ಸಾರಾಂಶ
ಕನ್ನಡಪ್ರಭವಾರ್ತೆ ಚಿತ್ರದುರ್ಗ
ಬಾಲ್ಯ ವಿವಾಹ ತಡೆವ ನಿಟ್ಟಿನಲ್ಲಿ ಸರ್ವರ ಸಹಕಾರ ಅಗತ್ಯ. ಎಲ್ಲಿಯಾದರೂ ಬಾಲ್ಯವಿವಾಹ ನಡೆಯುತ್ತಿದೆ ಎಂಬ ಮಾಹಿತಿ ಬಂದ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಗೀತಾ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಹಯೋಗದಲ್ಲಿ ಆಯೋಜಿಸಿದ್ದ ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಬಾಲ್ಯ ವಿವಾಹ ನಿಷೇದ ಕಾಯ್ದೆ, ಪೋಕ್ಸೋ ಕಾಯ್ದೆ, ಕೆಲಸದ ಸಮಯದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾಯ್ದೆ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಆರ್ಥಿಕವಾಗಿ ಶೋಷಿತರಾಗಿರುವ ಕುಟುಂಬಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇದೆ. ಬಾಲ್ಯವಿವಾಹ ನಡೆಯುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವುದರಿಂದ ಭವಿಷ್ಯದಲ್ಲಾಗುವ ತೊಂದರೆ, ದುಷ್ಪಾರಿಣಾಮ ತಡೆಯಬಹುದು. ಬಾಲ್ಯವಿವಾಹ ತಡೆಗಟ್ಟಿ, ಅಂತಹ ಮಕ್ಕಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ 2013ರ ಕಾಯ್ದೆಗಳ ಬಗ್ಗೆ ಜನಸಾಮಾನ್ಯರಿಗೆ ಅಧಿಕಾರಿಗಳು ಜಾಗೃತಿ ಮೂಡಿಸುವ ಮೂಲಕ ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಕಟಿಬದ್ಧರಾಗಿ ಕಾರ್ಯನಿರ್ವಹಿಸಿದರೆ ಇನ್ನಷ್ಟು ಅಪರಾಧಗಳನ್ನು ತಪ್ಪಿಸಬಹುದು ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಜಾಗೃತಿ ಮೂಡಿಸುವ ಮೂಲಕ ಅಧಿಕಾರಿಗಳು ಈ ಕಾಯ್ದೆಯ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಮಕ್ಕಳು ಈ ದೇಶದ ಸಂಪತ್ತು, ಮುಂದಿನ ಪೀಳಿಗೆಯಲ್ಲಿ ಭವಿಷ್ಯದ ನಾಡನ್ನ ಕಟ್ಟಿ ಬೆಳೆಸುವ ಶಕ್ತಿ ಮಕ್ಕಳಿಗೆ ಇದೆ. ಮಕ್ಕಳಿಗೆ ನೈತಿಕ, ಮೌಲ್ಯಯುತ ಶಿಕ್ಷಣವನ್ನು ನೀಡುವುದು ಅಗತ್ಯವಾಗಿದೆ ಎಂದರು.ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ ಕಾಯ್ದೆ ಕುರಿತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಡಿ.ಕೆ.ಶೀಲಾ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಕುರಿತು ಕೊಪ್ಪಳ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಡಾ.ಕೆ.ರಾಘವೇಂದ್ರ ಭಟ್ ಉಪನ್ಯಾಸ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿಡಿಪಿಐ ರವಿಶಂಕರ್ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.