ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಸಂವಿಧಾನಿಕವಾಗಿ ಲಭಿಸಿರುವ ಅಮೂಲ್ಯವಾದ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಚಲಾಯಿಸುವ ಮೂಲಕ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಜಾಪ್ರಭುತ್ವವನ್ನು ಮತ್ತಷ್ಟು ದೃಢಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚಿಸಿದರು.ಅವರು ಸೋಮವಾರ ನಗರದ ಅಜ್ಜರಕಾಡಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚುನಾವಣಾ ಸಾಕ್ಷರತ ಸಂಘ, ರೆಡ್ ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮತದಾನದ ಜಾಗೃತಿ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಈ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಯಾರೋಬ್ಬರೂ ನಿರಾಸಕ್ತಿ ತೊರದೆ ಉತ್ಸಾಹದಿಂದ, ಯಾವುದೇ ಆಸೆ ಆಮಿಷ ಮತ್ತಿತರ ಪ್ರಚೋದನೆಗೆ ಒಳಗಾಗದೆ, ವಿವೇಚನೆಯಿಂದ ಏ.26 ಹಾಗೂ ಮೇ 7ರಂದು ತಪ್ಪದೇ ಮತ ಚಲಾಯಿಸಬೇಕು ಎಂದರು.ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದಲ್ಲಿ ಮತದಾನ ಮಾಡಲು ಕೆಲವು ವಿದ್ಯಾವಂತರೇ ಮುಂದೆ ಬರುತ್ತಿಲ್ಲ, ಇದು ತಪ್ಪು. ಮೂಲಭೂತ ಹಕ್ಕಿನ ಹಾಗೇ ದೊರೆತಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸಬೇಕು ಎಂದ ಅವರು ಇಲ್ಲಿ ನೆರೆದಿರುವ ವಿದ್ಯಾರ್ಥಿನಿಯರು ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು ಜೊತೆಗೆ ಮತದಾನದ ಮಹತ್ವದ ಬಗ್ಗೆ ತಮ್ಮ ನೆರೆಯವರಿಗೂ ತಮ್ಮ ಕುಟಂಬದವರಿಗೂ ಹಾಗೂ ತಮ್ಮ ಸ್ನೇಹಿತರಿಗೆ ಅರಿವು ಮೂಡಿಸಿ ಮತ ಚಲಾಯಿಸುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮತದಾನ ಪ್ರಮಾಣ ವಚನ ಬೋಧಿಸಿದರು. ನಂತರ ಮತದಾರರ ಜಾಗೃತಿ ಜಾಥಾಕ್ಕೆ ಚಾಲನೆ ನೀಡುವುದರೊಂದಿಗೆ ಹೆಜ್ಜೆ ಹಾಕಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಮತದಾನದ ಜಾಗೃತಿ ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸಿದ್ಧಲಿಂಗಪ್ಪ ಡಾ.ಜಿ. ಶಂಕರ್ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೊತ್ತರ ಅಧ್ಯಯನ ಕೇಂದ್ರ, ಕಾಲೇಜಿನ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ ಎಸ್, ಪೌರಾಯುಕ್ತ ರಾಯಪ್ಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಬಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.