ಗದಗ: ವಿಶೇಷ ಸಂಕ್ಷಿಪ್ತ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಂಡು ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತವಾಗಿಸುವ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮನವಿ ಮಾಡಿದರು.

ಮಂಗಳವಾರ ನಗರದ ತ್ರಿವಿಧ ದಾಸೋಹಕ್ಕೆ ಹೆಸರಾದ ವೀರೇಶ್ವರ ಪುಣ್ಯಾಶ್ರಮದಲ್ಲಿ ಕಲ್ಲಯ್ಯಜ್ಜನವರಿಗೆ ಎಸ್‌ಐಆರ್ ಎನ್ಯೂಮರೇಶನ್ ನಮೂನೆಯನ್ನು ವಿತರಿಸುವ ಮೂಲಕ ಬಿಎಲ್ಒಗಳು ಎಸ್‌ಐಆರ್ ನೋಂದಣಿ ಮನೆ‌ ಮನೆ ಭೇಟಿಗೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಉದ್ದೇಶ, ಮಹತ್ವ ಹಾಗೂ ಅನುಸರಿಸಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ವಿವರವಾಗಿ ಮಾಹಿತಿ ನೀಡಿದರು. ಮತದಾರರ ಪಟ್ಟಿಯಲ್ಲಿ ಹೆಸರುಗಳ ನಿಖರತೆ ಕಾಪಾಡುವುದು, ಅರ್ಹ ಮತದಾರರ ಹೆಸರು ಸೇರ್ಪಡೆ, ಅನರ್ಹ ಅಥವಾ ಪುನರಾವರ್ತಿತ ಹೆಸರುಗಳ ತಿದ್ದುಪಡಿ ಹಾಗೂ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು ಎಸ್‌ಐಆರ್ ಪ್ರಕ್ರಿಯೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಪ್ರತಿಯೊಬ್ಬ ನಾಗರಿಕರು ತಮ್ಮ ಮಾಹಿತಿಯನ್ನು ಸರಿಯಾಗಿ ಪರಿಶೀಲಿಸಿ ಅಗತ್ಯವಿದ್ದಲ್ಲಿ ಎಸ್‌ಐಆರ್ ನಮೂನೆಗಳನ್ನು ಭರ್ತಿ ಮಾಡಿ ಸಂಬಂಧಿಸಿದ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು. ಇದರಿಂದ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಮತದಾರರ ಪಟ್ಟಿ ಸಿದ್ಧಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಜೂ. 30ರಿಂದ ಜು. 29ರ ವರೆಗೆ ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಹಾಗೂ ಪರಿಶೀಲನೆ ನಡೆಸಲಿದ್ದಾರೆ. ನಂತರ ಆ. 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದ ಅವರು, ಕಾರ್ಯಚಟುವಟಿಕೆಗೆ ಕುರಿತು ಸುದೀರ್ಘವಾಗಿ ವಿವರಿಸಿ, ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಸಹಕರಿಸಬೇಕು ಎಂದರು.


ವೀರೇಶ್ವರ ಪುಣ್ಯಾಶ್ರಮ ಕಲ್ಲಯ್ಯಜ್ಜನವರು ಮಾತನಾಡಿ, ಚುನಾವಣಾ ಆಯೋಗದ ಈ ಮಹತ್ವದ ಕಾರ್ಯಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಸಮಾಜದ ಎಲ್ಲ ವರ್ಗದ ಜನರು ತಮ್ಮ ಮತದಾರರ ಮಾಹಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಜವಾಬ್ದಾರಿಯುತ ನಾಗರಿಕರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಸೀಲ್ದಾರ್‌ ಶ್ರೀನಿವಾಸ್ ಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಇತರರು ಇದ್ದರು.