ಸಾರಾಂಶ
ಕನ್ನಡಪ್ರಭ ವಾರ್ತೆ ಅಥಣಿ
ಪ್ರತಿಯೊಬ್ಬರೂ ನಮ್ಮ ಸಂವಿಧಾನದ ಆಶಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ದೇಶದ ಅಭಿವೃದ್ಧಿಗೆ ಇನ್ನಷ್ಟು ಪೂರಕವಾಗಲಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಪಟ್ಟಣದ ಭೋಜರಾಜ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತ ಸ್ವತಂತ್ರಗೊಂಡ ನಂತರ ಪ್ರತಿಯೊಬ್ಬ ಭಾರತೀಯನಿಗೆ ಸಾಮಾಜಿಕ, ರಾಜಕೀಯ, ಧಾರ್ಮಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಸಾಮಾಜಿಕ ನ್ಯಾಯ ದೊರಕಬೇಕು ಎಂಬ ಆಶಯದಿಂದ ಜಗತ್ತಿನ ಅನೇಕ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಡಾ. ಬಿ ಆರ್ ಅಂಬೇಡ್ಕರ್ ಅವರ ಸಮಿತಿಯು ಭಾರತಕ್ಕೆ ಶ್ರೇಷ್ಠವಾದ ಸಂವಿಧಾನವನ್ನು ನೀಡಿದೆ ಎಂದರು.
ಈ ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಲಾಗಿದೆ. ನಮ್ಮ ದೇಶದಲ್ಲಿರುವ ಅನೇಕ ಜಾತಿ, ಧರ್ಮಗಳ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ನೀಡಿದ್ದಾರೆ. ಅವರು ನೀಡಿರುವ ನಮ್ಮ ದೇಶದ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಬಲಿಷ್ಠ ಭಾರತ ಕಟ್ಟಲು, ಕನ್ನಡ ನಾಡನ್ನು ಇನ್ನಷ್ಟು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕನು ಸಂವಿಧಾನದ ಆಶಯಗಳನ್ನ ಪಾಲಿಸಬೇಕೆಂದು ಕರೆ ನೀಡಿದರು.ಅಥಣಿ ಮತಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ:
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಯೋಜನೆಗಳಿಂದ ಅನೇಕ ಕುಟುಂಬಗಳಿಗೆ ನೆಮ್ಮದಿ ದೊರಕಿದಂತಾಗಿದೆ ಎಂದರು.ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ಪಡೆದುಕೊಳ್ಳುವ ಮೂಲಕ ಅಥಣಿ ಮತಕ್ಷೇತ್ರದ ಅಭಿವೃದ್ಧಿಯ ಸಂಕಲ್ಪ ಹೊಂದಿದ್ದೇನೆ. ಈ ನಿಟ್ಟಿನಲ್ಲಿ ಈಗಾಗಲೇ ತಾಲೂಕಿನ ಪೂರ್ವಭಾಗದ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ₹ 1400 ಕೋಟಿ ಅನುದಾನಕ್ಕೆ ಮಂಜೂರಾತಿ ಪಡೆದುಕೊಳ್ಳಲಾಗಿದೆ. ಅಲ್ಲದೆ ಅಥಣಿ ಪಟ್ಟಣದ ಜೋಡಿ ಕೆರೆಗಳ ಅಭಿವೃದ್ಧಿಗಾಗಿ ₹ 25 ಕೋಟಿ ಮತ್ತು ಭಾಗಿರಥಿ ನಾಲಾ ಅಭಿವೃದ್ಧಿಗಾಗಿ ₹10 ಕೋಟಿ ಅನುದಾನ ಮಂಜೂರಾಗಿದ್ದು, ಇದಲ್ಲದೆ ಅಥಣಿ ಪಟ್ಟಣದ ನಿವಾಸಿಗಳಿಗೆ ದಿನದ 24 ಗಂಟೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ₹ 126 ಕೋಟಿ ಅನುದಾನ ಪಡೆದುಕೊಂಡು ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಸಿ, ಬರುವ ಫೆಬ್ರವರಿ 12ರಂದು ನೀರಾವರಿ ಸಚಿವರನ್ನು ಮತಕ್ಷೇತ್ರಕ್ಕೆ ಆಮಂತ್ರಿಸಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಹೇಳಿದರು.ಗಣರಾಜ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣವನ್ನು ನೆರವೇರಿಸಿದ ತಾಲೂಕ ತಹಶೀಲ್ದಾರ ವಾಣಿ.ಯು. ಗಣರಾಜ್ಯೋತ್ಸವ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ತಾಲೂಕ ಗ್ರೇಡ್ 2 ತಹಶಿಲ್ದಾರ ಮಹದೇವ ಬಿರಾದಾರ, ತಾಪಂ ಇಒ ಶಿವಾನಂದ ಕಲ್ಲಾಪುರ, ಅಥಣಿ ಡಿಎಸ್‌ಪಿ ಶ್ರೀಪಾದ ಜಲ್ದೆ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸುಭಾಷ ಸೊಂದಕರ, ಪುರಸಭೆ ಮಾಜಿ ಅಧ್ಯಕ್ಷ ರಾವಸಾಬ ಐಹೊಳೆ, ಪುರಸಭೆ ಸದಸ್ಯರು ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಬಿಇಓ ಎಂ ಬಿ ಮೊರಟಗಿ ಸ್ವಾಗತಿಸಿದರು. ಶಿಕ್ಷಕ ಸಂಗಮೇಶ ಹಚ್ಚಡದ ಕಾರ್ಯಕ್ರಮ ನಿರೂಪಿಸಿದರು. ಎಂ.ಎಂ ಮಿರ್ಜಿ ವಂದಿಸಿದರು.----
ಕಗ್ಗಂಟಾದ ಧ್ವಜ- ಎಡವಟ್ಟುಅಥಣಿ ಭೋಜರಾಜ ಕ್ರೀಡಾಂಗಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ಸಂದರ್ಭದಲ್ಲಿ ತಹಶೀಲ್ದಾರ ವಾಣಿ.ಯು ತ್ರಿವರ್ಣ ಧ್ವಜಾರೋಹಣ ನೆರವೇರಿಸಲು ಮುಂದಾದಾಗ ಧ್ವಜಕ್ಕೆ ಹಾಕಲಾಗಿದ್ದ ಹಗ್ಗವು ಕಗ್ಗಂಟಾಗಿ ಧ್ವಜಾರೋಹಣಗೊಳ್ಳದ ಎಡವಟ್ಟು ಜರುಗಿತು. ಕಂಬದ ಧ್ವಜವನ್ನು ಮತ್ತೆ ಕೆಳಗಿಳಿಸಿ ಹಗ್ಗದ ಗಂಟನ್ನು ಸರಿಪಡಿಸಿ ಧ್ವಜಾರೋಹಣ ನಡೆಸಲಾಯಿತು.