ಕಡ್ಡಾಯವಾಗಿ ಪ್ರತಿಯೊಬ್ಬರೂ ಮತದಾನ ಮಾಡಿ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಮನವಿ

| Published : Mar 20 2024, 01:17 AM IST

ಕಡ್ಡಾಯವಾಗಿ ಪ್ರತಿಯೊಬ್ಬರೂ ಮತದಾನ ಮಾಡಿ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬವಿದ್ದಂತೆ. ಈ ಹಬ್ಬದಲ್ಲಿ ಪ್ರತಿಯೊಬ್ಬರೂ ತಪ್ಪದೆ ಭಾಗವಹಿಸಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬವಿದ್ದಂತೆ. ಈ ಹಬ್ಬದಲ್ಲಿ ಪ್ರತಿಯೊಬ್ಬರೂ ತಪ್ಪದೆ ಭಾಗವಹಿಸಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮನವಿ ಮಾಡಿದರು.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ನಡೆದ 2024ರ ಲೋಕಸಭಾ ಚುನಾವಣೆ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮತ ಚಲಾಯಿಸುವ ಮೂಲಕವೇ ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾಗವಹಿಸಲು ಸಾಧ್ಯ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಎಲ್ಲರೂ ಮತದಾನ ಮಾಡುವಂತೆ ತಿಳಿಸಬೇಕು, ಯಾವುದೇ ಆಮಿಷಕ್ಕೆ ಬಲಿಯಾಗದೆ, ಮತ ಚಲಾಯಿಸುವ ಮೂಲಕ ದೇಶದ ಅಭವೃದ್ಧಿಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ಆನ್‌ಲೈನ್ ಅಪ್ಲಿಕೇಶನ್ ಮತ್ತು ಹೆಲ್ಪ್ಲೈನ್ ಸಂಖ್ಯೆಗೆ ಕರೆ ಮಾಡುವ ಮೂಲಕ ಯಾರಾದರೂ ಆಮಿಷಗಳನ್ನು ಒಡ್ಡುತ್ತಿದ್ದರೆ, ಅಥವಾ ಮತದಾನಕ್ಕೆ ಅಡ್ಡಿ ಪಡಿಸುತ್ತಿದ್ದರೆ ದೂರು ದಾಖಲು ಮಾಡಬಹುದಾಗಿದೆ ಎಂದರು.ನಂತರ ಮಾತನಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಅವರು ವಿಶ್ವದಲ್ಲಿ ಶೇ.55 ಆಡಳಿತ ದೇಶಗಳು ಪ್ರಜಾಪ್ರಭುತ್ವ ವನ್ನು ಆಯ್ಕೆ ಮಾಡಿಕೊಂಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶವನ್ನು ಸದೃಢವಾಗಿ ಮುನ್ನಡೆಸಲು ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳು ಕಾರ್ಯ ನಿರ್ವಹಿಸುತ್ತಿವೆ. ಉತ್ತಮ ಶಾಸಕಾಂಗ ರಚನೆಯಾಗಬೇಕೆಂದರೆ ಪ್ರತಿಯೊಬ್ಬರೂ ಮತದಾನ ಮಾಡುವುದು ಅತ್ಯಗತ್ಯ. ಕಳೆದಬಾರಿ ಕಡಿಮೆ ಪ್ರಮಾಣದಲ್ಲಿ ಮತದಾನ ನಡೆದಿದ್ದು, ಈ ಬಾರಿ ಶೇಕಡಾ 100 ರಷ್ಟು ಮತದಾನ ಆಗುವಂತೆ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದ ಎಸ್ಪಿ ಅಶೋಕ್ ಜಾಗೃತಿ ಜಾಥಾ ಕಾರ್ಯಕ್ರಮದ ಉದ್ದೇಶ ಮತ್ತು ಮತದಾನ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಅಶ್ವಿಜ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ, ಕೃಷಿ ಇಲಾಖೆ ಉಪನಿರ್ದೇಶಕ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಲಾ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.