ಶಾಲೆಯಲ್ಲಿ ಕಲಿತ ಒಂದೊಂದು ಅಕ್ಷರವೂ ಭವಿಷ್ಯಕ್ಕೆ ಬುನಾದಿ

| Published : Jun 13 2024, 12:51 AM IST

ಸಾರಾಂಶ

ಸರ್ಕಾರದಿಂದ ಹಾಗೂ ದಾನಿಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಮುಂದಿನ ದಿನಗಳಲ್ಲಿ ತಾವು ಅಕ್ಷರ ಕಲಿತ ಈ ಶಾಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿಂತಾಮಣಿ

ಶಾಲೆಯಲ್ಲಿ ಶ್ರದ್ಧಾ- ಭಕ್ತಿಯಿಂದ ಕಲಿತ ಒಂದೊಂದು ಅಕ್ಷರವೂ ಸಹ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಬುನಾದಿಯಾಗುವುದೆಂದು ಶಾಲೆಯ ಹಳೆಯ ವಿದ್ಯಾರ್ಥಿಗಳಾದ ಎ.ಪವನ್, ಜೆ.ವಿ.ಚೌಡರೆಡ್ಡಿ, ಜೆ.ಎಸ್.ರಾಜೇಶ್ ಹಾಗೂ ಜೆ.ಎಸ್.ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಕೆ. ರಾಗುಟ್ಟಹಳ್ಳಿಯ ಎಸ್‌ಎಲ್‌ಎನ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಖರ್ಚಿನಿಂದ ನೋಟ್ ಪುಸ್ತಕ, ಲೇಖನ ಸಾಮಗ್ರಿ ಹಾಗೂ ನೀರಿನ ಬಾಟಲ್‌ಗಳನ್ನು ವಿತರಿಸಿ ಮಾತನಾಡಿ, ಹಳೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ತೋರಬಾರದೆಂದು ಕಿವಿಮಾತು ಹೇಳಿದರು.

ನಾವು ಇದೇ ಶಾಲೆಯಲ್ಲಿ ಶ್ರದ್ಧಾ- ಭಕ್ತಿಯಿಂದ ವಿದ್ಯೆ ಕಲಿತೆವು, ಇದರಿಂದಾಗಿ ಇಂದು ನಾವು ಉತ್ತಮ ಜೀವನ ನಡೆಸುತ್ತಿದ್ದೇವೆ ಎಂದು ಉದಾಹರಿಸಿದರು. ತಮಗೆ ಉತ್ತಮ ರೀತಿಯಲ್ಲಿ ಪಾಠ ಪ್ರವಚನಗಳನ್ನು ಬೋಧಿಸಿದ ಗುರು ವೃಂದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು. ವಿದ್ಯಾರ್ಥಿಗಳು ಮೊಬೈಲ್ ವ್ಯಾಮೋಹ ಬಿಟ್ಟು ಪಾಠ- ಪ್ರವಚನಗಳ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಸರ್ಕಾರದಿಂದ ಹಾಗೂ ದಾನಿಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಮುಂದಿನ ದಿನಗಳಲ್ಲಿ ತಾವು ಅಕ್ಷರ ಕಲಿತ ಈ ಶಾಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕ ಕೆ.ವಿ.ವೆಂಕಟರೆಡ್ಡಿ, ಸಹ ಶಿಕ್ಷಕ ಸಿಎನ್. ಕೃಷ್ಣಪ್ಪ ಹಾಗೂ ಎಂ.ಎನ್. ಮಂಜುಳಮ್ಮ ಮಾತನಾಡಿ, ನಮ್ಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ಉತ್ತಮ ಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ನಮ್ಮೆಲ್ಲರಿಗೂ ಸಂತಸವನ್ನುಂಟು ಮಾಡಿದೆ. ತಾವು ಕಲಿತ ಶಾಲೆಯ ಬಗ್ಗೆ ಗೌರವ ಹೊಂದಿ, ಈಗ ಇಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೂ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ನೀಡುತ್ತಿರುವುದು ಅವರ ಉತ್ತಮ ವ್ಯಕ್ತಿತ್ವದ ಪ್ರತೀಕವಾಗಿದೆ ಎಂದರು.

ಶಾಲೆಯ ವತಿಯಿಂದ ಹಳೆ ವಿದ್ಯಾರ್ಥಿಗಳನ್ನು ಗೌರವಿಸಿ, ಆಶೀರ್ವದಿಸಲಾಯಿತು. ಶಾಲಾ ಮಕ್ಕಳಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಎಸ್‌ಎಲ್‌ಎನ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ವಿ. ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.