ಮತದಾನ ಹಕ್ಕು ತಪ್ಪದೇ ಚಲಾಯಿಸಿ: ಬಿ.ಕೆ.ರೆಹಮತ್‍ ವುಲ್ಲಾ

| Published : Mar 31 2024, 02:03 AM IST

ಸಾರಾಂಶ

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಚಿತ್ರದುರ್ಗ ಜಿಲ್ಲಾಡಳಿತ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಲಿಂಗತ್ವ ಅಲ್ಪಸಂಖ್ಯಾತರಿಗೂ ಕಾನೂನು ಅನ್ವಯ ಮತದಾನದ ಹಕ್ಕಿದ್ದು, ಚುನಾವಣೆಯ ಸಂದರ್ಭದಲ್ಲಿ ತಮ್ಮ ಮತದಾನ ಮಾಡುವ ಮೂಲಕ ಹಕ್ಕು ಚಲಾಯಿಸಬೇಕೆಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಕೆ.ರೆಹಮತ್‍ವುಲ್ಲಾ ಹೇಳಿದರು.

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೇವಾದಳ ಬಿಲ್ಡಿಂಗ್‍ನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಲಿಂಗತ್ವ ಅಲ್ಪಸಂಖ್ಯಾತರು ಸಾಮಾಜಿಕವಾಗಿ ಮುಖ್ಯವಾಹಿನಿಗೆ ಬರುವ ಅಗತ್ಯವಿದ್ದು, ಈ ಸಮುದಾಯಕ್ಕೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಿ ಸಮಾಜದಲ್ಲಿ ಸಮಾನವಾಗಿ ಬದುಕಲು ಅವಕಾಶ ಕಲ್ಪಿಸಿಕೊಡಬೇಕೆಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣಯ ಉಪನಿರ್ದೇಶಕಿ ಭಾರತಿಬಣಕಾರ್ ಮಾತನಾಡಿ ಮಂಗಳಮುಖಿಯವರು, ಮೇಲ್‍ಸೆಕ್ಸ್ ವರ್ಕರ್ ಹಾಗೂ ಹೆಚ್.ಐವಿ ಪಾಸಿಟಿವ್ ಇರುವಂತಹ ವ್ಯಕ್ತಿಗಳನ್ನು ಗುರುತಿಸಿ ಮಹಿಳಾ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ಕೊಡುವ ವ್ಯವಸ್ಥೆಯಿದೆ. ಇವರುಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಸೂಕ್ತ ದಾಖಲೆಗಳನ್ನು ಸಲ್ಲಿಸಿದೆ. ಅಂತಹ ವ್ಯಕ್ತಿಗಳನ್ನು ಗುರುತಿಸಿ ಇಲಾಖೆಯಿಂದ ಸೌಲಭ್ಯ ಕಲ್ಪಿಸಿಲಾಗುತ್ತದೆ ಎಂದು ಹೇಳಿದರು.

ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ಮಂಗಳಮುಖಿಯರು ಮತ್ತು ಮೇಲ್‍ಸೆಕ್ಸ್ ವರ್ಕರ್‍ಗಳ ಪುನರ್ವವಸತಿಗೆ ಶ್ರಮಿಸಲಾಗುತ್ತಿದ್ದು, ಈಗಾಗಲೇ ಚಿತ್ರದುರ್ಗ ಜಿಲ್ಲೆಯಲ್ಲಿ ಚಟುವಟಿಕೆಗಳನ್ನು ಆರಂಭಿಸುವ ಮೂಲಕ ಪುನರ್‍ವಸತಿ ಮತ್ತು ಜಾಗೃತಿ ಕಾರ್ಯವನ್ನು ಹಮ್ಮಿಕೊಳ್ಳ ಲಾಗಿದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಶೋಕ್, ರವಿ, ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಮಂಜುಳ ಇದ್ದರು.