ಯಾವುದೇ ಲೋಪವಾಗದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು

| Published : Sep 29 2024, 01:31 AM IST

ಯಾವುದೇ ಲೋಪವಾಗದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸೆ. ೨೯ರಂದು ಕನ್ನಡ ಭಾಷಾ ಪರೀಕ್ಷೆ ಜಿಲ್ಲೆಯ ೩೯ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.

ಹಾವೇರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸೆ. ೨೯ರಂದು ಕನ್ನಡ ಭಾಷಾ ಪರೀಕ್ಷೆ ಜಿಲ್ಲೆಯ ೩೯ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪರೀಕ್ಷೆ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ನ್ಯೂನತೆಗಳು ಆಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ನಿರ್ದೇಶನ ನೀಡಿದರು.ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ, ಗಡಿಯಾರ ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ಪರೀಕ್ಷಾ ವೀಕ್ಷಕರು ಈ ಕುರಿತಂತೆ ಪೂರ್ವ ಪರಿಶೀಲನೆ ನಡೆಸಿ ನಿಯಮಾನುಸಾರ ಮೂಲ ಸೌಕರ್ಯಗಳ ಕುರಿತಂತೆ ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದರು.ಪರೀಕ್ಷೆಗೆ ನಿಯೋಜಿತ ಮೇಲ್ವಿಚಾರಕರು ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆಯವರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದ ಅವರು, ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲೇ ಪ್ರಶ್ನೆ ಪತ್ರಿಕೆ ತೆರೆಯುವುದು ಹಾಗೂ ಉತ್ತರ ಪತ್ರಿಕೆ ಬಂಡಲ್ ಮಾಡಬೇಕು ಎಂದು ಸೂಚನೆ ನೀಡಿದರು.ಎಲೆಕ್ಟ್ರಾನಿಕ್ ಉಪಕರಣಗಳ ನಿಷೇಧ: ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.ವಸ್ತ್ರ ಸಂಹಿತೆ: ಪರೀಕ್ಷಾರ್ಥಿಗಳು ತುಂಬು ತೋಳಿನ ಶರ್ಟ್, ಟಿ ಶರ್ಟ್, ಪದರುಗಳುಳ್ಳ ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ. ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ(ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಲಾಗಿದೆ. ಸರಳ ಚಪ್ಪಲಿ ಧರಿಸಬೇಕು. ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೂಲ ಪರೀಕ್ಷಾ ಪ್ರವೇಶ ಪತ್ರ ತರಬೇಕು ಎಂದರು.೨೦೦ ಮೀಟರ್ ಪ್ರದೇಶ ನಿಷೇಧ: ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಉಮೇಶಪ್ಪ ಅವರು ಪರೀಕ್ಷೆ ಮಾರ್ಗಸೂಚಿಗಳ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ೧೪,೦೨೫ ಅಭ್ಯರ್ಥಿಗಳು ಪರೀಕ್ಷೆ ಹಾಜರಾಗಲಿದ್ದಾರೆ ಎಂದರು.ಸಭೆಯಲ್ಲಿ ಉಪವಿಭಾಗಾಧಿಕಾರಿ ಚನ್ನಪ್ಪ, ತಹಸೀಲ್ದಾರ್ ಶರಣಮ್ಮ ಕಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.