ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದಿರುವ 18 ವರ್ಷ ಮೇಲ್ಪಟ್ಟ ಎಲ್ಲರೂ ಹೆಸರು ನೋಂದಾಯಿಸಿಕೊಂಡು ಮತದಾನದ ಹಕ್ಕು ಪಡೆಯಬೇಕು.

ಸಿರುಗುಪ್ಪ: ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಸಿರುಗುಪ್ಪ ವಕೀಲರ ಸಂಘ, ತಾಲೂಕು ಆಡಳಿತ, ತಾಪಂ, ಶಿಕ್ಷಣ ಇಲಾಖೆ, ಪೊಲೀಸ್‌ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ್ ಗೌಸಿಯಾ ಬೇಗಂ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದಿರುವ 18 ವರ್ಷ ಮೇಲ್ಪಟ್ಟ ಎಲ್ಲರೂ ಹೆಸರು ನೋಂದಾಯಿಸಿಕೊಂಡು ಮತದಾನದ ಹಕ್ಕು ಪಡೆಯಬೇಕು. ನನ್ನ ಭಾರತ, ನನ್ನ ಮತ ಎಂಬ ಧ್ಯೇಯವಾಕ್ಯದೊಂದಿಗೆ 16ನೇ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ. ಮುಂದೆ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಗಳು ಬರಲಿದ್ದು, ಶೇ.100 ಮತದಾನ ಆಗಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಹೆಚ್ಚು ಯುವ ಮತದಾರರನ್ನು ಪ್ರೋತ್ಸಾಹಿಸುವ ಸಲುವಾಗಿ, ಭಾರತ ಸರ್ಕಾರ "ರಾಷ್ಟ್ರೀಯ ಮತದಾರರ ದಿನ " ವಾಗಿ ಪ್ರತಿ ವರ್ಷ ಜನವರಿ 25ರಂದು ಆಚರಿಸಲು ನಿರ್ಧರಿಸಿದೆ. ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜು ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು

ಸಂಪನ್ಮೂಲ ವ್ಯಕ್ತಿ ಜಡಪ್ಪ ಮಾತನಾಡಿ, 1950ರಲ್ಲಿ ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಪ್ರಜಾಪ್ರಭುತ್ವದ ಕೇಂದ್ರಸ್ತಂಭವೇ ಮತದಾನವಾಗಿದೆ. ಭಾರತವು 1951 ರಲ್ಲಿ ತನ್ನ ಮೊದಲ ಸಾರ್ವತ್ರಿಕ ಚುನಾವಣೆಯ ನಂತರ ಮತದಾನಕ್ಕೆ ನಿಗದಿತ ವಯೋಮಾನದ ತತ್ವವನ್ನು ಅಳವಡಿಕೆ ಮಾಡಿಕೊಂಡಿದೆ. ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು 2011ರಲ್ಲಿ ಆಚರಿಸಲು ಆರಂಭ ಮಾಡಲಾಗಿದೆ ಎಂದರು.

ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ದೇಶಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಭಾರತದ ಚುನಾವಣಾ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. ಹೊಸ ಮತದಾರರನ್ನು ಸೆಳೆಯುವ, ಉತ್ತೇಜಿಸುವ ಹಾಗೂ ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.

ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಬಿಎಲ್ಒಗಳಿಗೆ ಹಾಗೂ ಮತದಾರರ ದಿನಾಚರಣೆಯ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ವಕೀಲರ ಸಂಘದ ಅಧ್ಯಕ್ಷ ಯು.ವೆಂಕೋಬ, ಸರ್ಕಾರಿ ಅಭಿಯೋಜಕರಾದ ಶಿವರಾಜ್ ಪಾಟೀಲ್, ಶಿಕ್ಷಣಾಧಿಕಾರಿ ಗುರಪ್ಪ, ತಾಲೂಕು ಪಂಚಾಯಿತಿ ವ್ಯವಸ್ಥಾಪಕಿ ಸುಜಾತ, ಅಧಿಕಾರಿಗಳಾದ ಮಂಜುನಾಥ್ ವೆಂಕಟೇಶ್ ನಾಯಕ್, ಷರೀಫಸಾಬ್ ಭಾಗವಹಿಸಿದ್ದರು.