ಜನರ ಮನೆ ಬಾಗಿಲಿಗೆ ಸರ್ಕಾರ ತೆರಳಲಿದೆ. ತಾಲೂಕು ಮಟ್ಟ ಹಾಗೂ ಜಿಲ್ಲಾಮಟ್ಟದಲ್ಲಿ ಜನರ ಸಮಸ್ಯೆ ಆಲಿಸಿ, ಶೀಘ್ರದಲ್ಲೇ ಪರಿಹರಿಸಲು ಕ್ರಮವಹಿಸಲಾಗುವುದು ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಕಲಘಟಗಿ:
ಜನರ ಸಮಸ್ಯೆ ಪರಿಹರಿಸಲು ಸರ್ಕಾರ ಪ್ರಜಾಸೇವೆ ಇಲಾಖೆ ಸ್ಥಾಪಿಸಿದೆ. ಆ ಮೂಲಕ ಜನರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಕಾರ್ಮಿಕ, ಉದ್ಯೋಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.ಕಲಘಟಗಿಯ ಜನತಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ ನೀಡಿದ ಅವರು, ಜನರ ಮನೆ ಬಾಗಿಲಿಗೆ ಸರ್ಕಾರ ತೆರಳಲಿದೆ. ತಾಲೂಕು ಮಟ್ಟ ಹಾಗೂ ಜಿಲ್ಲಾಮಟ್ಟದಲ್ಲಿ ಜನರ ಸಮಸ್ಯೆ ಆಲಿಸಿ, ಶೀಘ್ರದಲ್ಲೇ ಪರಿಹರಿಸಲು ಕ್ರಮವಹಿಸಲಾಗುವುದು. ನಿಗದಿತ ಸಮಯದಲ್ಲಿ ಜನರ ಅಹವಾಲುಗಳನ್ನು ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಸಹ ಪ್ರಜಾಸೇವಾ ಆಂದೋಲನ ಸಭೆ ನಡೆಸಲಾಗುತ್ತದೆ ಎಂದರು.
ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಪ್ರಜಾಸೇವೆ ಕೇವಲ ಕರ್ತವ್ಯವಲ್ಲ, ಅದು ಸಮಾಜದ ಅಭಿವೃದ್ಧಿಗೆ ನೀಡಬಹುದಾದ ಅತ್ಯಮೂಲ್ಯ ಕೊಡುಗೆಯಾಗಿದೆ. ಮನೆ ಬಾಗಿಲಿಗೆ ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ವಾಕ್ಯದಡಿ ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ, ಗೌರವಯುತ ಜೀವನ, ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮಾಡುವುದೇ ಪ್ರಜಾಸೇವೆಯ ಮೂಲ ಉದ್ದೇಶವಾಗಿದೆ ಎಂದರು. ನಂತರ ಶಿಕ್ಷಕರ ದಿನಾಚರಣೆ ಅಂಗವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ನಮ್ಮ ಸರ್ಕಾರ ಜನರ ಪರವಾಗಿದ್ದು ಜನರ ಕಣ್ಣೀರು ಒರೆಸುತ್ತಿದೆ. ಜನರಿಗೆ ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದರು.
ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಕಾಲಕಾಲಕ್ಕೆ ಪರಿಹರಿಸಲಾಗುವುದು ಎಂಬ ಭರವಸೆ ನೀಡಿದರು.ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಮಾತನಾಡಿ, ಜನರ ಬಳಿಗೆ ಸರ್ಕಾರ ಹೋಗಿ ಸೇವೆ ನೀಡುತ್ತಿದ್ದು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದರು.
ವಿಧವಾ ವೇತನ, ವೃದ್ಧಾಪ್ಯ ವೇತನ, ನಿವೃತ್ತಿ ವೇತನ, ಭೂಮಿಗೆ ಸಂಬಂಧಿಸಿದ, ಶಾಲೆಗಳಿಗೆ ಸಂಬಂಧಿಸಿದ, ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹಾಗೂ ಇನ್ನಿತರ ಇಲಾಖೆಗೆ ಸಂಬಂಧಿಸಿದ 196 ಅಹವಾಲುಗಳನ್ನು ಸ್ವೀಕರಿಸಿದ ಉಸ್ತುವಾರಿ ಸಚಿವರು ಅವುಗಳಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಜಿಪಂ ಸಿಇಒ ಅಧಿಕಾರಿ ಭುವನೇಶ ಪಾಟೀಲ್, ಉಸ್ತುವಾರಿ ಕಾರ್ಯದರ್ಶಿ ಸುರೇಶ ಕುಮಾರ, ಜಿಲ್ಲಾ ಪೊಲೀಸ್ ಆಯುಕ್ತ ಗುಂಜನ ಆರ್ಯ, ಎಸ್.ಆರ್. ಪಾಟೀಲ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಿ. ಚಂದ್ರಶೇಖರ, ಸಿಪಿಐ ಶ್ರೀಶೈಲ ಕೌಜಲಗಿ, ಮಂಜುನಾಥ ಮುರಳ್ಳಿ, ನರೇಶ ಮಲೆನಾಡು ಇದ್ದರು.