ಅಂಗವಿಕಲರು ಸ್ವಾವಲಂಬಿಯಾಗಿ ಬದುಕು ಸಾಗಿಸಲು ಹಾಗೂ ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು.
ಗದಗ: ಅಂಗವಿಕಲರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಅಂಗವಿಕಲರಿಗೆ ಅನುಕಂಪ ಬೇಕಾಗಿಲ್ಲ. ಅವರಲ್ಲಿ ಮನೋಸ್ಥೈರ್ಯ ತುಂಬಿ ಮುನ್ನಡೆಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಂಗವಿಕಲರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆ ಮತ್ತು ಸಂಘಗಳ ಸಹಯೋಗದಲ್ಲಿ ಸಾಮಾಜಿಕ ಪ್ರಗತಿಯನ್ನು ಸಾಧಿಸಲು ಅಂಗವಿಕಲರ ಒಳಗೊಂಡ ಸಮಾಜಗಳನ್ನು ರೂಪಿಸುವುದು ಎಂಬ ಘೋಷವಾಕ್ಯದಡಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಅಂಗವಿಕಲರು ಸ್ವಾವಲಂಬಿಯಾಗಿ ಬದುಕು ಸಾಗಿಸಲು ಹಾಗೂ ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು. ಜಿಲ್ಲೆಯ ಅಂಗವಿಕಲರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸಮಾಜದಲ್ಲಿ ಅಂಗವಿಕಲರನ್ನು ಗೌರವದಿಂದ ಕಾಣುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ದೇಶದಲ್ಲಿನ ಕ್ರೀಡಾಪಟುಗಳಲ್ಲಿ ಅಂಗವಿಕಲ ಕ್ರೀಡಾಪಟುಗಳು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡು ಯಾವುದರಲ್ಲೂ ತಾವು ಕಡಿಮೆ ಎಲ್ಲ ಎಂದು ಸಾಬೀತುಪಡಿಸಿದ್ದಾರೆ. ದೇವರು ಕೊಟ್ಟ ಅತೀಂದ್ರಿಯ ಶಕ್ತಿಯನ್ನು ಉಪಯೋಗಿಸಿಕೊಂಡು ಸಾಧನೆ ಮಾಡಿದ್ದಾರೆ. ದೇವರು ಕೊಟ್ಟ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಯಾಗಿ ಬದುಕು ನಿರ್ವಹಿಸುವುದು ಸಾರ್ಥಕ ಬದುಕೆನಿಸುತ್ತದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ಅಂಗವಿಕಲರಿಗೆ ಇರುವ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸಮಾಜದಲ್ಲಿ ಅವರನ್ನು ಗೌರವದಿಂದ ಕಾಣಬೇಕು ಎನ್ನುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ವಿಕಲಚೇತನರಿಗಿರುವ ಹಕ್ಕುಗಳ ರಕ್ಷಣೆಯಾಗಬೇಕು. ಅಂಗವಿಕಲರ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದರು.ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ. ಮಹಾಂತೇಶ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಅಂಗವಿಕಲರಿಗಾಗಿ 21,414 ಯುಡಿಐಡಿ ಕಾರ್ಡ್ ವಿತರಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಅಂಗವಿಕಲರು ಸ್ವಾವಲಂಬಿಯಾಗಿ ಬದುಕಲು ಸರ್ಕಾರದಿಂದ ಯಂತ್ರಚಾಲಿತ ವಾಹನವನ್ನು ನೀಡಲಾಗುತ್ತಿದೆ ಎಂದರು.
ಈ ವೇಳೆ ವಿಶೇಷ ಸಾಧನೆ ಮಾಡಿದ ಅಂಗವಿಕಲರನ್ನು ಸನ್ಮಾನಿಸಲಾಯಿತು. ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಡಿವೈಎಸ್‌ಪಿ ಮಹಾಂತೇಶ ಸಜ್ಜನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ., ಸಮಾಜ ಕಲ್ಯಾಣ ಉಪನಿರ್ದೇಶಕಿ ನಂದಾ ಹಣಬರಟ್ಟಿ ಇತರರು ಇದ್ದರು. ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಸ್ವಾಗತಿಸಿದರು. ಬಾಹುಬಲಿ ಜೈನರ ನಿರೂಪಿಸಿ, ವಂದಿಸಿದರು.