ಅನುದಾನ ಬಿಡುಗಡೆ, ಹಳೆಯ ಪಿಂಚಣಿ ಯೋಜನೆ ಜಾರಿ, ಸೇವಾ ಭದ್ರತೆ ಸೇರಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ವಿಪ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನ.17ರಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಅನುದಾನ, ಪಿಂಚಣಿ ಸೇರಿ 20 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.17ರಂದು ಧಾರವಾಡದಲ್ಲಿ ಪ್ರತಿಭಟನೆಕನ್ನಡಪ್ರಭ ವಾರ್ತೆ ಗದಗ
ಅನುದಾನ ಬಿಡುಗಡೆ, ಹಳೆಯ ಪಿಂಚಣಿ ಯೋಜನೆ ಜಾರಿ, ಸೇವಾ ಭದ್ರತೆ ಸೇರಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ವಿಪ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನ.17ರಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.ಗದಗ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳು ಕಳೆದ ಎರಡು ಮೂರು ದಶಕಗಳಿಂದ ಅನುದಾನ ಹಾಗೂ ವಿವಿಧ ಸೌಲಭ್ಯಗಳ ಕೊರತೆ ಎದುರಿಸುತ್ತಿವೆ. ನಿವೃತ್ತ ನೌಕರರಿಗೆ ಪಿಂಚಣಿ ಸೌಲಭ್ಯವೂ ಸಮರ್ಪಕವಾಗಿ ದೊರೆಯದೆ ಸಂಕಷ್ಟ ಅನುಭವಿಸುವಂತಾಗಿದೆ. ಇದರಿಂದ ಶಿಕ್ಷಣ ಸಂಸ್ಥೆಗಳ ಅಸ್ತಿತ್ವಕ್ಕೂ ಧಕ್ಕೆಯಾಗಿದೆ.
ಸರ್ಕಾರದ ಮುಂದೆ 20 ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಗಿದ್ದು, ಅವುಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರು ಒಗ್ಗೂಡಿ ಹೋರಾಟ ನಡೆಸಲಿದ್ದಾರೆ. ನ.17ರಂದು ಧಾರವಾಡದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ನ.18ರಂದು ರಾಜ್ಯದ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವ ಮೂಲಕ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.2006ರ ನಂತರ ನೇಮಕಗೊಂಡ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಅನುದಾನರಹಿತ ಅವಧಿಯ ಸೇವೆಯನ್ನು ಪಿಂಚಣಿ ಹಾಗೂ ಇತರ ಸೌಲಭ್ಯಗಳಿಗೆ ಪರಿಗಣಿಸಬೇಕು. ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪನ್ನು ಮೇಲ್ಮನವಿ ಸಲ್ಲಿಸದೆ ಜಾರಿಗೊಳಿಸಬೇಕು. 1995ರ ನಂತರ ಆರಂಭವಾದ ಶಾಲಾ ಕಾಲೇಜುಗಳಿಗೂ ಅನುದಾನ ನೀಡಬೇಕು.
ಅನುದಾನಿತ ಸಂಸ್ಥೆಗಳ ನೌಕರರಿಗೂ ಸರ್ಕಾರಿ ನೌಕರರಿಗೆ ದೊರೆಯುವ ಎಲ್ಲ ಸೌಲಭ್ಯಗಳನ್ನು ವಿಸ್ತರಿಸಬೇಕು. ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ಸೇವಾ ಭದ್ರತೆ ಹಾಗೂ ಕನಿಷ್ಠ ವೇತನ ಕಲ್ಪಿಸಬೇಕು. ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು. ಶಿಕ್ಷಕರ ಹೆಚ್ಚುವರಿ ಕಾರ್ಯಭಾರದ ಹಿನ್ನೆಲೆಯಲ್ಲಿ ಸೂಕ್ತ ಸೌಲಭ್ಯ ಮತ್ತು ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ರವಿ ದಂಡಿನ, ಭೀಮಸಿಂಗ್ ರಾಠೋಡ, ಶ್ರೀನಿವಾಸ ಹುಯಿಲಗೋಳ, ಎಸ್.ಎಸ್. ಪಟ್ಟಣಶೆಟ್ಟಿ ಸೇರಿದಂತೆ ಇತರರು ಇದ್ದರು.ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಅನುದಾನಿತ ಶಿಕ್ಷಣ ಸಂಸ್ಥೆಗಳ ಕೊಡುಗೆ ಮಹತ್ವದ್ದಾಗಿದ್ದರೂ, ಅವುಗಳ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಹೀಗಾಗಿ ಎಲ್ಲ ಆಡಳಿತ ಮಂಡಳಿ ಹಾಗೂ ನೌಕರರು ಪಕ್ಷಾತೀತವಾಗಿ ಹೋರಾಟದಲ್ಲಿ ಭಾಗವಹಿಸಿ ಬೇಡಿಕೆಗಳ ಈಡೇರಿಕೆಗೆ ಒತ್ತಡ ಹೇರಬೇಕು.ಎಸ್.ವಿ. ಸಂಕನೂರ, ವಿಪ ಸದಸ್ಯ