ಸಾರಾಂಶ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸಂವಿಧಾನದಲ್ಲಿರುವ ಅಂಶಗಳನ್ನು ಪ್ರತಿಯೊಬ್ಬ ಪ್ರಜೆ ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು. ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಜಾಗೃತಿ ಜಾಥಾ ಅಭಿಯಾನದ ಅಂಗವಾಗಿ ಪತ್ರಕರ್ತರಿಗೆ ಗುರುವಾರ ಆಯೋಜಿಸಿದ್ದ ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದ ಪ್ರತಿಯೊಬ್ಬ ಪ್ರಜೆ ಸಂವಿಧಾನದ 19(1)(ಎ) ವಿಧಿಯ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ತಿಳಿದುಕೊಳ್ಳುವುದು ಬಹುಮುಖ್ಯವಾಗಿದೆ. ಪತ್ರಕರ್ತರು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಮಾಹಿತಿ ಕಲೆ ಹಾಕಿ ಇಲಾಖೆ ಗಮನಕ್ಕೆ ತರುವ ಕಾರ್ಯ ಮಾಡುವುದರಿಂದ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲು ಸಹಕಾರಿ ಆಗುತ್ತದೆ. ಸಂವಿಧಾನವನ್ನು ಕೇವಲ ಪತ್ರ ಕರ್ತರು, ವಿದ್ಯಾರ್ಥಿಗಳು ಆಡಳಿತ ವರ್ಗದವರು ಮಾತ್ರವಲ್ಲದೇ ದೇಶದ ಪ್ರತಿಯೊಬ್ಬ ಪ್ರಜೆ ತಿಳಿದುಕೊಳ್ಳಬೇಕೆಂಬ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಜ. 26 ರಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ್ದಾರೆ. ಜಾಥಾ ಈಗಾಗಲೇ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಅರಿವು ಮೂಡಿಸುವ ಕಾರ್ಯ ಯಶಸ್ವಿಯಾಗಿ ಮಾಡುತ್ತಿದೆ ಎಂದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬರುವಲ್ಲಿ ಪತ್ರಿಕೆಗಳ ಮಹತ್ವ ಅಪಾರವಾದದ್ದು, ಅಭಿವ್ಯಕ್ತಿ ಸ್ವಾತಂತ್ರ್ಯ ಭಾರತದ ಪ್ರತಿಯೊಬ್ಬ ಪ್ರಜೆಗಳಿಗಿದ್ದರೂ ಅದರ ಸದುಪಯೋಗ ಉತ್ತಮ ರೀತಿಯಲ್ಲಿ ಬಳಸಿಕೊಳ್ಳುತ್ತಿರುವುದು. ಪತ್ರಿಕಾ ಮಾಧ್ಯಮ ಮಾತ್ರ, ಪತ್ರಿಕೆಗಳು ಸಮಾಜದ ಸಮಸ್ಯೆಗಳನ್ನು ಸರಿ ದಾರಿಗೆ ತರುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದು, ಈ ನಿಟ್ಟಿನಲ್ಲಿ ಎಲ್ಲಾ ಮಾಧ್ಯಮಗಳು ತಮ್ಮ ಅಭಿಪ್ರಾಯವನ್ನು ಮುಕ್ತ ಮನಸ್ಸಿನಿಂದ ಬಿಂಬಿಸಿ ಕಾರ್ಯನಿರ್ವಹಿಸಬೇಕೆಂದು ಹೇಳಿದರು. ಹಿರಿಯ ಪತ್ರಕರ್ತ ಬಿ. ತಿಪ್ಪೇರುದ್ರಪ್ಪ ಮಾತನಾಡಿ, ಸಂವಿಧಾನ ಕರಡು ಸಮಿತಿ ಅಧ್ಯಕ್ಷರಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ವಿವಿಧ ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತಕ್ಕೆ ವಿಶಾಲ ಸಂವಿಧಾನ ರಚನೆ ಮಾಡಿದ್ದಾರೆ. ಈ ಸಂವಿಧಾನದ ಆರು ಮೂಲಭೂತ ಹಕ್ಕುಗಳ ಪಟ್ಟಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಒಂದು, ಭಾರತದ ಪ್ರತಿಯೊಬ್ಬ ಪ್ರಜೆಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಸಂವಿಧಾನ ಪ್ರತಿಪಾದಿಸಿದೆ ಎಂದರು.ಈ ಸ್ವಾತಂತ್ರ್ಯವನ್ನು ಪತ್ರಿಕೆಗಳು ಉತ್ತಮ ರೀತಿಯಲ್ಲಿ ಬಳಸಿಕೊಂಡು ಸಮಾಜದಲ್ಲಿ ನಡೆಯುವ ಶೋಷಣೆಗಳು, ಅನ್ಯಾಯಗಳನ್ನು ತಮ್ಮ ಪತ್ರಿಕೆಗಳಲ್ಲಿ ಪ್ರಕಟಿಸಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳ ಬೇಕು ಪ್ರತಿಯೊಬ್ಬ ಪತ್ರಕರ್ತರು ಸಂವಿಧಾನ ತಿಳಿಯುವುದು ಬಹುಮುಖ್ಯವಾಗಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ ಮಾಧ್ಯಮಗಳು ಸರ್ಕಾರ ಮತ್ತು ಸಾರ್ವಜನಿಕರೊಂದಿಗೆ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೀಶ್ ಹಾಜರಿದ್ದರು.15 ಕೆಸಿಕೆಎಂ 4ಪತ್ರಕರ್ತರಿಗಾಗಿ ಗುರುವಾರ ಜಿಪಂನಲ್ಲಿ ಆಯೋಜಿಸಿದ್ದ ಅಭಿವ್ಯಕ್ತಿ ಸ್ವಾತಂತ್ರ್ಯ ಕುರಿತ ವಿಚಾರ ಸಂಕೀರ್ಣದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿದರು. ಜಿಪಂ ಸಿಇಒ ಡಾ. ಗೋಪಾಲಕೃಷ್ಣ, ಪತ್ರಕರ್ತ ತಿಪ್ಪೇರುದ್ರಪ್ಪ ಇದ್ದರು.