ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಅತ್ಯಾಧುನಿಕ ಕುರಿ-ಮೇಕೆ ಮಾರಾಟ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕನಾಯಕನಹಳ್ಳಿ

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ನಂಬಿಕೊಂಡು ಜೀವನ ನಡೆಸುತ್ತಿರುವ ರೈತರು ಹಾಗೂ ಕುರಿಗಾಹಿಗಳಿಗೆ ತಮ್ಮ ಜಾನುವಾರುಗಳನ್ನು ಮಾರಾಟ ಮಾಡುವ ಸಂದರ್ಭದಲ್ಲಿ ಮಧ್ಯವರ್ತಿಗಳ ಹಾವಳಿ ಇಲ್ಲದೆ, ತೂಕಕ್ಕೆ ಅನುಗುಣವಾಗಿ ನ್ಯಾಯಯುತ ಬೆಲೆ ದೊರಕಿಸಿಕೊಡುವ ಉದ್ದೇಶದಿಂದ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಅತ್ಯಾಧುನಿಕ ಕುರಿ-ಮೇಕೆ ಮಾರಾಟ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದರು.

ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ 58.50 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅತ್ಯಾಧುನಿಕ ತೂಕದ ಯಂತ್ರ ಆಧಾರಿತ ಕುರಿ-ಮೇಕೆ ಮಾರಾಟ ಕೇಂದ್ರದ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಸುಮಾರು 4,742 ಕುರಿಗಾಹಿಗಳು ಹಾಗೂ ರೈತರು ಕುರಿ-ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ತಾಲೂಕಿನಲ್ಲಿ ಒಟ್ಟು 1,95,184 ಕುರಿ-ಮೇಕೆಗಳಿದ್ದು, ಇವುಗಳ ಮಾರಾಟಕ್ಕೆ ವೈಜ್ಞಾನಿಕ ಹಾಗೂ ವ್ಯವಸ್ಥಿತ ಮಾರುಕಟ್ಟೆ ಸೌಲಭ್ಯ ಕಲ್ಪಿಸುವುದು ಅತ್ಯಂತ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಅತ್ಯಾಧುನಿಕ ತೂಕದ ಯಂತ್ರದ ಮೂಲಕ ಕುರಿ-ಮೇಕೆಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ರೈತರು ಸಾಕಿದ ಕುರಿ-ಮೇಕೆಗಳಿಗೆ ಅವುಗಳ ನೈಜ ತೂಕಕ್ಕೆ ಅನುಗುಣವಾಗಿ ಬೆಲೆ ಪಡೆಯಲು ಸಾಧ್ಯವಾಗಲಿದೆ ಎಂದರು.

ಈ ಸಂದರ್ಭದಲ್ಲಿ ದಿಶಾ ಸಮಿತಿ ಸದಸ್ಯ ರಾಮಚಂದ್ರಯ್ಯ, ಪುರಸಭೆಯ ಮಾಜಿ ಸದಸ್ಯರಾದ ಸುರೇಶ್ ಸಿ.ಡಿ., ಮಲ್ಲಿಕಾರ್ಜುನಯ್ಯ, ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ದಬ್ಬಗುಂಟೆ ರವಿ, ಟಿಎಪಿಸಿಎಂಎಸ್ ಉಪಾಧ್ಯಕ್ಷ ಹನುಮಂತಯ್ಯ, ಪಶುಸಂಗೋಪನಾ ಇಲಾಖೆಯ ಹಿರಿಯ ಪಶುವೈದ್ಯಾಧಿಕಾರಿ ಕಾಂತರಾಜು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಮ್ಮಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.