ಸಾರಾಂಶ
ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಳ್ಳದ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು ಇದೀಗ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲವನ್ನುಂಟು ಮಾಡಿದೆ.
- ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆಗೆ ಸಹಕಾರ ಕೋರಿದ ಸುಧಾಕರ್?
- ಬಿಜೆಪಿ ಯಾರನ್ನು ನಿಲ್ಲಿಸುತ್ತೋ ಅವರ ಪರ ಕೆಲಸ: ದೇವೇಗೌಡಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಳ್ಳದ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು ಇದೀಗ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲವನ್ನುಂಟು ಮಾಡಿದೆ. ಸೋಮವಾರ ಪದ್ಮನಾಭನಗರ ನಿವಾಸಕ್ಕೆ ತೆರಳಿದ ಸುಧಾಕರ್ ಅವರು ದೇವೇಗೌಡ ಅವರನ್ನು ಭೇಟಿ ಮಾಡಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು. ನಾಡಿನ ರೈತರು, ಕೃಷಿ ಕಾರ್ಮಿಕರ ಬಗ್ಗೆ ಈ ಇಳಿವಯಸ್ಸಿನಲ್ಲಿಯೂ ದೇವೇಗೌಡ ಅವರಿಗೆ ಇರುವ ಕಳಕಳಿ ಅನುಕರಣೀಯ ಎಂದು ಬಣ್ಣಿಸಿದರು. ಈ ವೇಳೆ ಲೋಕಸಭೆ ಚುನಾವಣೆ ಕುರಿತು ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ದೇವೇಗೌಡ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ ಎಂದು ಹೇಳಲಾಗಿದೆ. ಚುನಾವಣೆಗೆ ಟಿಕೆಟ್ ನೀಡುವ ವಿಚಾರವು ಬಿಜೆಪಿ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಜೆಡಿಎಸ್ ಕೆಲಸ ಮಾಡಲಿದೆ ಎಂಬ ಮನವರಿಕೆಯನ್ನು ದೇವೇಗೌಡ ಅವರು ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.ಎಚ್‌ಡಿಕೆ ಜತೆ ಚರ್ಚೆ:ದೇವೇಗೌಡ ಅವರನ್ನು ಭೇಟಿ ಮಾಡುವ ಮುನ್ನ ಸುಧಾಕರ್ ಅವರು ಬಿಡದಿಗೆ ತೆರಳಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
-----------------ವಿಧಾನಸಭಾ ಚುನಾವಣೆ ಬಳಿಕ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಸಾರ್ವಜನಿಕವಾಗಿ ಓಡಾಟ ಆರಂಭಿಸಿದ್ದು, ಅದರ ಭಾಗವಾಗಿ ಕುಮಾರಸ್ವಾಮಿ ಮತ್ತು ದೇವೇಗೌಡ ಭೇಟಿಯಾಗಿದೆ ಎಂದು ಹೇಳಲಾಗಿದೆ.