ಬೇಡಿಕೆಗನುಗುಣವಾಗಿ ಹೊಸ ಮೇವಿನ ಬ್ಯಾಂಕ್ ಸ್ಥಾಪನೆ: ಡೀಸಿ

| Published : May 15 2024, 01:42 AM IST / Updated: May 15 2024, 01:43 AM IST

ಬೇಡಿಕೆಗನುಗುಣವಾಗಿ ಹೊಸ ಮೇವಿನ ಬ್ಯಾಂಕ್ ಸ್ಥಾಪನೆ: ಡೀಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕೆರೆಯ ಮಣ್ಣನ್ನು ತೆಗೆಯಲು ಹೇರಿರುವ ನಿರ್ಬಂಧವನ್ನು ಹಿಂಪಡೆಯಬೇಕೆಂದು ಪತ್ರಕರ್ತರು ಮನವಿ ಮಾಡಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕೆರೆಯ ಮಣ್ಣನ್ನು ತೆಗೆಯುವುದರಿಂದ ಮಳೆ ನೀರು ಸಂಗ್ರಹವಾಗದೇ ನೀರೆಲ್ಲ ಇಂಗಿ ಹೋಗುತ್ತದೆ. ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗುವುದನ್ನು ತಡೆಯಲು ಅವೈಜ್ಞಾನಿಕವಾಗಿ ಮಣ್ಣು ತೆಗೆಯುವುದನ್ನು ನಿಯಂತ್ರಿಸುವ ಸಲುವಾಗಿ ನಿರ್ಬಂಧವನ್ನು ಹೇರಲಾಗಿದೆ.

ಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲೆಯಲ್ಲಿ ಈವರೆಗೂ 15 ಮೇವಿನ ಬ್ಯಾಂಕ್‌ಗಳನ್ನು ತೆರೆಯಲಾಗಿದ್ದು, ರೈತರ ಬೇಡಿಕೆಗನುಗುಣವಾಗಿ ಹೊಸ ಮೇವಿನ ಬ್ಯಾಂಕ್‌ಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಕೊರಟಗೆರೆ ತಾಲೂಕು ಕ್ಯಾಮೇನಹಳ್ಳಿಗೆ ಮಂಗಳವಾರ ಭೇಟಿ ನೀಡಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದ ಬಳಿಯಿರುವ ಮೇವಿನ ಬ್ಯಾಂಕನ್ನು ಅವರು ಪರಿಶೀಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಮೇ 2 ರಿಂದ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಆದರೆ ಕೊರಟಗೆರೆ ತಾಲೂಕಿನಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿರುವುದರಿಂದ ಜಾನುವಾರುಗಳ ಮೇವು, ರೈತರ ಸಮಸ್ಯೆ, ನೀರಿನ ಸಮಸ್ಯೆಯನ್ನು ಅರಿತು ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಕೊರಟಗೆರೆ ತಾಲೂಕಿಗಿಂದು ಭೇಟಿ ನೀಡಲಾಗಿದೆ ಎಂದು ತಿಳಿಸಿದರು.

