ಪ್ರತಿಯೊಬ್ಬ ಮತದಾರರು ಕಡ್ಡಾಯ ಮತದಾನ ಮಾಡಿ : ಡಿಸಿ ಡಾ. ಕೆ. ವಿದ್ಯಾಕುಮಾರಿ

| Published : Mar 27 2024, 01:01 AM IST

ಪ್ರತಿಯೊಬ್ಬ ಮತದಾರರು ಕಡ್ಡಾಯ ಮತದಾನ ಮಾಡಿ : ಡಿಸಿ ಡಾ. ಕೆ. ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಯೊಬ್ಬ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ, ಚುನಾವಣಾ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಮತದಾನ ಮಾಡುವ ಮೂಲಕ ತಮ್ಮ ಪ್ರತಿನಿಧಿಯನ್ನು ಚುನಾಯಿಸಲು ಹಕ್ಕು ನೀಡಿದೆ. ಇದನ್ನು ತಪ್ಪದೇ ಚಲಾಯಿಸಬೇಕು. ಯಾವುದೇ ಮತದಾರರು ಆಸೆ, ಆಮೀಷಗಳಿಗೆ ಒಳಗಾಗದೇ ಸ್ವಯಂ ನಿರ್ಣಯ ಕೈಗೊಂಡು ಅತ್ಯುತ್ತಮ ನಾಯಕರನ್ನು ಆಯ್ಕೆ ಮಾಡಲು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು.

ಜಿಲ್ಲೆಯ 18 ವರ್ಷ ಮೇಲ್ಪಟ್ಟ ಎಪಿಕ್ ಕಾರ್ಡ್ ಹೊಂದಿರುವ ಎಲ್ಲಾ ಯುವಜನರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಯುವ ಜನತೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಸಂವಿಧಾನ ತಮಗೆ ನೀಡಿರುವ ಮತದಾನದ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಾರಿ 85 ಹಾಗೂ ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗಿದೆ.

ಹೋಮ್ ವೋಟಿಂಗ್‌ಗಿಂತ ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಲು ಹಿರಿಯ ನಾಗರಿಕರಿಗೆ ಪ್ರೇರಣೆ ನೀಡಬೇಕು. ತೀರಾ ಅಶಕ್ತರು ಹಾಗೂ ಹಾಸಿಗೆ ಹಿಡಿದವರು ಮಾತ್ರ ವಾಸ್ತವ್ಯ ಸ್ಥಳದಲ್ಲಿಯೇ ಮತ ಚಲಾಯಿಸಬಹುದಾಗಿದೆ ಎಂದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿ.ಪಂ. ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.