ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಸಾಧನೆ ಬಗ್ಗೆ ಎಲ್ಲರೂ ತಿಳಿಯಿರಿ: ಅತ್ನಿ

| Published : Feb 23 2025, 12:30 AM IST

ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಸಾಧನೆ ಬಗ್ಗೆ ಎಲ್ಲರೂ ತಿಳಿಯಿರಿ: ಅತ್ನಿ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತ ರತ್ನ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಬದುಕು ಮತ್ತು ಸಾಧನೆ ಕುರಿತು ಅಂಬೇಡ್ಕರ್‌ ಓದು ಕಾರ್ಯಕ್ರಮ ನಡೆಯಿತು. ಅಂಬೇಡ್ಕರ್‌ ಅವರ ಹೋರಾಟ, ಚಿಂತನೆ ಸದಾ ಸ್ಮರಣೀಯ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾನೂನು ಸಚಿವರಾಗಿ ರಾಷ್ಟ್ರದಲ್ಲಿ ಪ್ರಥಮ ಬಾರಿಗೆ ಹಿಂದೂ ಕೋಡ್ ಬಿಲ್ ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ನೀಡಿದ್ದಾರೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಮಹದೇವ ಅತ್ನಿ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಕಾಲೇಜಿನ ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಕುರಿತು ನಡೆದ ‘ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನತೆ, ಆಸ್ತಿ ಹಕ್ಕನ್ನು ಕಲ್ಪಿಸಿದ್ದಾರೆ, ಅಂಬೇಡ್ಕರ್ ಅವರ ಹೋರಾಟ, ಚಿಂತನೆ ಸದಾ ಸ್ಮರಣೀಯ ಎಂದು ಅವರು ಹೇಳಿದರು.

ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ , ಭ್ರಾತೃತ್ವ ಒಳಗೊಂಡ ಸಂವಿಧಾನ ರಚಿಸಿದ್ದಾರೆ ಎಂದರು.

ವೈವಿದ್ಯತೆ ಒಳಗೊಂಡಿರುವ ರಾಷ್ಟ್ರಕ್ಕೆ ಅತ್ಯುತ್ತಮ ಸಂವಿಧಾನ ನೀಡಿದ್ದಾರೆ. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಸೌಲಭ್ಯ ಪಡೆಯಲು ಮುಂದಾಗಬೇಕು ಎಂದು ಪ್ರತಿಪಾದಿಸಿದ್ದಾರೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಎಲ್ಲರೂ ಮೇಲೆ ಬರಬೇಕು ಎಂದು ಸಾರಿದ್ದಾರೆ ಎಂದರು.

ಕಾರ್ಮಿಕ ಕಾಯ್ದೆ ಜಾರಿಗೊಳಿಸುವ ಮೂಲಕ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್ ಅವರ ಸಮಾನತೆ, ಸಹೋದರತೆ, ಭ್ರಾತೃತ್ವದ ಆಶಯಗಳು ಸದಾ ಸಾರ್ವಕಾಲೀಕವಾಗಿದ್ದು, ಅವರ ಬದುಕು ಮತ್ತು ಬರಹಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.

ಭಾರತದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ‘ಪವಿತ್ರ ಗ್ರಂಥ’ವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಸಂಕೇತ, ಹಲವು ಪದವಿಗಳನ್ನು ಪಡೆಯುವ ಮೂಲಕ ವಿಶ್ವದ ಜ್ಞಾನಿಯಾಗಿದ್ದಾರೆ ಎಂದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಪ್ರೊ.ರಾಘವ ಅವರು ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆ ಮತ್ತು ಸಿದ್ದಾಂತಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶ ಮತ್ತು ಚಿಂತನೆಗಳನ್ನು ಅನುಸರಿಸುವುದು ಅಗತ್ಯ. ಆ ನಿಟ್ಟಿನಲ್ಲಿ ಬಾಬಾ ಸಾಹೇಬ್ ಅವರು ಬರೆದಿರುವ ಪುಸ್ತಕಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು ಎಂದು ಹೇಳಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹ ಪ್ರಾಧ್ಯಾಪಕರಾದ ರೇಣುಶ್ರೀ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಆಶಾ, ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕು ಅಧಿಕಾರಿ ಮೋಹನ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್ ಇತರರು ಇದ್ದರು.