ಮೇವಿನ ಬ್ಯಾಂಕಿನಲ್ಲಿ ಪ್ರತಿ ಕೆಜಿ ಮೇವಿಗೆ 2 ರು.ನಂತೆ ವಿತರಣೆ ಮಾಡಲಾಗುತ್ತಿದ್ದು, ರಾಜ್ಯ ವಿಕೋಪ ನಿರ್ವಹಣಾ ನಿಧಿಯನ್ನು ಬಳಸಿ ರಿಯಾಯತಿ ದರದಲ್ಲಿ ಜಾನುವಾರುಗಳ ಮೇವನ್ನು ವ್ಯವಸ್ಥಿತವಾಗಿ ವಿತರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ ಮೇವು ಉತ್ಪಾದನೆಯಾಗುವ ನಿರೀಕ್ಷೆಯಿದ್ದು, ಮೇವಿನ ಕೊರತೆ ಸುಧಾರಿಸುವವರೆಗೂ ಬೇಡಿಕೆಗನುಗುಣವಾಗಿ ಮೇವಿನ ಬ್ಯಾಂಕ್‌ಗಳು ಕಾರ್ಯ ನಿರ್ವಹಿಸುತ್ತವೆ. ಕಳಪೆ ಗುಣಮಟ್ಟದಿಂದ ಕೂಡಿದ ಮೇವನ್ನು ವಾಪಸ್ಸು ಕಳುಹಿಸಲಾಗುತ್ತಿದೆ. ರೈತರಿಂದ ಬೇಡಿಕೆ ಬಂದ ಪ್ರದೇಶಗಳಲ್ಲಿ ತುರ್ತಾಗಿ ಮೇವಿನ ಬ್ಯಾಂಕ್ ಪ್ರಾರಂಭಿಸಲು ಉಪವಿಭಾಗಾಧಿಕಾರಿ ಹಾಗೂ ತಹಸೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮಳೆಗಾಲ ಪ್ರಾರಂಭವಾಗಿರುವುದರಿಂದ ರೈತರು ಮುಂಗಾರು ಹಂಗಾಮಿನಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಭೂಮಿಯನ್ನು ಉಳುಮೆ ಮಾಡಿ ಬೀಜ ಬಿತ್ತನೆ ಮಾಡಲು ಅಣಿಯಾಗುತ್ತಿದ್ದಾರೆ. ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಮಾಡಲಾಗಿದೆ. ರಿಯಾಯತಿ ದರದಲ್ಲಿ ಬೀಜಗಳನ್ನು ರೈತರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.

ಕೊರಟಗೆರೆ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರಿನ ಸಮಸ್ಯೆ ಇರುವ ಕಡೆ ತುರ್ತಾಗಿ ಹೊಸ ಕೊಳವೆಬಾವಿ ಕೊರೆಯಲು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರಲ್ಲದೇ, ಕೊರಟಗೆರೆ ತಾಲೂಕಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ಟ್ಯಾಂಕರ್‌ಗಳ ಮೂಲಕ, ಖಾಸಗಿ ಕೊಳವೆ ಬಾವಿಗಳ ಮೂಲಕ ಪೂರೈಕೆ ಮಾಡಲಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆದು ನೀರು ಪೂರೈಕೆಗೆ ಕ್ರಮ ವಹಿಸಬೇಕೆಂದು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತ/ ಅವಘಡ ಉಂಟಾದರೆ ತುರ್ತಾಗಿ ಕ್ರಮಕೈಗೊಳ್ಳಲು ಬೆಸ್ಕಾಂಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.ಬರ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದವರು ತಾಲೂಕು ಕಚೇರಿಗೆ ಅಥವಾ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿರುವ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ. ಸಹಾಯವಾಣಿ ಸಂಖ್ಯೆ 24*7 ಕಾರ್ಯ ನಿರ್ವಹಿಸಲಿದೆ ಎಂದು ಮಾಹಿತಿ ನೀಡಿದರು.

ಕೆರೆಯ ಮಣ್ಣನ್ನು ತೆಗೆಯಲು ಹೇರಿರುವ ನಿರ್ಬಂಧವನ್ನು ಹಿಂಪಡೆಯಬೇಕೆಂದು ಪತ್ರಕರ್ತರು ಮನವಿ ಮಾಡಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕೆರೆಯ ಮಣ್ಣನ್ನು ತೆಗೆಯುವುದರಿಂದ ಮಳೆ ನೀರು ಸಂಗ್ರಹವಾಗದೇ ನೀರೆಲ್ಲ ಇಂಗಿ ಹೋಗುತ್ತದೆ. ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗುವುದನ್ನು ತಡೆಯಲು ಅವೈಜ್ಞಾನಿಕವಾಗಿ ಮಣ್ಣು ತೆಗೆಯುವುದನ್ನು ನಿಯಂತ್ರಿಸುವ ಸಲುವಾಗಿ ನಿರ್ಬಂಧವನ್ನು ಹೇರಲಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಸೀಲ್ದಾರ್ ಮಂಜುನಾಥ್, ಆಯುಷ್ ವೈದ್ಯಾಧಿಕಾರಿ ಡಾ. ಆತ್ಮಾರಾಮ್ ಎಂ ಶೆಟ್ಟಿ. ಬಿ. ಉಪ ತಹಸೀಲ್ದಾರ್ ಅನಿತಾ, ಪಶುವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ನಾಗರಾಜು ಸೇರಿ ಮತ್ತಿತರರು ಉಪಸ್ಥಿತರಿದ್ದರು.