ಸಾರಾಂಶ
- ಜಗಜೀವನರಾಂ ಜನ್ಮದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ - - - ಕನ್ನಡಪ್ರಭ ವಾರ್ತೆ, ದಾವಣಗೆರೆ
ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಜಯಂತಿ ಆಚರಣೆ ಮೂಲಕ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದರು.ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಆಶ್ರಯದಲ್ಲಿ ಏರ್ಪಡಿಸಲಾದ ಡಾ.ಬಾಬು ಜಗಜೀವನ್ ರಾಂ 117ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರು ಮಾತನಾಡಿದರು.
ಡಾ.ಜಗಜೀವನ್ ರಾಂ ಅವರು ನೆಹರು ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿ ಅವರ ಕಾಲದಲ್ಲಿ ಭಾರತದ ಉಪಪ್ರಧಾನಿಯೂ ಆಗಿದ್ದರು. ಅಸ್ಪೃಶ್ಯತೆ ನಿವಾರಣೆ ಹೋರಾಟದ ಮಹಾನ್ ನಾಯಕರಾಗಿದ್ದರು. ದೇಶಕ್ಕೆ ತನ್ನದೇ ಆದ ಪ್ರಾಮಾಣಿಕ ಸೇವೆ ಸಲ್ಲಿಸಿ, 50 ವರ್ಷಗಳ ಕಾಲ ದೇಶ ಸೇವೆ ಮಾಡಿದರು ಎಂದರು.1971ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಯುದ್ಧ ಸಮಯದಲ್ಲಿ ಕೇಂದ್ರ ರಕ್ಷಣಾ ಸಚಿವರಾಗಿದ್ದರು. ಭಾರತ-ಪಾಕಿಸ್ತಾನ ಯುದ್ಧದಲ್ಲಿ ದಿಗ್ವಿಜಯ ಸಾಧಿಸುವಲ್ಲಿ ಬಾಬೂಜಿ ಪ್ರಮುಖ ಪಾತ್ರ ವಹಿಸಿದ್ದರು. ಸೇವೆ ಅವಧಿಯಲ್ಲಿ ಹಲವು ಇಲಾಖೆಗಳಲ್ಲಿ ಅವರದೇ ಆದ ಚಾಪು ಮೂಡಿಸಿದ್ದಾರೆ. ಸಮಾಜಕ್ಕೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಇಂಡೋ-ಪಾಕ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಅವರ ಕೊಡುಗೆ ಗಣನೀಯವಾಗಿದೆ. ಈ ಹಿನ್ನೆಲೆ ಅವರ ಹಾದಿಯಲ್ಲಿ ಜನತೆ ಸಾಗಿ, ಶೋಷಿತ ವರ್ಗದ ಜನರಿಗೆ ಸಹಾಯ ಮಾಡಬೇಕಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಎಂ. ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೆ.ನಾಗರಾಜ, ಬಿಸಿಎಂ ಅಧಿಕಾರಿ ಗಾಯತ್ರಿ, ಪರಿಶಿಷ್ಟ ವರ್ಗಗಳ ಅಧಿಕಾರಿ ಬೇಬಿ ಸುನೀತಾ, ದಲಿತ ಸಮಾಜ ಮುಖಂಡರು ಹಾಗೂ ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
- - - -5ಕೆಡಿವಿಜಿ33ಃ:ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಡಾ.ಬಾಬು ಜಗಜೀವನ್ ರಾಂ 117ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಪುಷ್ಪಾರ್ಚನೆ ಮಾಡಿ, ಮಾತನಾಡಿದರು.