ನಿರುದ್ಯೋಗ ನಿರ್ಮೂಲನೆಗೆ ಬೃಹತ್ ಕೈಗಾರಿಕೆ ಸ್ಥಾಪನೆ

| Published : Jun 18 2024, 12:50 AM IST

ಸಾರಾಂಶ

ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆ ಮಾಡಿ ಸ್ಥಳೀಯರಿಗೆ ಉದ್ಯೋಗ ನೀಡುವ ಕಾರ್ಯ ಮಾಡುತ್ತೇನೆ. ನಂಜಾವಧೂತ ಶ್ರೀಗಳ ಸಲಹೆಯಂತೆ ಕುಂಚಿಟಿಗ ಸಮುದಾಯಕ್ಕೆ ಓಬಿಸಿ ಮೀಸಲಾತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆ ಮಾಡಿ ಸ್ಥಳೀಯರಿಗೆ ಉದ್ಯೋಗ ನೀಡುವ ಕಾರ್ಯ ಮಾಡುತ್ತೇನೆ. ನಂಜಾವಧೂತ ಶ್ರೀಗಳ ಸಲಹೆಯಂತೆ ಕುಂಚಿಟಿಗ ಸಮುದಾಯಕ್ಕೆ ಓಬಿಸಿ ಮೀಸಲಾತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ತಾಲೂಕಿನ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠಕ್ಕೆ ಸೋಮವಾರ ಭೇಟಿ ನೀಡಿ ಶ್ರೀ ನಂಜಾವಧೂತ ಸ್ವಾಮೀಜಿ ಆರ್ಶೀವಾದ ಪಡೆದು ಮಾತನಾಡಿದರು.

ಎನ್‌ಡಿಎ ಸರ್ಕಾರದಲ್ಲಿ ಕೃಷಿ ಸಚಿವನಾಗದಿದ್ದರೂ ಸಹ ರಾಜ್ಯದ ರೈತರ ಏಳಿಗೆಗಾಗಿ ಶ್ರಮಿಸುತ್ತೇನೆ. ರಾಜ್ಯದ ಗ್ರಾಮೀಣ ಪ್ರದೇಶದ ಯುವಕ, ಯುವತಿಯರಿಗೆ ಉದ್ಯೋಗ ದೊರಕುವಂತಹ ಕೈಗಾರಿಕೆಗಳ ಸ್ಥಾಪನೆ ಮಾಡುತ್ತೇನೆ. ಈಗಾಗಲೇ ಎಚ್‌, ದೇವೆಗೌಡರು ಕಾಡುಗೊಲ್ಲರಿಗೆ ಎಸ್ಟಿ ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ. ನಾನು ಕೂಡ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕಾಡುಗೊಲ್ಲರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡುತ್ತೇನೆ ಎಂದರು.

ಸ್ಪಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರು ಸ್ಥಾಪಿಸಿದ ಮೈಸೂರು ಮಿಲ್ಸ್, ಭದ್ರಾವತಿ ಉಕ್ಕಿನ ಕಾರ್ಖಾನೆ ಪುನಃಶ್ಚೇತನಗೊಳಿಸಬೇಕು. ಜೊತೆಗೆ ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆಗಳಲ್ಲಿ ಕರ್ನಾಟಕದವರಿಗೆ ಉದ್ಯೋಗ ನೀಡುವಂತಹ ಮಹತ್ವ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದರು.

ಕುಂಚಿಟಿಗರಿಗೆ ಓಬಿಸಿ ಮೀಸಲಾತಿ ಕಲ್ಪಿಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿ ಸಾಧಿಸಲು ಅನುಕೂಲ ಮಾಡಿಕೊಡಬೇಕು. ಶಿರಾ ಮತ್ತು ತುಮಕೂರು, ವಸಂತ ನರಸಾಪುರ ಕೈಗಾರಿಕಾ ವಲಯ ಪ್ರದೇಶಗಳಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಚಿತ್ರದುರ್ಗ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಬಯಲು ಸೀಮೆಯ ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಬೇಕು ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಜೊತೆಗೆ ಯೋಜನೆಯಲ್ಲಿ ಕೈಬಿಟ್ಟಿರುವ ಮಧುಗಿರಿ ಮತ್ತು ಕೊರಟಗೆರೆ ತಾಲೂಕುಗಳನ್ನು ಸೇರ್ಪಡೆಗೊಳಿಸಿ, ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಸಲಹೆ ನೀಡಿದರು.

ಸಂಸದ ಗೋವಿಂದ ಕಾರಜೋಳ, ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕ ಸಿ.ಬಿ. ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ, ಕೆ.ಎ.ತಿಪ್ಪೇಸ್ವಾಮಿ, ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ, ಜೆಡಿಎಸ್ ರಾಜ್ಯ ಪರಿಷತ್ ಸದಸ್ಯ ಆರ್.ಉಗ್ರೇಶ್, ಜಿಪಂ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಸ್ವಾಮಯ್ಯ, ಮಾಜಿ ಶಾಸಕರಾದ ವೀರಭದ್ರಪ್ಪ, ಸುಧಾಕರ್ ಲಾಲ್, ತಿಮ್ಮರಾಯಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ, ಮಾಜಿ ಸಚಿವ ಶಿವಣ್ಣ, ತಾಲೂಕು ಜೆಡಿಎಸ್ ಅಧ್ಯಕ್ಷ ಸತ್ಯ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ರಾಮಕೃಷ್ಣ ಇದ್ದರು.