ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಶ್ರಮ ವಹಿಸಿ: ಜಿಲ್ಲಾಧಿಕಾರಿ ದಿವಾಕರ

| Published : Oct 27 2024, 02:19 AM IST

ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಶ್ರಮ ವಹಿಸಿ: ಜಿಲ್ಲಾಧಿಕಾರಿ ದಿವಾಕರ
Share this Article
  • FB
  • TW
  • Linkdin
  • Email

ಸಾರಾಂಶ

ಇಲಾಖಾವಾರು ಅಧಿಕಾರಿಗಳು ಸಭೆಗೆ ಸರಿಯಾದ ಮಾಹಿತಿ ಒದಗಿಸಬೇಕು.

ಹೊಸಪೇಟೆ: ವಿಜಯನಗರ ಜಿಲ್ಲೆ ರಚನೆಯಾಗಿ ಮೂರು ವರ್ಷ ಕಳೆದಿದೆ. ಅಭಿವೃದ್ಧಿ ಪಥದತ್ತ ಸಾಗಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮವಹಿಸಿ ಸರ್ಕಾರದ ಯೋಜನೆ, ಸೌಲಭ್ಯಗಳನ್ನು ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಹೇಳಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಲಾಖಾವಾರು ಅಧಿಕಾರಿಗಳು ಸಭೆಗೆ ಸರಿಯಾದ ಮಾಹಿತಿ ಒದಗಿಸಬೇಕು. ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಮಾತ್ರವಲ್ಲದೆ ದತ್ತಾಂಶ ಸಂಗ್ರಹಣೆಯಲ್ಲೂ ನಿಖರತೆ ಇರಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಅನುಮತಿ ಪಡೆಯದೆ ಸಭೆಗಳಿಗೆ ಗೈರಾದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಕೃಷಿ ಇಲಾಖೆಗೆ ಎಸ್‌ಸಿಎಸ್‌ಪಿ ಯೋಜನೆಯಡಿ ಎಲ್ಲಾ ವಲಯಗಳಿಂದ ಒಟ್ಟು ₹2.83 ಕೋಟಿ ಬಿಡುಗಡೆ ಮಾಡಿದ್ದು, ಅದರ ಪೈಕಿ ₹2.77 ಕೋಟಿ ಬಳಕೆಯಾಗಿದೆ. ಟಿಎಸ್‌ಪಿ ಯೋಜನೆಯಡಿ ₹1.42 ಕೋಟಿ ಬಿಡುಗಡೆ ಮಾಡಿದ್ದು, ₹1.40 ಕೋಟಿ ಬಳಕೆಯಾಗಿದೆ. ಹೀಗೆ ತೋಟಗಾರಿಕೆ ಇಲಾಖೆಯಲ್ಲಿ ಎಸ್‌ಸಿಎಸ್‌ಪಿ ಯೋಜನೆಯಡಿ ಶೇ.66 ಮತ್ತು ಟಿಎಸ್‌ಪಿ ಯೋಜನೆಯಡಿ ಶೇ.93ರಷ್ಟು ಹಣ ಬಳಕೆಯಾಗಿದೆ. ಈ ಯೋಜನೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ರೂಪಿಸಿರುವ ಯೋಜನೆಗಳಾಗಿವೆ ಎಂದರು.

ಪಶುಸಂಗೋಪನಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಅಡಿ ವಿಮಾಯೋಜನೆ ಸರಿಯಾಗಿ ನಿರ್ವಹಿಸಿದ್ದಿರಾ ಎಂದು ಜಿಲ್ಲಾಧಿಕಾರಿ ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಪಶು ಸಂಗೋಪನಾ ಇಲಾಖೆಯ ಅಧಿಕಾರಿ ವಿಮಾ ಯೋಜನೆಗೆ 75 ಅರ್ಜಿಗಳು ಸ್ವೀಕೃತಿಯಾಗಿದ್ದು, ಅವುಗಳನ್ನು ಮುಂದಿನ ಹಂತಕ್ಕೆ ಕಳುಹಿಸಲಾಗಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈ ಯೋಜನೆಗಳಡಿಯಲ್ಲಿ ಹೆಣ್ಣು ಮಕ್ಕಳ ಶುಲ್ಕ ಮರುಪಾವತಿ ಯಾಗುವುದರಿಂದ ಶೇ.100 ರಷ್ಟು ಹಣ ಉಪಯೋಗವಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಪ್ರವಾಸೋದ್ಯಮ ಇಲಾಖೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 8,9,10ನೇ ತರಗತಿಯ ವಿದ್ಯಾರ್ಥಿಗಳಿಗೆ ಕರ್ನಾಟಕ ದರ್ಶನ ಯೋಜನೆಯಡಿ ಐದು ದಿನ ಪ್ರವಾಸ ಕೈಗೊಳ್ಳಬೇಕಿತ್ತು. ಯಾಕೆ ಪ್ರವಾಸ ಕೈಗೊಂಡಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಶ್ನಿಸಿದರು, ಇದಕ್ಕೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಯವರು ಶಾಲಾ ಶಿಕ್ಷಣ ಇಲಾಖೆಯಿಂದ ಮಕ್ಕಳ ಪಟ್ಟಿ ಕಳುಹಿಸುವುದು ತಡವಾದ ಕಾರಣ ಪ್ರವಾಸ ಕೈಗೊಳ್ಳಲಾಗಿಲ್ಲ, ಮುಂದಿನ ದಿನಗಳಲ್ಲಿ ಅನುಷ್ಠಾನ ಮಾಡಲಾಗುವುದು ಎಂದು ಉತ್ತರಿಸಿದರು.

ಅಧಿಕಾರಿಗಳು ನೆಪ ಹೇಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಯೋಜನೆಗಳಿಂದ ವಂಚಿತರನ್ನಾಗಿಸಬೇಡಿ ಎಂದು ಜಿಲ್ಲಾಧಿಕಾರಿ, ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಅಕ್ರಮ ಷಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಎಸ್., ಡಿಎಚ್ಒ ಡಾ.ಶಂಕರ್ ನಾಯ್ಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಬಿ.ರಾಮಚಂದ್ರಪ್ಪ ಸೇರುದಂತೆ ವಿವಿಧ ಅಧಿಕಾರಿಗಳು ಇದ್ದರು.