ಬಂಟ್ವಾಳ: ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ವರ್ತಮಾನದ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಅನುಕೂಲಕರವಾಗಿದ್ದು, ವಿಶೇಷವಾಗಿ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಸಹಕಾರಿಯಾಗಿವೆ. ಮಹಿಳಾ ಸ್ವಾತಂತ್ರ್ಯ ಮತ್ತು ಮಹಿಳಾ ಹಕ್ಕುಗಳ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಅರಿವು ಮೂಡಬೇಕು. ಮೀಸಲಾತಿ ಭಿಕ್ಷೆಯಲ್ಲ, ಅದು ಮಹಿಳೆಯರ ಹಕ್ಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ದೀನ್ ದಯಾಳ್ ಅಂತ್ಯೋದಯ ಯೋಜನೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ವ-ಸಹಾಯ ಸಂಘಗಳಿಗೆ ಬ್ಯಾಂಕ್ ಸಾಲ ವಿತರಣೆ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ ಬಿ.ಸಿ.ರೋಡ್‌ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಸಮಾರಂಭದಲ್ಲಿ ಪಾಲ್ಗೊಂಡು ರೈ ಮಾತನಾಡಿದರು.ತಾಲೂಕು ಪಂಚಾಯಿತಿ ಬಂಟ್ವಾಳ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಭಾರತಾಂಬೆ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬಂಟ್ವಾಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷೆ ಜಯಂತಿ ಆರ್. ಪೂಜಾರಿ ಉದ್ಘಾಟಿಸಿದರು. ಉಪನ್ಯಾಸಕಿ ಮಧುಮಾಲ ಮಹಿಳಾ ಸಬಲೀಕರಣ ಕುರಿತು ಉಪನ್ಯಾಸ ನೀಡಿದರು.ಯೋಜನಾ ನಿರ್ದೇಶಕರಾದ ಜಯರಾಮ್ ಮಾತನಾಡಿ, ಈಗಾಗಲೇ ಪ್ರತಿ ಸಂಘಕ್ಕೆ ನೀಡಲಾಗುತ್ತಿರುವ ಸಮುದಾಯ ಬಂಡವಾಳ ನಿಧಿ ₹1.5 ಲಕ್ಷವನ್ನು ₹3 ಲಕ್ಷಕ್ಕೆ ಹೆಚ್ಚಿಸುವ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಶಿಶುಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಝ್, ಭಾರತಾಂಬೆ ಸಂಜೀವಿನಿ‌ ತಾಲೂಕು ಒಕ್ಕೂಟದ ಅಧ್ಯಕ್ಷೆ ವಿದ್ಯಾ, ತಾ.ಪಂ.ಸಹಾಯಕ ನಿರ್ದೇಶಕ ವಿಶ್ವನಾಥ್‌ ಬೈಲಮೂಲೆ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಸುಧಾ, ತಾಲೂಕು ವ್ಯವಸ್ಥಾಪಕರಾದ ಪ್ರದೀಪ್‌ ಕಾಮತ್‌, ಸಾಂಘವಿ, ನರೇಗಾ ಐಇಸಿ ಸಂಯೋಜಕ ರಾಜೇಶ್, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್, ರೈತೋತ್ಪಾದಕ ಕಂಪನಿಯ ಅಧ್ಯಕ್ಷೆ ಶೋಭಾ, ಗ್ಯಾರಂಟಿ ಯೋಜನೆ‌ ಬಂಟ್ವಾಳ‌ ಸಮಿತಿಯ ಸದಸ್ಯರು ಇದ್ದರು.