ಸಾರಾಂಶ
ಸ್ಪರ್ಧಾತ್ಮಕ ಯುಗದಲ್ಲಿ ಸಾಧನೆಯತ್ತ ಸಾಗುತ್ತಿರುವ ಭಾರತಕ್ಕೆ ಯುವ ಪೀಳಿಗೆ ಉತ್ತಮ ಕೊಡುಗೆ ನೀಡಬೇಕು. ಮಹಾತ್ಮಗಾಂಧಿ ಸೇರಿದಂತೆ ಹಲವು ಮಹನೀಯರ ತ್ಯಾಗ, ಬಲಿದಾನದ ಮೂಲಕ ಸ್ವಾತಂತ್ರ‍್ಯ ಸಿಕ್ಕಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವು ಸದೃಢ ಮತ್ತು ಸಮೃದ್ಧ ಭಾರತ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಕನ್ನಡಪ್ರಭ ವಾರ್ತೆ ಮಳವಳ್ಳಿ
ದೇಶದ ಪ್ರಗತಿಗೆ ಪ್ರತಿಯೊಬ್ಬರ ಸೇವೆಯೂ ಅತ್ಯಗತ್ಯ. ಸ್ಪರ್ಧಾತ್ಮಕ ಯುಗದಲ್ಲಿ ಸಾಧನೆಯತ್ತ ಸಾಗುತ್ತಿರುವ ಭಾರತಕ್ಕೆ ಯುವ ಪೀಳಿಗೆ ಉತ್ತಮ ಕೊಡುಗೆ ನೀಡಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.ಪಟ್ಟಣದ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸಾಧನೆಯತ್ತ ಸಾಗಿದರೆ ಸಮೃದ್ಧ ಭಾರತ ನಿರ್ಮಾಣಕ್ಕೆ ಮುಂದಾಗಬಹುದು ಎಂದರು.
ಮಹಾತ್ಮಗಾಂಧಿ ಸೇರಿದಂತೆ ಹಲವು ಮಹನೀಯರ ತ್ಯಾಗ, ಬಲಿದಾನದ ಮೂಲಕ ಸ್ವಾತಂತ್ರ‍್ಯ ಸಿಕ್ಕಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವು ಸದೃಢ ಮತ್ತು ಸಮೃದ್ಧ ಭಾರತ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಸ್ಮರಿಸಿದರು.ತಹಸೀಲ್ದಾರ್ ಎಸ್.ವಿ.ಲೋಕೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದಿದ್ದಾಗ ಪಂಚ ವಾರ್ಷಿಕ ಯೋಜನೆಗಳ ಮೂಲಕ ಕೃಷಿ, ಕೈಗಾರಿಕೆ, ತಂತ್ರಜ್ಞಾನದಲ್ಲಿ ಅಭಿವೃದ್ಧಿ ಸಾಧಿಸಿರುವುದರ ಹಿಂದೆ ಅಪಾರ ಪರಿಶ್ರಮ ಇದೆ ಎಂದರು.
ಹಲವಾರು ಮಹನೀಯರ ಹೋರಾಟ, ತ್ಯಾಗ, ಬಲಿದಾನಗಳ ಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ಬಂದಿದ್ದು, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಓದಬೇಕೆಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಪಥಸಂಚಾಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆದವು. ಕಾರ್ಯಕ್ರಮಕ್ಕೂ ಮುನ್ನ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಮೆರವಣಿಗೆ ಅರ್ಥಪೂರ್ಣವಾಗಿ ನಡೆಯಿತು.
ವೇದಿಕೆಯಲ್ಲಿ ಡಿವೈಎಸ್ಪಿ ವಿ.ಕೃಷ್ಣಪ್ಪ, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಪುರಸಭೆ ಉಪಾಧ್ಯಕ್ಷ ಎನ್.ಬಸವರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎನ್.ಕೃಷ್ಣ, ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಸದಸ್ಯ ನೂರುಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ತಾಲೂಕು ಅಧ್ಯಕ್ಷ ಪಿ.ಮಾದೇಶ ಹಾಗೂ ಮುಖಂಡರು ಮತ್ತು ಅಧಿಕಾರಿಗಳಿದ್ದರು.