ಸಾರಾಂಶ
ಪೋಷಣ್ ಅಭಿಯಾನ ಕಾರ್ಯಕ್ರಮ ಉದ್ಘಾಟನೆ । ಗುಣಮಟ್ಟದ ಆಹಾರ ಪದಾರ್ಥಗಳ ಬಳಕೆಗೆ ಸಲಹೆ
ಕನ್ನಡಪ್ರಭ ವಾರ್ತೆ ಹಾಸನತಾಲೂಕು ಪಂಚಾಯಿತಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಶಾಸಕ ಸ್ವರೂಪ್ ಪ್ರಕಾಶ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಬಾಲ್ಯದಿಂದಲೇ ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿದಲ್ಲಿ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ನಿವಾರಣೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ಅಪೌಷ್ಟಿಕತೆ ನಿವಾರಣೆಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದ ಪ್ರಮುಖ ಕಾರ್ಯಕ್ರಮಗಳ ಪೈಕಿ ಪೋಷಣ್ ಅಭಿಯಾನ ಕೂಡ ಒಂದಾಗಿದೆ. ಹಾಸನ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಅಪೌಷ್ಟಿಕ ಮಕ್ಕಳ ಸಂಖ್ಯೆ ಕೂಡ ಕಡಿಮೆ ಆಗಿದೆ. ಆದರೆ ಮುಂದಿನ ದಿನಗಳಲ್ಲಿ ಸಂಖ್ಯೆ ಶೂನ್ಯ ತಲುಪಿಸಬೇಕು. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಶ್ರಮವಹಿಸಬೇಕು ಎಂದರು.ಹೊರಗಿನ ಆಹಾರಕ್ಕಿಂತ ಮನೆಯಲ್ಲೇ ತಯಾರಿಸಿದ ಗುಣಮಟ್ಟದ ಆಹಾರ ಪದಾರ್ಥಗಳ ಬಳಕೆ ಉತ್ತಮ ಆರೋಗ್ಯಕ್ಕೆ ಸಹಕಾರಿ. ಆದಷ್ಟು ಅಕ್ಕಿ, ಸಕ್ಕರೆ, ಸೇರಿದಂತೆ ಬಿಳಿ ಉತ್ಪನ್ನಗಳ ಆಹಾರ ಪದಾರ್ಥಗಳ ಬಳಕೆ ಕಡಿಮೆ ಮಾಡಿ ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಧರಣಿ ಮಾತನಾಡಿ, ಮಹಿಳೆಯರು ಮಕ್ಕಳು, ವಿಕಲಚೇತನರು, ಸೇರಿದಂತೆ ಹಲವರನ್ನು ಒಳಗೊಂಡು, ಶೇಕಡಾ 82ರಷ್ಟು ಜನರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಒಳಗೊಂಡಿದೆ. ಅವರೆಲ್ಲರಿಗೂ ಸೇವೆ ನೀಡುವ ಭಾಗ್ಯ ದೊರೆತಿರುವುದು ನಮ್ಮ ಭಾಗ್ಯ ಎಂದರು.ರಕ್ತ ಹೀನತೆ, ಅಪೌಷ್ಟಿಕತೆ, ಅನಾರೋಗ್ಯ ಹೋಗಲಾಡಿಸಲು ಇಂದಿಗೂ ಆಗಿಲ್ಲ. ಮಾನವ ಜೀವಿಸಲು ಆರೋಗ್ಯಕರ ಆಹಾರ ಪದಾರ್ಥಗಳ ಸೇವನೆ ಅತಿ ಅಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯಕರ ಆಹಾರ ಪದಾರ್ಥ ಬಳಸುವಂತೆ ಕರೆ ನೀಡಿದ ಅವರು, 2023ಕ್ಕೆ ಅಪೌಷ್ಟಿಕತೆ ಮುಕ್ತ ಭಾರತ ದೇಶ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ಮನೆಯಲ್ಲೇ ಬೆಳೆಯುವ ಆಹಾರ ಪದಾರ್ಥಗಳು ಸೊಪ್ಪು, ತರಕಾರಿ, ಹಣ್ಣು ಹೇಗೆ ದೇಹಕ್ಕೆ ಉಪಯುಕ್ತ ಅಂಶಗಳನ್ನು ನೀಡುವ ಆಹಾರ ಪದಾರ್ಥಗಳನ್ನು ಸೇವಿಸಬೇಕು ಎಂದು ಸಲಹೆ ನೀಡಿದ ಅವರು, ಇಲಾಖೆಯ ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿ ಮನೆ ಮನೆ ಭೇಟಿ ನೀಡಿದ ವೇಳೆ ಅವರಿಗೂ ಈ ಬಗ್ಗೆ ಸಮಗ್ರ ಮಾಹಿತಿ ನೀಡುವ ಮೂಲಕ ಅವರನ್ನು ಸಶಕ್ತರನ್ನಾಗಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶ್ವೇತಾ, ತಾ ಪಂ. ಅಭಿವೃದ್ಧಿ ಅಧಿಕಾರಿ ಗಿರೀಶ್, ಶಿಶು ಅಭಿವೃದ್ಧಿ ಅಧಿಕಾರಿ ಜ್ಯೋತಿ ಲಕ್ಷ್ಮಿ ಹಾಗೂ ಇತರ ಅಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.