ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ರಾಜ್ಯವು ‘ಕರ್ನಾಟಕ’ವೆಂದು ನಾಮಕರಣಗೊಂಡು 5 ದಶಕಗಳು ಪೂರೈಸಿದ ಹಿನ್ನೆಲೆ ‘ಕರ್ನಾಟಕ ಸುವರ್ಣ ಸಂಭ್ರಮ ರಥ’ವನ್ನು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಸೋಮವಾರ ಬರಮಾಡಿಕೊಳ್ಳಲಾಯಿತು.ಗಣ್ಯರು ತಾಯಿ ನಾಡದೇವಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿ ಅದ್ಧೂರಿಯಾಗಿ ಸ್ವಾಗತಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಸೇರಿ ಅದ್ಧೂರಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕನ್ನಡ ನಾಡು ನುಡಿ, ಕನ್ನಡ ಭಾಷೆಗೆ ಇರುವ ಇತಿಹಾಸವನ್ನು ನೆನಪಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ ಎಂದು ಹೇಳಿದರು.ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು. ‘ಕರ್ನಾಟಕ ರಾಜ್ಯವೆಂದು ನಾಮಕರಣವಾಗಿದೆ. 50 ವರ್ಷ ಪೂರ್ಣಗೊಂಡ ಹಿನ್ನೆಲೆ ಸುವರ್ಣ ಸಂಭ್ರಮ ರಥಯಾತ್ರೆಯನ್ನು ರಾಜ್ಯದ್ಯಾಂತ ಹಮ್ಮಿಕೊಳ್ಳಲಾಗಿದೆ ಎಂದರು.
ಸುವರ್ಣ ಸಂಭ್ರಮ 50 ರ ರಥ ಯಾತ್ರೆಯು ಗೋಣಿಕೊಪ್ಪ-ಪೊನ್ನಂಪೇಟೆ-ವಿರಾಜಪೇಟೆ ಮೂಲಕ ಮಡಿಕೇರಿಗೆ ಆಗಮಿಸಿದೆ. ಸೆ. 10 ರಂದು ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ತೆರಳಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ ಕರ್ನಾಟಕ ನಾಮಕರಣವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ 50 ರ ಸಂಭ್ರಮ ಪ್ರಯುಕ್ತ ನೆನಪಿಸುವುದರ ಜೊತೆಗೆ ಕನ್ನಡಿಗರಲ್ಲಿ ಜಾಗೃತಿ ಮೂಡಿಸಲು ಸುವರ್ಣ ಕರ್ನಾಟಕ ರಥ ಜ್ಯೋತಿಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
ಕನ್ನಡ ನಾಡು-ನುಡಿ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ರಾಜ್ಯದ ಗಡಿ ಕೊಡಗು ಜಿಲ್ಲೆಗೂ ಕರ್ನಾಟಕ ಸುವರ್ಣ ಸಂಭ್ರಮ ರಥ ಆಗಮಿಸಿರುವುದು ಎಲ್ಲರಲ್ಲಿಯೂ ಉತ್ಸಾಹ ಮತ್ತು ಸಂಭ್ರಮ ತಂದಿದೆ ಎಂದು ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ ‘ಸುವರ್ಣ ಸಂಭ್ರಮ-50’ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಸಂಭ್ರಮ 50 ಪ್ರಯುಕ್ತ ಕನ್ನಡ ಜ್ಯೋತಿ ರಥಯಾತ್ರೆಯು ರಾಜ್ಯದ 31 ಜಿಲ್ಲೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸಿದ್ದು, ಕೊಡಗು ಜಿಲ್ಲೆಯ ನಂತರ ಹಾಸನ, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಸಂಚರಿಸಲಿದೆ.ಸ್ವಾಗತ ಹಾಗೂ ಮೆರವಣಿಗೆ ಸಂದರ್ಭದಲ್ಲಿ ತಹಸೀಲ್ದಾರ್ ಪ್ರವೀಣ್ ಕುಮಾರ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ರೇವತಿ ರಮೇಶ್, ಕಸಾಪ ತಾಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಸರ್ವೋದಯ ಸಮಿತಿ ಜಿಲ್ಲಾಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕಸಾಪ ಸದಸ್ಯರಾದ ಚುಮ್ಮಿ ದೇವಯ್ಯ, ಜಾನ್ ಸುಂಟಿಕೊಪ್ಪ, ಬೆಪ್ಪುರನ ಬೋಪಯ್ಯ, ಸಿದ್ದರಾಜು ಬೆಳ್ಳಯ್ಯ, ಅಂಬೆಕಲ್ಲು ನವೀನ್, ಟಿ.ಎಂ.ಮುದ್ದಯ್ಯ, ಜಿ.ಆರ್.ರಾಜು, ಕಸಾಪ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ, ಕನ್ನಡಾಭಿಮಾನಿಗಳು ಇತರರು ಇದ್ದರು.
ಮೆರವಣಿಗೆ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರಮೇಶ್ ಮತ್ತು ತಂಡದವರು ಗಿರಿಜನ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.