಗುಂದ ತಾಲೂಕಿನ ಅಮರಾವತಿ ಗ್ರಾಮದಲ್ಲಿ ₹147 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 220/110 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದ ಕಾಮಗಾರಿಗೆ ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಶಂಕುಸ್ಥಾಪನೆ ನೆರವೇರಿಸಿದರು.ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವತಿಯಿಂದ ಶನಿವಾರ ಅಮರಾವತಿ ಗ್ರಾಮದಲ್ಲಿ ಆಯೋಜಿಸಿದ್ದ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ಸತತ ಪ್ರಯತ್ನದ ಫಲವಾಗಿ ಅಮರಾವತಿಯಲ್ಲಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಸ್ಥಾಪನೆಗೆ ಮಂಜೂರಾತಿ ದೊರೆತಿದ್ದು, 20 ಎಕರೆ ಜಮೀನಿನಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಮೂಲತಃ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶಂಕುಸ್ಥಾಪನೆ ನೆರವೇರಿಸಬೇಕಿತ್ತು. ಆದರೆ, ತಾವು ಪ್ರಸ್ತುತ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಹಿನ್ನೆಲೆಯಲ್ಲಿ ಈ ಅವಕಾಶ ಕಲ್ಪಿಸಲಾಗಿದೆ ಎಂದರು.ಅಮರಾವತಿಯಲ್ಲಿ 220 ಕೆವಿ ಸ್ಟೇಷನ್ ನಿರ್ಮಾಣದಿಂದ ಮರೋಳ, ಕೊಪ್ಪಳ ಹಾಗೂ ನಂದವಾಡಗಿ ಏತ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಏತ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ವಿದ್ಯುತ್ ಅನ್ನು ನಿರಂತರವಾಗಿ ಪೂರೈಸಬೇಕಿದ್ದು, ಹೊಸ ಸ್ಟೇಷನ್‌ನಿಂದ ಈ ವ್ಯವಸ್ಥೆ ಮತ್ತಷ್ಟು ಬಲಪಡಲಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ನಿರಂತರ ವಿದ್ಯುತ್ ಪೂರೈಕೆ ಅಗತ್ಯವಿದ್ದು, ಕಾಲುವೆಗಳಿಗೆ ನೀರು ಹರಿಸಲು ಸಹ ವಿದ್ಯುತ್ ಅವಶ್ಯಕವಾಗಿದೆ. ಪ್ರಸ್ತುತ ವಿದ್ಯುತ್ ಕೊರತೆಯಿಂದ ಕೆಲವೊಮ್ಮೆ ಉಂಟಾಗುತ್ತಿರುವ ಅಡಚಣೆಗಳನ್ನು 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ನಿರ್ಮಾಣದಿಂದ ನಿವಾರಿಸಲು ಸಾಧ್ಯವಾಗಲಿದೆ ಎಂದರು.ಹುನಗುಂದ ತಾಲೂಕಿನಲ್ಲಿ ಮತ್ತಷ್ಟು ವಿದ್ಯುತ್ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವಂತೆ ಮನವಿ ಮಾಡಲಾಗಿದ್ದು, ಕುಣಬೆಂಚಿಯಲ್ಲಿ 110 ಕೆವಿ ಸ್ಟೇಷನ್ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಕಾಮಗಾರಿಗೆ ಅಗತ್ಯವಿರುವ ಐದು ಎಕರೆ ಜಮೀನನ್ನು ಜಿಲ್ಲಾಡಳಿತದಿಂದ ಒದಗಿಸಲಾಗಿದೆ. ಶೀಘ್ರದಲ್ಲೇ ಇದಕ್ಕೂ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಹೇಳಿದರು.
ಅಮರಾವತಿಯಲ್ಲಿ 220 ಕೆವಿ ಸ್ಟೇಷನ್ ಸ್ಥಾಪನೆಯಿಂದ ಹುನಗುಂದ, ಇಲಕಲ್ಲ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ನೀರಾವರಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆ ವ್ಯವಸ್ಥೆ ಮತ್ತಷ್ಟು ಬಲಪಡಲಿದೆ ಎಂದು ವಿಜಯಾನಂದ ಕಾಶಪ್ಪನವರ ವಿಶ್ವಾಸ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅನೀಲಕುಮಾರ ದಡ್ಡಿ, ಹುನಗುಂದ ತಾಲೂಕು ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ವಿದ್ಯುತ್ ಪ್ರಸರಣ ವಲಯದ ಅಧೀಕ್ಷಕ ಅಭಿಯಂತರ ರಮೇಶ ಪವಾರ, ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಭುಸಿಂಗ್ ಹಜಾರೆ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿ.ಬಿ. ಯಂಕಂಚಿ ಸೇರಿದಂತೆ ಅಧಿಕಾರಿಗಳು ಹಾಗೂ ಗಣ್ಯರು ಇದ್ದರು.
ಹುನಗುಂದ ತಾಲೂಕಿನಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆ, ಕೃಷಿ ಪಂಪ್‌ಸೆಟ್‌ಗಳು ಹಾಗೂ ನೀರಾವರಿ ಯೋಜನೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಹಿನ್ನೆಲೆಯಲ್ಲಿ ಹೆಸ್ಕಾಂ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಹುನಗುಂದದಲ್ಲಿ ಹೆಸ್ಕಾಂ ಉಪವಿಭಾಗೀಯ ಕಚೇರಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಉಪವಿಭಾಗೀಯ ಕಚೇರಿ ಸ್ಥಾಪನೆಯಿಂದ ವಿದ್ಯುತ್ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಹಾಗೂ ರೈತರು ಮತ್ತು ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಅನುಕೂಲವಾಗಲಿದೆ.
-ವಿಜಯಾನಂದ ಕಾಶಪ್ಪನವರ, ಜಿಲ್ಲಾ ಉಸ್ತುವಾರಿ ಸಚಿವ