ಚಿಕ್ಕಮಗಳೂರುಶಸ್ತ್ರವಿಲ್ಲದೆ ಸೈನಿಕ ಯುದ್ಧ ಮಾಡಲು ಸಾಧ್ಯವಿಲ್ಲವೋ, ಅದೇ ರೀತಿ ಕಾನೂನಿನ ಅರಿವು ಮತ್ತು ನೆರವಿಲ್ಲದೆ ನಾಗರಿಕರು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ನಾಗರಿಕ ತನ್ನ ಹಕ್ಕುಗಳು ಹಾಗೂ ದೇಶದ ಕಾನೂನುಗಳ ಬಗ್ಗೆ ಕನಿಷ್ಠ ಜ್ಞಾನ ಹೊಂದಿರಬೇಕು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಕಿಣಿ ತಿಳಿಸಿದರು.

ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಶಸ್ತ್ರವಿಲ್ಲದೆ ಸೈನಿಕ ಯುದ್ಧ ಮಾಡಲು ಸಾಧ್ಯವಿಲ್ಲವೋ, ಅದೇ ರೀತಿ ಕಾನೂನಿನ ಅರಿವು ಮತ್ತು ನೆರವಿಲ್ಲದೆ ನಾಗರಿಕರು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ನಾಗರಿಕ ತನ್ನ ಹಕ್ಕುಗಳು ಹಾಗೂ ದೇಶದ ಕಾನೂನುಗಳ ಬಗ್ಗೆ ಕನಿಷ್ಠ ಜ್ಞಾನ ಹೊಂದಿರಬೇಕು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಕಿಣಿ ತಿಳಿಸಿದರು.ನಗರದ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂತಿ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕಾನೂನಿನ ಅರಿವು ಕೇವಲ ನ್ಯಾಯಾಧೀಶರು ಮತ್ತು ವಕೀಲರಿಗೆ ಮಾತ್ರ ಸೀಮಿತವಾಗದೆ ಪ್ರತಿಯೊಬ್ಬ ನಾಗರಿಕನೂ ತನ್ನ ಹಕ್ಕು ಹಾಗೂ ಕಾನೂನಿನ ಮೂಲಭೂತ ಅಂಶ ತಿಳಿದುಕೊಳ್ಳಬೇಕು. ಆಗ ಮಾತ್ರ ಶೋಷಣೆ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದರು.ಹಿರಿಯ ನಾಗರಿಕರು, ನೈಸರ್ಗಿಕ ವಿಕೋಪಕ್ಕೆ ಒಳಗಾದವರು, ವಿಕಲಚೇತನರು, ಆರೋಪಿಗಳು ಹಾಗೂ ಸರ್ಕಾರ ನಿಗದಿ ಪಡಿಸಿರುವ ವಾರ್ಷಿಕ ಆದಾಯ ಮಿತಿಗಿಂತ ಕಡಿಮೆ ಆದಾಯ ಹೊಂದಿದ ಬಡವರು ಉಚಿತ ಕಾನೂನು ಸೇವೆ ಪಡೆಯಲು ಅರ್ಹರಾಗಿದ್ದಾರೆ. ಈ ಯೋಜನೆಯಡಿ ಅರ್ಹರಿಗೆ ಉಚಿತವಾಗಿ ವಕೀಲರನ್ನು ನೇಮಿಸುವ ಜತೆಗೆ ನ್ಯಾಯಾಲಯದ ಶುಲ್ಕ ಮತ್ತು ಅಗತ್ಯ ಕಾನೂನು ದಾಖಲೆಗಳ ವೆಚ್ಚ ಭರಿಸಲಾಗುತ್ತದೆ ಎಂದು ವಿವರಿಸಿದರು.