ಪ್ರಜಾಪ್ರಭುತ್ವದಲ್ಲಿ ಪ್ರತಿ ಮತಕ್ಕೂ ಬೆಲೆಯಿದೆ

| Published : Sep 16 2025, 12:03 AM IST

ಸಾರಾಂಶ

ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತಕ್ಕೂ ತನ್ನದೇ ಆದ ಬೆಲೆ ಇದೆ. ಹಾಗಾಗಿ ಪ್ರತಿಯೊಬ್ಬರೂ ಬಹಳ ಯೋಚಿಸಿ ಯೋಗ್ಯರಿಗೆ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತಕ್ಕೂ ತನ್ನದೇ ಆದ ಬೆಲೆ ಇದೆ. ಹಾಗಾಗಿ ಪ್ರತಿಯೊಬ್ಬರೂ ಬಹಳ ಯೋಚಿಸಿ ಯೋಗ್ಯರಿಗೆ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸಲಹೆ ನೀಡಿದರು.

ನಗರದ ಟೌನ್‌ಹಾಲ್ ವೃತ್ತದಲ್ಲಿ ಜಿಲ್ಲಾಡಳಿತ, ಜಿ.ಪಂ., ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೆರವಣಿಗೆ ಹಾಗೂ ಸೈಕಲ್ ರ್ಯಾಲಿಗೆ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ, ತಾವೇ ಸ್ವತಃ ಸೈಕಲ್ ತುಳಿಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಂದು ಮತಕ್ಕೂ ಬೆಲೆ ಇದೆ. ಯಾರಿಗೆ ಮತ ಚಲಾಯಿಸಬೇಕು ಎಂಬ ಬಗ್ಗೆ ಎಲ್ಲರೂ ಯೋಚಿಸಬೇಕು. ಯಾರನ್ನು ಆಯ್ಕೆ ಮಾಡುತ್ತೀರೋ, ಅಂತಹವರ ಬಗ್ಗೆ ಯೋಚನೆ ಮಾಡಿ, ಜವಾಬ್ದಾರಿಯಿಂದ ಮತ ಚಲಾಯಿಸಬೇಕು ಎಂದರು.

ನನ್ನ ಮತ ನನ್ನ ಹಕ್ಕು ಎಂಬ ಘೋಷವಾಕ್ಯದೊಂದಿಗೆ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಈ ಪ್ರಜಾಪ್ರಭುತ್ವ ದಿನಾಚರಣೆಯ ಉದ್ದೇಶವನ್ನು ಎಲ್ಲ ವಿದ್ಯಾರ್ಥಿಗಳು ಅರ್ಥೈಸಿಕೊಳ್ಳಬೇಕು ಎಂದು ಅವರು ಹೇಳಿದರು.

ಭಾರತವನ್ನು ಇಡೀ ವಿಶ್ವದಲ್ಲೇ ಯುವ ಪ್ರಜಾಪ್ರತಭುತ್ವದ ದೇಶ ಎಂದು ಕರೆಯಲಾಗುತ್ತದೆ. ಆದ್ದರಿಂದ ಯುವಸಮೂಹ ಮತದಾನ ಮಾಡುವಾಗ ಬಹಳಷ್ಟು ಚಿಂತನೆ ನಡೆಸಿ ಯಾರಿಂದ ಸಮಾಜಕ್ಕೆ ಒಳ್ಳೆಯದಾಗುತ್ತದೆ ಎಂಬುದನ್ನು ಅರ್ಥೈಸಿಕೊಂಡು ಮತ ಚಲಾಯಿಸಬೇಕು ಎಂದರು.

ಪ್ರತಿಯೊಬ್ಬರೂ ದೇಶಕ್ಕೆ ಆಸ್ತಿಯಾಗಬೇಕೇ ಹೊರತು ಹೊರೆಯಾಗಬಾರದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ನಮ್ಮ ರಾಜ್ಯದಲ್ಲಿ ಶಿಕ್ಷಣದಲ್ಲಿ ಸಮಾನತೆ ಇರಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿನಿಲಯ, ವಸತಿ ಶಾಲೆಗಳು, ಸರ್ಕಾರಿ ಶಾಲೆಗಳು ವಿವಿಧ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಂದ ಬರುವ ಮಕ್ಕಳಿಗೂ ಸಮಾನತೆ ಸಿಗಬೇಕು ಎಂಬ ಉದ್ದೇಶದಿಂದ ಸಮಾನತೆಯ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಬದುಕಿನಲ್ಲಿ ಹೊಂದಿರುವ ಗುರಿಯನ್ನು ಮುಟ್ಟಲು ಎಲ್ಲರಿಗೂ ಸಾಮರ್ಥ್ಯ ಇದೆ. ಯುವ ಸಮೂಹ ಹೊಂದಿರುವ ಕನಸು ನನಸಾಗಬೇಕು ಎಂದು ಆಶಿಸುತ್ತೇನೆ ಎಂದು ಹೇಳಿದರು.

ನಂತರ ಟೌನ್‌ಹಾಲ್ ವೃತ್ತದಿಂದ ಆರಂಭವಾದ ಸೈಕಲ್ ರ್ಯಾಲಿ ಹಾಗೂ ವಿದ್ಯಾರ್ಥಿಗಳ ಮೆರವಣಿಗೆಯು ಬಿ.ಹೆಚ್. ರಸ್ತೆ, ಎಂ.ಜಿ. ರಸ್ತೆ, ಚರ್ಚ್ ಸರ್ಕಲ್, ಅಶೋಕ ರಸ್ತೆ ಮೂಲಕ ಸಾಗಿ ಡಾ. ಗುಬ್ಬಿ ವೀರಣ್ಣ ರಂಗಮಂದಿರ ತಲುಪಿತು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಘುಚಂದ್ರ, ಬಿಇಓ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.