ಅರಿವಿನ ಕೊರತೆಯಿಂದ ಯಾರಿಗೂ ನ್ಯಾಯ ನಿರಾಕರಣೆಯಾಗಬಾರದು. ಉಚಿತ ಕಾನೂನು ನೆರವು ಪಡೆವುದು ಅರ್ಹ ನಾಗರಿಕರ ಹಕ್ಕು. ನ್ಯಾಯದ ಬೆಳಕು ಪ್ರತಿಯೊಬ್ಬ ಬಡವನ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ನಮ್ಮ ಸುತ್ತ ಮುತ್ತಲಿನ ಶೋಷಿತರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸೌಲಭ್ಯದ ಬಗ್ಗೆ ಮಾಹಿತಿ ನೀಡುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮಾತನಾಡಿ ಸಾರ್ವಜನಿಕ ಜೀವನ ಹಾಗೂ ಸರ್ಕಾರಿ ಸೇವೆಯಲ್ಲಿ ತೊಡಗಿರುವ ಪ್ರತಿಯೊಬ್ಬರೂ ಸಾಮಾನ್ಯ ಜ್ಞಾನದ ಜತೆಗೆ ಕಾನೂನಿನ ಮೂಲಭೂತ ನಿಯಮ ತಿಳಿಯುವುದು ಅತ್ಯಗತ್ಯ. ಅಧಿಕಾರಿ ಗಳಾಗಲಿ ಅಥವಾ ಸಾರ್ವಜನಿಕರಾಗಲಿ ಕಾನೂನು ಉಲ್ಲಂಘಿಸಿದ ಸಂದರ್ಭದಲ್ಲಿ ನಿಯಮಗಳ ಅರಿವಿರಲಿಲ್ಲ ಎಂಬ ಕಾರಣ ನೀಡುವುದು ಕಾನೂನಿನ ದೃಷ್ಟಿಯಲ್ಲಿ ಸ್ವೀಕಾರಾರ್ಹವಲ್ಲ ಎಂದರು.ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಯಾವುದೇ ಕೆಲಸ ಅಥವಾ ನಿರ್ಧಾರ ಕೈಗೊಳ್ಳುವಾಗ ಪ್ರಾಮಾಣಿಕತೆ, ಪಾರ ದರ್ಶಕತೆ ಹಾಗೂ ಉತ್ತಮ ಉದ್ದೇಶದಿಂದ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಸರ್ಕಾರಿ ಖರೀದಿ ಪ್ರಕ್ರಿಯೆಗಳಲ್ಲಿ ಕೆಟಿಪಿಪಿ ಕಾಯ್ದೆಯ ನಿಯಮವನ್ನು ಸರಿಯಾಗಿ ಪಾಲಿಸದೆ ಲೋಪ ಎಸಗಿದರೆ ಅಥವಾ ನಿಯಮ ಬದಿಗೊತ್ತಲು ಪ್ರಯತ್ನಿ ಸಿದರೆ ಕಾನೂನು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ನೈಸರ್ಗಿಕ ನ್ಯಾಯದ ತತ್ವಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಯಾರ ಮೇಲಾದರೂ ಆರೋಪ ಬಂದಾಗ ಅಥವಾ ಶಿಸ್ತುಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ಸಂಬಂಧಪಟ್ಟವರಿಗೆ ತಮ್ಮ ಪರವಾಗಿ ವಾದ ಮಂಡಿಸಲು ಹಾಗೂ ಸ್ಪಷ್ಟನೆ ನೀಡಲು ಅವಕಾಶ ಕಲ್ಪಿಸುವುದು ಕಡ್ಡಾಯ. ಈ ಅವಕಾಶ ನೀಡದಿದ್ದರೆ ಸಣ್ಣ ತಾಂತ್ರಿಕ ಲೋಪದಿಂದಲೇ ಇಡೀ ಆದೇಶ ರದ್ದಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.ಬಡವರು, ಶೋಷಿತರು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮಾನ ನ್ಯಾಯ ದೊರಕಿ ಸಿಕೊಡುವ ಉದ್ದೇಶದಿಂದ ಉಚಿತ ಕಾನೂನು ನೆರವು ಮತ್ತು ಸಲಹೆ ನೀಡಲಾಗುತ್ತಿದೆ. ಈ ಸೌಲಭ್ಯಗಳು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀನಾಕ್ಷಿ ಆರ್ಯ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.